ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಲಿಂಗ ಪತ್ತೆ: ಬೀಗಮುದ್ರೆ ಹಾಕಿ

ಅಧಿಕಾರಿಗಳಿಗೆ ಡಿಎಚ್‌ಒ ಜಗದೀಶ್‌ ಖಡಕ್‌ ಸೂಚನೆ
Last Updated 6 ಏಪ್ರಿಲ್ 2022, 14:23 IST
ಅಕ್ಷರ ಗಾತ್ರ

ಕೋಲಾರ: ‘ಭ್ರೂಣ ಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್‌ ಸೆಂಟರ್‌ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿ ಬೀಗಮುದ್ರೆ ಹಾಕಿ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್‌ ಇಲಾಖೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಇಲ್ಲಿ ಬುಧವಾರ ನಡೆದ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆಯ (ಪಿ.ಸಿ ಮತ್ತು ಪಿ.ಎನ್.ಡಿ.ಟಿ) ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಪ್ರಪಂಚದಲ್ಲಿ ಮಾನವ ಜನ್ಮ ಶ್ರೇಷ್ಠವಾದದ್ದು. ಭ್ರೂಣ ಲಿಂಗ ಪತ್ತೆಯು ಅನಾಗರಿಕ ಸಮಾಜದ ಲಕ್ಷಣ. ಸ್ಕ್ಯಾನಿಂಗ್ ಮೂಲಕ ಭ್ರೂಣ ಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧ’ ಎಂದರು.

‘ಇತ್ತೀಚಿನ ವರ್ಷಗಳಲ್ಲಿ ಅನಕ್ಷರಸ್ಥರಿಗಿಂತ ಅಕ್ಷರಸ್ಥರೇ ಭ್ರೂಣ ಲಿಂಗ ಪತ್ತೆಯ ತಪ್ಪು ಮಾಡುತ್ತಿದ್ದಾರೆ. ಭ್ರೂಣ ಹತ್ಯೆ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವೆಂದು ಎಲ್ಲಾ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಫಲಕ ಅಳವಡಿಸಬೇಕು. ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆಯ ಬಗ್ಗೆ ಜನರಿಗೆ ಅರಿವು ಮೂಡಿಸಿ’ ಎಂದು ತಿಳಿಸಿದರು.

‘ಸಮಾಜದಲ್ಲಿ ಗಂಡು-ಹೆಣ್ಣು ಒಂದೇ ಎಂಬ ಭಾವನೆ ತರುವುದು ಮುಖ್ಯ. ಇಲಾಖೆ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಕಣ್ಗಾವಲು ಇರಿಸಿ ಆಗಾಗ್ಗೆ ಪರಿಶೀಲನೆ ಮಾಡಬೇಕು. ಭ್ರೂಣ ಲಿಂಗ ಪತ್ತೆ ಮಾಡುತ್ತಿರುವ ಸೆಂಟರ್‌ಗಳ ವೈದ್ಯರಿಗೆ ಕಾನೂನಿನ ಬಿಸಿ ಮುಟ್ಟಿಸಬೇಕು. ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ’ ಎಂದು ಆದೇಶಿಸಿದರು.

ಕಾನೂನು ಪ್ರಕಾರ ಶಿಕ್ಷೆ: ‘ಜಿಲ್ಲೆಯಲ್ಲಿ ಒಟ್ಟು 76 ಸ್ಕ್ಯಾನಿಂಗ್ ಸೆಂಟರ್‌ಗಳಿವೆ. ಗರ್ಭಿಣಿಯರು ಸ್ವಯಂಪ್ರೇರಿತರಾಗಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿಸುವುದು ಕಂಡುಬಂದರೆ ಆ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಇಲಾಖೆಯಿಂದ ಬಹುಮಾನ ಕೊಡುತ್ತೇವೆ. ಗಂಡ-ಹೆಂಡತಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣ ಲಿಂಗ ಪತ್ತೆ ಹಚ್ಚುವ ಬಗ್ಗೆ ಕೇಳುವುದು ತಪ್ಪು. ಈ ತಪ್ಪುಮಾಡಿದರೆ ಇಬ್ಬರಿಗೂ ಕಾನೂನು ಪ್ರಕಾರ ಶಿಕ್ಷೆ ನೀಡಲಾಗುವುದು’ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್‌ಕುಮಾರ್ ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಬಯ್ಯಪ್ಪರೆಡ್ಡಿ, ಡಾ.ಮಂಜುನಾಥ್‌, ಕಾನೂನು ಸಲಹೆಗಾರ ವಿ.ಮಂಜುನಾಥ್, ನವಜೀವನ ಆರೋಗ್ಯದ ಕೇಂದ್ರದ ಜೋಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT