ಗುರುವಾರ , ಜುಲೈ 29, 2021
22 °C
ಮೇಕೆ, ಕೋಳಿಗಳೊಂದಿಗೆ ತಾಲ್ಲೂಕು ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರ ಧರಣಿ

ಕೋಲಾರ: ಕೆರೆ, ಸರ್ಕಾರಿ ಜಮೀನು ಹುಡುಕಿ ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ತಾಲ್ಲೂಕಿನಾದ್ಯಂತ ಕೆರೆ, ಮುಖ್ಯಕಾಲುವೆ ಮತ್ತು ಸರ್ಕಾರಿ ಜಮೀನುಗಳನ್ನು ಹುಡುಕಿ ಕೊಡಲು ವಿಶೇಷ ತಂಡ ರಚನೆ ಮಾಡಬೇಕು. ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಬಡಾವಣೆ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಮೇಕೆ ಮತ್ತು ಕೋಳಿಗಳೊಂದಿಗೆ ಧರಣಿ ನಡೆಸಿದರು.

ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ‘ಸರ್ಕಾರದ ವೇತನ ಪಡೆದು ಜನ ಸಾಮಾನ್ಯರ ಕೆಲಸ ಮಾಡಬೇಕಾದ ಕಂದಾಯ, ಸರ್ವೆ, ನೋಂದಣಿ ಇಲಾಖೆ ಅಧಿಕಾರಿಗಳು ಸರ್ಕಾರಿ ಜಮೀನುಗಳನ್ನು ರಾಜಾರೋಷವಾಗಿ ಬಹಿರಂಗ ಹರಾಜಿಗೆ ಇಟ್ಟಿದ್ದಾರೆ’ ಎಂದು ಆರೋಪಿಸಿದರು.

‘ರಾತ್ರೋರಾತ್ರಿ ನಕಲಿ ದಾಖಲೆ ಸೃಷ್ಟಿಮಾಡಿ ಕೆರೆ, ಮುಖ್ಯ ಕಾಲುವೆ ಮತ್ತು ಗುಂಡು ತೋಪುಗಳನ್ನು ಮಾರಾಟಕ್ಕಿಟ್ಟು, ಬಡಾವಣೆಗಳನ್ನು ಮಾಡಿ ಕೋಟಿ ಕೋಟಿ ಹಣ ಲೂಟಿ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ಟೇಕಲ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗೋಮಾಳ ಜಮೀನುಗಳಲ್ಲಿ ಗಣಿಗಾರಿಕೆ ನಡೆಯುವ ಬಗ್ಗೆ ಗಣಿ ಸಚಿವರ ಮುಂದೆಯೇ ಸಂಸದರು ಮಾಹಿತಿ ನೀಡಿದರೂ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಗೈಗೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಲಕ್ಕೂರು ಹೋಬಳಿ ವ್ಯಾಪ್ತಿಯಲ್ಲಿ ಕೆರೆ ಕುಂಟೆಗಳನ್ನು ಒತ್ತುವರಿ ಮಾಡಿಕೊಂಡು ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಲೇಔಟ್‌ಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡುತ್ತಿದ್ದರೂ ತಾಲ್ಲೂಕು ಆಡಳಿತ ಮೌನವಾಗಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ತಾಲ್ಲೂಕಿನ ಕೆರೆಗಳಲ್ಲಿ ಮಣ್ಣು ಮಾಫಿಯಾ ಎಗ್ಗಿಲ್ಲದೆ ಸಾಗುತ್ತಿದೆ. ಆದರೂ ಇಲ್ಲಿನ ಜನ ಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಸರ್ಕಾರಿ ಸ್ವತ್ತುಗಳನ್ನು ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಕಿಡಿಕಾರಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಮಹಿಳಾಜಿಲ್ಲಾ ಘಟಕದ ಅಧ್ಯಕ್ಷೆ ಎ.ನಳಿನಿ, ಜಿಲ್ಲಾ ಘಟಕದ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಈಕಂಬಹಳ್ಳಿ ಮಂಜುನಾಥ್, ಹನುಮಯ್ಯ, ನಾರಾಯಣಸ್ವಾಮಿ, ಅನಿಲ್, ರೂಪೇಶ್, ಮಂಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು