ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿನ್ನಾಭಿಪ್ರಾಯ ಮರೆತು ಗೆಲುವಿಗೆ ಶ್ರಮಿಸಿ: ಶಾಂತವೀರ್ ನಾಯ್ಕ್‌ ಸಲಹೆ

Last Updated 9 ಏಪ್ರಿಲ್ 2019, 14:59 IST
ಅಕ್ಷರ ಗಾತ್ರ

ಕೋಲಾರ: ‘ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ನಡುವಿನ ಭಿನ್ನಾಭಿಪ್ರಾಯದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಈ ತಪ್ಪು ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಬಾರದು’ ಎಂದು ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಶಾಂತವೀರ್ ನಾಯ್ಕ್ ಹೇಳಿದರು.

ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯು ಇಲ್ಲಿ ಮಂಗಳವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆ ಹಾಗೂ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಕಾರ್ಯಕರ್ತರು ಮತ್ತು ಮುಖಂಡರು ಪರಸ್ಪರ ಭಿನ್ನಾಭಿಪ್ರಾಯ ಮರೆತು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು’ ಎಂದರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅನೇಕ ಜನಪರ ಯೋಜನೆ ಜಾರಿಗೊಳಿಸಿದೆ. ಕಾಂಗ್ರೆಸ್‌ ಸಾಧನೆಗಳನ್ನು ಮುಖಂಡರು, ಕಾರ್ಯಕರ್ತರು ಜನರಿಗೆ ತಿಳಿಸದೆ ಭಿನ್ನಾಭಿಪ್ರಾಯ ಇಟ್ಟುಕೊಂಡಿದ್ದರಿಂದ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿಲ್ಲ. ಹೀಗಾಗಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು ಮುಖ್ಯಮಂತ್ರಿ ಸ್ಥಾನ ಆ ಪಕ್ಷಕ್ಕೆ ಬಿಟ್ಟು ಕೊಡುವಂತಾಯಿತು’ ಎಂದು ಹೇಳಿದರು.

‘5 ವರ್ಷ ಪ್ರಧಾನಿಯಾಗಿದ್ದ ನರೇಂದ್ರ ಮೋದಿ ಜನರಿಗೆ ಸುಳ್ಳು ಭರವಸೆ ನೀಡುತ್ತಾ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅವರು ದೇಶ ಅಭಿವೃದ್ಧಿ ಮಾಡುವಲ್ಲಿ ವಿಫಲರಾಗಿದ್ದಾರೆ. ಯಡಿಯೂರಪ್ಪ ಬಡವರ ಹೆಸರಿನಲ್ಲಿ ಶಿವಮೊಗ್ಗ, ಬೆಂಗಳೂರಿನಲ್ಲಿ ಮನೆ ಕಟ್ಟಿಸಿಕೊಂಡು ಜೈಲಿಗೆ ಹೋಗಿ ಬಂದಿದ್ದಾರೆ’ ಎಂದು ಟೀಕಿಸಿದರು.

23 ಸ್ಥಾನ ಖಚಿತ: ‘ಬೆಂದು ಹೋಗಿದ್ದ ಕೋಲಾರವನ್ನು ಬಂಗಾರ ಮಾಡಿದ ಸಂಸದ ಕೆ.ಎಚ್.ಮುನಿಯಪ್ಪ ಅವರನ್ನು 8ನೇ ಬಾರಿಗೆ ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕು. ಈ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು 23 ಸ್ಥಾನ ಗೆಲ್ಲುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಬಿಜೆಪಿಯದ್ದು ಮನ್‌ ಕಿ ಬಾತ್. ಆದರೆ, ಕಾಂಗ್ರೆಸ್‌ನದು ಕಾಮ್‌ ಕಿ ಬಾತ್. ಬಿಜೆಪಿಯವರು ಜನರನ್ನು ಯಾಮಾರಿಸಿ ಅಧಿಕಾರಕ್ಕೆ ಬರುತ್ತಿದ್ದಾರೆ. ಮೋದಿ ಪ್ರಚಾರ ಗಿಟ್ಟಿಸಿಕೊಂಡೇ ಅಧಿಕಾರ ಚಲಾಯಿಸಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ಮನಮೋಹನ್‌ಸಿಂಗ್ ಜಿಡಿಪಿ ಉತ್ತಮಗೊಳಿಸಿದರು. ಆದರೆ, ಮೋದಿ ಆಡಳಿತಾವಧಿಯಲ್ಲಿ ಜಿಡಿಪಿ ಪಾತಾಳಕ್ಕೆ ಕುಸಿದಿದೆ’ ಎಂದು ದೂರಿದರು.

ಆಣೆ ಮಾಡುತ್ತೇನೆ: ‘ಜಿಲ್ಲೆಯ ಹಿಂದಿನ ಹಾಗೂ ಈಗಿನ ಎಲ್ಲಾ ಶಾಸಕರ ಪರಿಶ್ರಮದಿಂದ ಕೆ.ಸಿ ವ್ಯಾಲಿ ಯೋಜನೆ ಜಾರಿಯಾಗಿದೆ. ಯೋಜನೆಗೆ ಮುನಿಯಪ್ಪ ಅವರು ಅಡ್ಡಿಪಡಿಸಿಲ್ಲ. ಈ ವಿಚಾರದಲ್ಲಿ ಮುನಿಯಪ್ಪರ ವಿರುದ್ಧ ಅಪಪ್ರಚಾರ ಮಾಡುತ್ತಿರುವವರು ಎದುರು ಬಂದರೆ ಕೋಲಾರಮ್ಮ ದೇವಿ ಮೇಲೆ ಆಣೆ ಮಾಡಿ ಹೇಳುತ್ತೇನೆ’ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಸವಾಲು ಹಾಕಿದರು.

‘ಜಿಲ್ಲಾ ಕೇಂದ್ರದಲ್ಲಿ ಏ.13ರಂದು ಬೃಹತ್‌ ಚುನಾವಣಾ ಪ್ರಚಾರ ಸಭೆ ನಡೆಯುತ್ತದೆ. ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್ ಭಾಗವಹಿಸುತ್ತಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಭೆ ಯಶಸ್ವಿಗೊಳಿಸಬೇಕು’ ಎಂದು ಕೋರಿದರು.

ಕಾರ್ಮಿಕರಿಗೆ ರಕ್ಷಣೆ: ‘ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಕಾರ್ಮಿಕರ ರಕ್ಷಣೆ ಕಾಯ್ದೆ ಜಾರಿಗೆ ಬಂದಿದ್ದರಿಂದ 80 ಕೋಟಿ ಕಾರ್ಮಿಕರಿಗೆ ರಕ್ಷಣೆ ಸಿಕ್ಕಿದೆ. 2009ರಲ್ಲಿ ರಾಜ್ಯದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಕಲ್ಯಾಣ ಮಂಡಳಿ ರಚನೆಯಾಗಿದೆ. ನೋಂದಾಯಿತ ಕಾರ್ಮಿಕರಿಗೆ ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣ, ವಿದ್ಯಾರ್ಥಿವೇತನ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್ ವಿವರಿಸಿದರು.

‘ಸರ್ಕಾರದ ಸವಲತ್ತುಗಳ ಬಗ್ಗೆ ಕಾರ್ಮಿಕರಿಗೆ ಇಲ್ಲ. ಹೀಗಾಗಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಸಮಿತಿ ಪದಾಧಿಕಾರಿಗಳು ಸವಲತ್ತುಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಅರ್ಹರಿಗೆ ಸೌಲಭ್ಯ ದೊರಕಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ರತ್ನಮ್ಮ, ಜಿಲ್ಲಾ ಕಾಂಗ್ರೆಸ್ ಘಟಕದ ಖಜಾಂಚಿ ರಾಮ್‌ಪ್ರಸಾದ್, ಕಾರ್ಯದರ್ಶಿ ಮಂಜುಳಾ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ವಕ್ಫ್‌ ಬೋರ್ಡ್‌ ಮಾಜಿ ಅಧ್ಯಕ್ಷ ಇಕ್ಬಾಲ್ ಅಹಮ್ಮದ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT