ಭಾನುವಾರ, ಏಪ್ರಿಲ್ 18, 2021
33 °C

ತ್ಯಾಗ–ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರನ್ನು ಸ್ಮರಿಸಬೇಕು’ ಎಂದು ನಗರಸಭೆ ಆಯುಕ್ತ ಆರ್.ಶ್ರೀಕಾಂತ್ ಹೇಳಿದರು.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಲ್ಲಿ ಮಂಗಳವಾರ ನಡೆದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ‘ಮಹಾತ್ಮ ಗಾಂಧೀಜಿ, ಸರ್ದಾರ್‌ ವಲ್ಲಭಾಬಾಯಿ ಪಟೇಲ್, ಜವಾಹರಲಾಲ್‌ ನೆಹರೂ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು.

‘ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವವು ಯುವ ಜನರಿಗೆ ದೇಶದ ಇತಿಹಾಸ ನೆನಪಿಸುವ ಕಾರ್ಯವಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಮಹಾತ್ಮ ಗಾಂಧೀಜಿ ಪಾದಯಾತ್ರೆ ಮೂಲಕ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದರು’ ಎಂದರು.

‘ಸ್ವಾತಂತ್ರ್ಯ ಅಮೃತ ಮಹೋತ್ಸವ ಕೇವಲ ಸಂಭ್ರಮಾಚರಣೆಯಲ್ಲ, ವೈಭವೀಕರಣವೂ ಅಲ್ಲ. ಸ್ವತಂತ್ರ ಭಾರತವು ಹಿಂದೆ, ಈಗ ಮತ್ತು ಮುಂದೆ ಎತ್ತ ಸಾಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದೇಶ ಕಟ್ಟಲು ಹಿರಿಯರು ಮಾಡಿದ ಶ್ರಮ ಸಾರ್ಥಕವಾಗಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ದೇಶಾಭಿಮಾನ ಹೃದಯಂತರಾಳದಲ್ಲಿ ಮೂಡಬೇಕು’ ಎಂದು ಕಿವಿಮಾತು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಎನ್.ಮಂಜುನಾಥ್, ಜಿಲ್ಲಾ ಯುವಜನ ಅಧಿಕಾರಿ ಎಸ್.ಸರಣ್ಯಾ, ಭಾರತ್‌ ಸ್ಕೌಟ್ಸ್ ಅಂಡ್ ಗೈಡ್ಸ್‌ ಜಿಲ್ಲಾ ಸಂಘಟಕ ವಿ.ಬಾಬು, ರಾಷ್ಟ್ರೀಯ ಸೇವಾ ಯೋಜನೆ ನೋಡಲ್‌ ಅಧಿಕಾರಿ ಎ.ಆರ್.ಹರೀಶ್ ಪಾಲ್ಗೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.