ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌, ನಿಷೇಧಾಜ್ಞೆ ಜಾರಿ

ಅಗತ್ಯ ವಸ್ತುಗಳ ವಹಿವಾಟಿಗೆ ಅನುಮತಿ:
Last Updated 23 ಮೇ 2020, 13:59 IST
ಅಕ್ಷರ ಗಾತ್ರ

ಕೋಲಾರ: ಸರ್ಕಾರದ ಆದೇಶದಂತೆ ಜಿಲ್ಲೆಯಾದ್ಯಂತ ಭಾನುವಾರ (ಮೇ 24) ಸಂಪೂರ್ಣ ಲಾಕ್‌ಡೌನ್‌ ಇರಲಿದ್ದು, ಅಗತ್ಯ ವಸ್ತುಗಳ ವಹಿವಾಟಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು.

ಇಲ್ಲಿನ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೊರೊನಾ ಸೋಂಕಿತರ ಚಿಕಿತ್ಸೆಯ ಸಿದ್ಧತೆ ಪರಿಶೀಲಿಸಿ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್‌ಗೆ ಆದೇಶಿಸಲಾಗಿದೆ. ಜತೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ’ ಎಂದರು.

‘ಭಾನುವಾರದ ಲಾಕ್‌ಡೌನ್‌ ಮೊದಲ ಹಂತದ ಲಾಕ್‌ಡೌನ್‌ ಮಾದರಿಯಲ್ಲಿ ಇರಲಿದ್ದು, ತರಕಾರಿ, ಹಾಲು, ಹಣ್ಣು, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಅಂಗಡಿಗಳ ಬಳಿ ಜನರು ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು’ ಎಂದು ಸೂಚಿಸಿದರು.

ಶ್ರೀನಿವಾಸಪುರ ಎಪಿಎಂಸಿಯಲ್ಲಿ ಮಾವಿನ ವಹಿವಾಟಿಗೆ ಎಪಿಎಂಸಿ ಕಾರ್ಯದರ್ಶಿ ಅನುಮತಿ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಅವರು ಮಾವು ವಹಿವಾಟಿಗೆ ಅವಕಾಶ ನೀಡಬಾರದೆಂದು ಸರ್ಕಾರಕ್ಕೆ ಸ್ಪಷ್ಟನೆ ನೀಡಿದ್ದರು. ಮಾವು ವಹಿವಾಟು ನಡೆದರೆ ಆಗುವ ಅನಾಹುತದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ್ದರು’ ಎಂದು ಹೇಳಿದರು.

‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಮಾವು ವಹಿವಾಟಿನಿಂದ ಆಗುವ ಕೊರೊನಾ ಸೋಂಕಿನ ತೀವ್ರತೆಯ ಅರಿವಿದೆ. ಅವರ ನಿರ್ದೇಶನದಂತೆ ಜಿಲ್ಲಾಡಳಿತವು ಮಾವು ವಹಿವಾಟಿಗೆ ಕ್ರಮ ವಹಿಸಲಿದೆ’ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾಸ್ಪತ್ರೆ ಸಜ್ಜು: ‘ಕೊರೊನಾ ಸೋಂಕಿತರ ಚಿಕಿತ್ಸೆಗೆ ಎಸ್ಎನ್‌ಆರ್‌ ಜಿಲ್ಲಾ ಆಸ್ಪತ್ರೆ ಸಜ್ಜಾಗಿದೆ. ಸರ್ಕಾರದ ನೆರವು ಹಾಗೂ ಖಾಸಗಿ ಕಂಪನಿಗಳ ಸಿಎಸ್‍ಆರ್ ನಿಧಿಯಡಿ ಆಸ್ಪತ್ರೆಯಲ್ಲಿ 40 ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕ ಮತ್ತು 35 ವೆಂಟಿಲೇಟರ್‌ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

‘ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೂ ಸಮರ್ಥವಾಗಿ ನಿಭಾಯಿಸುವ ಮೂಲಕ ಖಾಸಗಿ ಆಸ್ಪತ್ರೆಗಳ ಅಸಹಕಾರಕ್ಕೆ ತಕ್ಕ ಉತ್ತರ ನೀಡಲು ಜಿಲ್ಲಾ ಆಸ್ಪತ್ರೆಯಲ್ಲಿ ಸಿದ್ಧತೆ ನಡೆಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ಇಲ್ಲದಿದ್ದರೆ ಹೊರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಿಸಿಕೊಳ್ಳಲು ಅವಕಾಶವಿದೆ. ಜಿಲ್ಲೆ 81 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೊರ ಗುತ್ತಿಗೆ ಸಿಬ್ಬಂದಿ ನೇಮಿಸಿಕೊಳ್ಳಲಾಗುವುದು’ ಎಂದು ವಿವರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್‌ಕುಮಾರ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ಕ್ಷಯ ರೋಗ ನಿಯಂತ್ರಣಾಕಾರಿ ಡಾ.ಜಗದೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT