ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣೇಶ ಮೂರ್ತಿ ಪ್ರತಿಷ್ಠಾಪನೆ: ಅನುಮತಿ ಕಡ್ಡಾಯ

ಸುರಕ್ಷತಾ ಕ್ರಮ ಕೈಗೊಳ್ಳಿ: ಸಭೆಯಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ಸೂಚನೆ
Last Updated 28 ಆಗಸ್ಟ್ 2019, 15:19 IST
ಅಕ್ಷರ ಗಾತ್ರ

ಕೋಲಾರ: ‘ಸಾರ್ವಜನಿಕ ಸ್ಥಳದಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹಾಗೂ ವಿಸರ್ಜನೆಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದರು.

ಗೌರಿ– ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ‘ರಸ್ತೆ ಬದಿಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪೊಲೀಸ್ ಠಾಣೆ, ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು’ ಎಂದು ತಿಳಿಸಿದರು.

‘ಸಾರ್ವಜನಿಕರ ರಸ್ತೆ, ಬಡಾವಣೆಗಳು ಅಥವಾ ಮೈದಾನಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸುವವರು ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪೆಂಡಾಲ್‌ಗಳಲ್ಲಿ ಅಗ್ನಿ ಅನಾಹುತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಯಾವುದೇ ಅವಘಡ ಸಂಭವಿಸಿದರೂ ಅದಕ್ಕೆ ಆಯೋಜಕರೇ ಹೊಣೆಗಾರರು’ ಎಂದು ಎಚ್ಚರಿಕೆ ನೀಡಿದರು.

‘ರಸ್ತೆಯಲ್ಲಿ ಪೆಂಡಾಲ್ ಹಾಕಲು ಲೋಕೋಪಯೋಗಿ ಇಲಾಖೆಯಿಂದ ಮತ್ತು ವಿದ್ಯುತ್ ಬಳಕೆಗೆ ಬೆಸ್ಕಾಂ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯಬೇಕು. ಧ್ವನಿವರ್ಧಕ ಅಳವಡಿಕೆಗೆ ಪೊಲೀಸರಿಂದ ಅನುಮತಿ ಪಡೆಯಬೇಕು. ಸ್ವಂತ ಸ್ಥಳದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಯಾವುದೇ ಅವಘಡ ಸಂಭವಿಸಿದರೆ ಸ್ಥಳದ ಮಾಲೀಕರೇ ಜವಾಬ್ದಾರರು’ ಎಂದು ಹೇಳಿದರು.

ನಿಗಾ ವಹಿಸಬೇಕು: ‘ಮೂರ್ತಿ ಪ್ರತಿಷ್ಠಾಪನಾ ಸ್ಥಳ ಹಾಗೂ ಪೆಂಡಾಲ್‌ಗಳಲ್ಲಿ ರಾತ್ರಿ ವೇಳೆ ಸ್ವಯಂ ಸೇವಕರು ಹಾಜರಿದ್ದು, ಅಪರಾಧ ಚಟುವಟಿಕೆ ನಡೆಯದಂತೆ ನಿಗಾ ವಹಿಸಬೇಕು. ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಕೆರೆ ಅಥವಾ ಬಾವಿಗೆ ಇಳಿಯುವಾಗ ಅಪಾಯ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ 25 ಕೆರೆ ಭರ್ತಿಯಾಗಿದ್ದು, ಈ ಕೆರೆಗಳ ನೀರನ್ನು ಮಲೀನಗೊಳಿಸಬಾರದು. ಎಲ್ಲೆಂದರಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಬಾರದು. ಅನುಮತಿ ನೀಡುವಾಗಲೇ ಈ ಬಗ್ಗೆ ಅರಿವು ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಪ್ರಾಣಾಪಾಯ ಸಾಧ್ಯತೆ: ‘ಗ್ರಾಮೀಣ ಭಾಗದ ಕೆರೆ ಕುಂಟೆಗಳಲ್ಲಿ ನೀರಿಲ್ಲ. ಹೀಗಾಗಿ ಜನ ಕೃಷಿ ಹೊಂಡಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡಲು ಮುಂದಾಗುತ್ತಾರೆ. ಇದರಿಂದ ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯಿದ್ದು, ಕೃಷಿ ಹೊಂಡಗಳನ್ನು ಮೂರ್ತಿ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಬೇಕು’ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಉಪಾಧ್ಯಕ್ಷ ಕೆ.ನಾರಾಯಣಗೌಡ ಮನವಿ ಮಾಡಿದರು.

‘ಪೊಲೀಸರು ನಿಗದಿಪಡಿಸಿದ ಮಾರ್ಗ ಅಥವಾ ರಸ್ತೆಯಲ್ಲಿ ಗಣೇಶ ಮೂರ್ತಿಗಳ ಮೆರವಣಿಗೆ ನಡೆಸಬೇಕು. ಮೂರ್ತಿ ಪ್ರತಿಷ್ಠಾಪನೆ ದಿನದಿಂದ ವಿಸರ್ಜನೆವರೆಗೂ ಯಾವುದೇ ಅಹಿತಕರ ಘಟನೆ ನಡೆದರೂ ಅದಕ್ಕೆ ಸಂಘಟಕರೇ ಹೊಣೆಗಾರರು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬ ಆಚರಿಸಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ ಮನವಿ ಮಾಡಿದರು.

ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಎಂ.ಎಸ್.ಸುಜಿತಾ ಮಹಮ್ಮದ್‌, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್ಪಿಗಳಾದ ಉಮೇಶ್‌ಕುಮಾರ್, ಚೌಡಪ್ಪ, ಇನ್‌ಸ್ಪೆಕ್ಟರ್‌ ಫಾರುಕ್‌ ಪಾಷಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT