ಶನಿವಾರ, ಜನವರಿ 18, 2020
20 °C

ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಕೈಗಾರಿಕೆಗಳು ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ನೀಡಿ ಅವರನ್ನು ಉದ್ಧಾರ ಮಾಡಬೇಕು. ಇದರ ಜತೆಗೆ ಕಂಪನಿಗಳು ಅಭಿವೃದ್ಧಿಯಾಗಬೇಕು’ ಎಂದು ರಾಜ್ಯ ವಿಧಾನಮಂಡಲ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಕುಮಾರ್ ಬಂಗಾರಪ್ಪ ಹೇಳಿದರು.

ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ‘ಜಿಲ್ಲೆಯ ವೇಮಗಲ್ ಸೇರಿದಂತೆ ಹಲವೆಡೆ ಇರುವ ಕೈಗಾರಿಕೆಗಳಿಗೆ ಬೆಂಗಳೂರಿನಿಂದ ಸಿಬ್ಬಂದಿಯನ್ನು ಬಸ್‌ನಲ್ಲಿ ಕರೆತರಲಾಗುತ್ತಿದೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುತ್ತಿಲ್ಲ’ ಎಂದು ಆರೋಪಿಸಿದರು.

‘ಕೈಗಾರಿಕೆಗಳು ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‍ಆರ್) ಅಗತ್ಯವಿಲ್ಲದ ಕಡೆ ಬಸ್ ನಿಲ್ದಾಣ ನಿರ್ಮಿಸುತ್ತಿವೆ. ಜತೆಗೆ ಅನವಶ್ಯಕ ಕಾರ್ಯಗಳಿಗೆ ಹಣ ವಿನಿಯೋಗ ಮಾಡುತ್ತಿವೆ. ಕೈಗಾರಿಕೆಗಳ ಆಡಳಿತ ಮಂಡಳಿಯು ಕನಿಷ್ಠ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರ್ ಬಂಗಾರಪ್ಪ, ‘ಕೈಗಾರಿಕೆಗಳು ಉದ್ಯೋಗದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಸ್ಥಳೀಯರಿಗೆ ಅಗತ್ಯ ಕೌಶಲ ತರಬೇತಿ ನೀಡುವ ಮೂಲಕ ಅವರಿಗೆ ಕೆಲಸ ಸಿಗುವಂತೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಕಂಪನಿಗಳು ಸಿಎಸ್‍ಆರ್ ಅಡಿ ನೇರವಾಗಿ ಕೆಲಸ ಮಾಡುವುದು ಸರಿಯಲ್ಲ. ಕಂಪನಿಯಿರುವ ಸುತ್ತಮುತ್ತಲಿನ ಜನ, ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಈ ಬಗ್ಗೆ ಕೈಗಾರಿಕೆಗಳಿಗೆ ಸೂಚನೆ ನೀಡಿ’ ಎಂದು ಅಧಿಕಾರಿಗಳಿಗೆ ಹೇಳಿದರು.

‘ಸಿದ್ಧ ಉಡುಪು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಕ್ಷಯ ರೋಗಕ್ಕೆ ತುತ್ತಾಗುತ್ತಿದ್ದಾರೆ. ಆದ ಕಾರಣ ಜಿಲ್ಲೆಯ ಸಿದ್ಧ ಉಡುಪು ಕಾರ್ಖಾನೆಗಳಲ್ಲಿನ ಸಿಬ್ಬಂದಿಯ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹೋಬಳಿಗೊಂದು ಕ್ರೀಡಾಂಗಣ: ‘ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹೋಬಳಿಗೊಂದು ಕ್ರೀಡಾಂಗಣ ನಿರ್ಮಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಹೀಗಾಗಿ ಜಿಲ್ಲೆಯಲ್ಲಿ ಕ್ರೀಡಾಂಗಣ ನಿರ್ಮಾಣ ಸಂಬಂಧ ಪ್ರಸ್ತಾವ ಕಳುಹಿಸಿಕೊಟ್ಟರೆ ಅನುದಾನ ಬಿಡುಗಡೆ ಮಾಡಿಸುತ್ತೇವೆ’ ಎಂದು ಭರವಸೆ ನೀಡಿದರು.

‘ಕೋಲಾರ ಜಿಲ್ಲೆಯು ರಾಜ್ಯದ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿದೆ. ಜತೆಗೆ ಚೆನ್ನೈ ಹಾಗೂ ತಿರುಪತಿಗೆ ಹೋಗುವ ಮಾರ್ಗದಲ್ಲಿದೆ. ಜಿಲ್ಲೆಯನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿದರೆ ಉಪ ರಾಜಧಾನಿಯಾಗುವ ಎಲ್ಲಾ ಅವಕಾಶ ಕೋಲಾರಕ್ಕಿದೆ’ ಎಂದು ಅಭಿಪ್ರಾಯಪಟ್ಟರು.

‘ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕು. ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಮಾಡಿದರೆ ಪ್ರವಾಸಿಗರನ್ನು ಸೆಳೆಯಬಹುದು’ ಎಂದು ಸಲಹೆ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು