ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಭವನ ನಿರ್ಮಾಣಕ್ಕೆ ಅನುದಾನ

ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆಯಲ್ಲಿ ಆದರ್ಶ ಶಿಕ್ಷಕರಿಗೆ ಸನ್ಮಾನ
Last Updated 10 ಜನವರಿ 2021, 4:41 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದಿರುವ ಗುರುಭವನಕ್ಕೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸಲು ನೌಕರರ ಸಂಘದ ರಾಜ್ಯ ಘಟಕ ಅಧ್ಯಕ್ಷ ಷಡಕ್ಷರಿ ಒಪ್ಪಿಗೆ ನೀಡಿದ್ದಾರೆ. ಪ್ರಸ್ತಾವ ಸಲ್ಲಿಸಿದರೆ ಶೀಘ್ರ ಕ್ರಮ ವಹಿಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಜಿ.ಸುರೇಶ್‌ ಬಾಬು ತಿಳಿಸಿದರು.

ಶನಿವಾರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದ ಕೆಇಬಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಆದರ್ಶ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.‌

ಶಿಕ್ಷಕರ ಕಲ್ಯಾಣ ನಿಧಿಯಿಂದ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರನ್ನು ಒತ್ತಾಯಿಸಲಾಗಿದೆ ಎಂದರು.

ಅಬಲೆಯರಿಗೆ ಶಿಕ್ಷಣ ಸಂಕಲ್ಪ: ಸಮಾಜದ ತೀವ್ರ ಪ್ರತಿರೋಧವನ್ನು ಮೆಟ್ಟಿನಿಂತು ಅಬಲೆಯರಿಗೆ ಶಿಕ್ಷಣ ನೀಡುವ ಸಂಕಲ್ಪ ಮಾಡಿದ ಸಾವಿತ್ರಿಬಾಯಿ ಫುಲೆ ಶಿಕ್ಷಕ ಸಮುದಾಯಕ್ಕೆ ಆದರ್ಶ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಶಿಕ್ಷಣ ಪಡೆಯಬೇಕು ಎನ್ನುವ ಸಂಕಲ್ಪದೊಂದಿಗೆ ಶಾಲೆಗಳನ್ನು ತೆರೆದ ಅವರ ನಡೆ ಇಂದಿನ ಸಮಾಜಕ್ಕೆ ಮಾದರಿ ಎಂದರು.

ಮಹಿಳಾ ಶಿಕ್ಷಕರ ಸಂಘ ಅಸ್ತಿತ್ವಕ್ಕೆ: ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಚಾಮುಂಡೇಶ್ವರಿ, ಸಾವಿತ್ರಿಬಾಯಿ ಫುಲೆ ಮಹಿಳಾ ಶಿಕ್ಷಕಿಯರ ಸಂಘವನ್ನು ನೌಕರರ ಸಂಘದ ಅಡಿಯಲ್ಲೇ ರಚಿಸುವ ಮೂಲಕ ಶಿಕ್ಷಕಿಯರ ಧ್ವನಿಯಾಗುವುದಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ, ನೌಕರರ ಸಂಘದ ಮಾಜಿ ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ಮಂಜುನಾಥ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶ್ವಥ್ಥನಾರಾಯಣ, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ವೀರಣ್ಣ, ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಜಿಲ್ಲಾ ನೌಕರರ ಸಂಘದ ಪದಾಧಿಕಾರಿ ರವಿಚಂದ್ರ, ಎಸ್.ಚೌಡಪ್ಪ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಪ್ಪಯ್ಯಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್.ನಾರಾಯಣಸ್ವಾಮಿ, ತಾಲ್ಲೂಕು ಪದಾಧಿಕಾರಿ ಆರ್.ನಾಗರಾಜ್, ಮುನಿರಾಜು, ಅಶ್ವತ್‌, ನಾರಾಯಣಸ್ವಾಮಿ, ಮುಖ್ಯಶಿಕ್ಷಕರ ಸಂಘದ ಜಿ.ಶ್ರೀನಿವಾಸ್, ಆರ್.ಶ್ರೀನಿವಾಸನ್, ಯೂನಸ್ ಖಾನ್, ಚಂದ್ರಪ್ಪ, ಭಾಗ್ಯಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT