ಶನಿವಾರ, ಜನವರಿ 18, 2020
21 °C
ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಚ್ಚರಿಕೆ

ಕೋಲಾರ: ಅನುದಾನ ಬಳಕೆಗೆ ತಿಂಗಳ ಗಡುವು ನೀಡಿದ ಜಿ.ಪಂ ಅಧ್ಯಕ್ಷ ವೆಂಕಟೇಶ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್ ಹೋದರೆ ಆಯಾ ಇಲಾಖೆ ಅಧಿಕಾರಿಗಳೇ ಹೊಣೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಎಚ್ಚರಿಕೆ ನೀಡಿದರು.

ಇಲ್ಲಿ ಸೋಮವಾರ ನಡೆದ ವಿವಿಧ ಇಲಾಖೆ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿ, ‘ಇಲಾಖೆಗಳಲ್ಲಿ ಬಳಕೆಯಾಗದೆ ಉಳಿದಿರುವ ಅನುದಾನದಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳಲು ಶೀಘ್ರವೇ ಟೆಂಡರ್ ಕರೆದು ಕಾರ್ಯಾದೇಶ ನೀಡಬೇಕು. ಅನುದಾನ ಸಂಪೂರ್ಣವಾಗಿ ಬಳಕೆಯಾಗಬೇಕು’ ಎಂದು ಸೂಚಿಸಿದರು.

‘ಹಿಂದಿನ ಹಣಕಾಸು ವರ್ಷದಲ್ಲಿ ಹಿರಿಯ ನಾಗರಿಕರ ಹಾಗೂ ಅಂಗವಿಲಕರ ಸಬಲೀಕರಣ ಇಲಾಖೆಯಿಂದ ₹ 12 ಲಕ್ಷ ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್‌ ಹೋಗಿದೆ. ಇಲಾಖೆಗಳ ಪ್ರಗತಿ ಗಮನಿಸಿದರೆ ಅನುದಾನ ಉಳಿಕೆಯಾಗಿರುವುದು ಕಾಣುತ್ತಿದೆ. ವೆಚ್ಚವಾಗಿರುವ ಅನುದಾನಕ್ಕೆ ಕಾಗದದ ಮೇಲೆ ಅಂಕಿ ಅಂಶ ತೋರಿಸಿದರೆ ಸಾಲದು, ಅಭಿವೃದ್ಧಿ ಕೆಲಸವೂ ಆಗಬೇಕು’ ಎಂದರು.

‘ವಿವಿಧ ಯೋಜನೆಗಳ ಅನುದಾನವನ್ನು ಪ್ರತಿ ಇಲಾಖೆಯು ಫೆಬ್ರುವರಿ ಅಂತ್ಯದೊಳಗೆ ಬಳಕೆ ಮಾಡಬೇಕು. ಅನುದಾನ ಖರ್ಚು ಮಾಡಬೇಕೆಂಬ ಉದ್ದೇಶಕ್ಕೆ ಅನಗತ್ಯ ಕಾಮಗಾರಿಗಳನ್ನು ಮಾಡಬೇಡಿ. ಜನರಿಗೆ ಉಪಯುಕ್ತವಾದ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.

‘ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲೇ ಇಂಗ್ಲಿಷ್ ಕಲಿಸುವ ಕೆಲಸ ಆಗಬೇಕು. ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುತ್ತಾರೆಂದು ಅಲ್ಲಿಗೆ ಹೋಗುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಇಂಗ್ಲಿಷ್ ಅಗತ್ಯ’ ಎಂದು ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದರು.

‘ಕಲಿಕೆಯಲ್ಲಿ ಹಿಂದುಳಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಬೋಧನೆ ಮಾಡಿಸಬೇಕು. ಹಿಂದಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು 6ನೇ ಸ್ಥಾನ ಪಡೆದಿತ್ತು. ಈ ಬಾರಿ ಪ್ರಥಮ ಸ್ಥಾನಕ್ಕೇರುವಂತೆ ಮಾಡಿ’ ಎಂದು ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಹೇಳಿದರು.

ದೂರು ಬರುತ್ತಿವೆ: ‘ನೀರು ಬತ್ತಿ ಸ್ಥಗಿತಗೊಂಡಿರುವ ಕೊಳವೆ ಬಾವಿಗಳಿಗೂ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಬಿಲ್ ವಿಧಿಸುತ್ತಿರುವ ಬಗ್ಗೆ ದೂರು ಬರುತ್ತಿವೆ. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾರ್ಯ ನಿರ್ವಹಣೆ ಸ್ಥಿತಿಯಲ್ಲಿರುವ ಕೊಳವೆ ಬಾವಿಗಳಿಗೆ ಮಾತ್ರ ವಿದ್ಯುತ್ ಬಿಲ್ ನೀಡಬೇಕು. ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಬೇಕು’ ಎಂದು ಅಧ್ಯಕ್ಷ ವೆಂಕಟೇಶ್ ಸೂಚಿಸಿದರು.

‘ಜಿಲ್ಲೆಯಲ್ಲಿ ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ೪೫ ಕೆರೆ ತುಂಬಿವೆ. ಮೀನುಗಾರಿಕೆ ಇಲಾಖೆಯವರು ಕೆರೆಯಲ್ಲಿ ಮೀನು ಮರಿಗಳನ್ನು ಬಿಟ್ಟು ಅಭಿವೃದ್ಧಿಪಡಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ತುಂಬಾ ಸಮಸ್ಯೆಯಿದೆ. ಆಸ್ಪತ್ರೆಗಳು ಚೆನ್ನಾಗಿ ನಡೆಯುತ್ತಿಲ್ಲ. ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಡಿ ಗ್ರೂಪ್ ಸಿಬ್ಬಂದಿಗೆ ತುಂಬಾ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಸಿಬ್ಬಂದಿಗೆ ಕಿರುಕುಳ ನೀಡುವುದು ತಪ್ಪಬೇಕು’ ಎಂದು ತಾಕೀತು ಮಾಡಿದರು.

‘ಸರ್ಕಾರವು ಕ್ವಿಂಟಾಲ್‌ಗೆ ₹ 3,150 ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆದಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಂಗೂರ ಸಾರಿಸುವ ಮೂಲಕ ರೈತರಿಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು