ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನುಷ್ಯನಿಗೆ ಆರೋಗ್ಯ ರಕ್ಷಣಾ ಕವಚ

Last Updated 8 ಏಪ್ರಿಲ್ 2022, 16:24 IST
ಅಕ್ಷರ ಗಾತ್ರ

ಕೋಲಾರ: ‘ಮನುಷ್ಯನಿಗೆ ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ಆರೋಗ್ಯವು ರಕ್ಷಣಾ ಕವಚ ಇದ್ದಂತೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಸದಾ ಕಾರ್ಯ ಒತ್ತಡದಲ್ಲಿರುವ ಜನರು ತಮ್ಮ ಹಾಗೂ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆ ಎದುರಾದರೆ ನಿರ್ಲಕ್ಷ್ಯ ತೋರದೆ ತಕ್ಷಣವೇ ಚಿಕಿತ್ಸೆ ಪಡೆಯಬೇಕು’ ಎಂದು ಕಿವಿಮಾತು ಹೇಳಿದರು.

‘ಹಣ ಅಥವಾ ಆಸ್ತಿ ಸಂಪಾದನೆಗಿಂತ ಆರೋಗ್ಯ ಮುಖ್ಯ. ಆರೋಗ್ಯವೇ ಮಹಾಭಾಗ್ಯ ಎಂಬುದನ್ನು ಮರೆಯಬಾರದು. ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗದ ಜನರು ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮೃತಪಡುತ್ತಿದ್ದಾರೆ. ಗ್ರಾಮೀಣ ಜನತೆ ಕೃಷಿ, ಹೈನುಗಾರಿಕೆ ಚಟುವಟಿಕೆ ಒತ್ತಡದ ನಡುವೆ ಆರೋಗ್ಯ ನಿರ್ಲಕ್ಷಿಸುತ್ತಿದ್ದಾರೆ' ಎಂದು ಕಳವಳ ವ್ಯಕ್ತಪಡಿಸಿದರು.

‘ವಿಶ್ವ ಆರೋಗ್ಯ ದಿನದ ಮಹತ್ವ ಹಾಗೂ ಔದ್ಯೋಗೀಕರಣದಿಂದ ಪರಿಸರ ನಾಶವಾಗುತ್ತಿರುವುದು ಪ್ರಸ್ತುತ ಸಂದರ್ಭದಲ್ಲಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಿಸುವುದು ಪ್ರತಿಯೊಬ್ಬರ ಕರ್ತವ್ಯ. ಜನರು ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಿರಬೇಕು. ಈ ಹಿಂದೆ ಆಸ್ಪತ್ರೆಗಳ ಕೊರತೆಯ ಕಾರಣಕ್ಕೆ ಜನ ಕಾಯಿಲೆಗೆ ಚಿಕಿತ್ಸೆ ಪಡೆಯಲಾಗದೆ ಮೃತಪಡುತ್ತಿದ್ದರು. ಈಗ ಹೋಬಳಿ ಕೇಂದ್ರದಲ್ಲೂ ಆಸ್ಪತ್ರೆಗಳಿದ್ದು, ಇದರ ಸದುಪಯೋಗ ಪಡೆಯಬೇಕು’ ಎಂದು ಸಲಹೆ ನೀಡಿದರು.

‘ಈ ಹಿಂದೆ ಗ್ರಾಮಗಳಲ್ಲಿ ಕಾಯಿಲೆ ಬಂದರೆ ಗುಳೆ ಹೋಗುವ ಪರಿಸ್ಥಿತಿಯಿತ್ತು. ಆದರೆ, ಈಗ ಕಾಲ ಬದಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರಗಳು ಒತ್ತು ನೀಡುತ್ತಿವೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಿವೆ’ ಎಂದು ವಿವರಿಸಿದರು.

ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ವಿಜಯಕುಮಾರಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್‌, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಕಮಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT