ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಎಚ್‌ಐವಿ ಸೋಂಕಿತರ ಬಗ್ಗೆ ಕೀಳು ಭಾವನೆ ಇದೆ'

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ರಘುನಾಥ್ ಕಳವಳ
Last Updated 1 ಡಿಸೆಂಬರ್ 2020, 14:26 IST
ಅಕ್ಷರ ಗಾತ್ರ

ಕೋಲಾರ: ‘ಎಚ್‌ಐವಿ ಸೋಂಕಿತರ ಬಗ್ಗೆ ಸಮಾಜದಲ್ಲಿ ಕೀಳು ಭಾವನೆಯಿದೆ. ಅಲ್ಲದೇ, ಅವರನ್ನು ಸಮಾಜದ ಮುಖ್ಯ ವಾಹಿನಿಯಿಂದ ದೂರವಿಡುವ ಪ್ರಯತ್ನ ನಡೆಯುತ್ತಿದೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಂ.ಎಲ್‌.ರಘುನಾಥ್ ಕಳವಳ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಜಿ.ಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಹಯೋಗದಲ್ಲಿ ಇಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಎಚ್‌ಐವಿ ಸೋಂಕಿತರು ಸಹ ನಾಗರೀಕರು. ಆದ ಕಾರಣ ಅವರನ್ನು ಕೀಳಾಗಿ ಕಾಣಬಾರದು. ಬದಲಿಗೆ ಎಲ್ಲಾ ರೀತಿಯ ಸಹಕಾರ ನೀಡಿ ಮುಖ್ಯವಾಹಿನಿಗೆ ಬರುವಂತೆ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ದೇಶದಲ್ಲಿ 1986ರಲ್ಲಿ ಕಾಣಿಸಿಕೊಂಡ ಎಚ್‌ಐವಿ ಸೋಂಕಿಗೆ ಈವರೆಗೂ ಲಸಿಕೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಈ ಸೋಂಕು ತಡೆಗೆ ಮುನ್ನೆಚ್ಚರಿಕೆಯೇ ಮದ್ದು. ನಾವು ಎಷ್ಟೇ ಅಭಿವೃದ್ಧಿ ಸಾಧಿಸಿದರೂ, ತಂತ್ರಜ್ಞಾನ ಕಂಡುಹಿಡಿದರೂ ಪ್ರಕೃತಿಯ ವಿರುದ್ಧ ಹೋಗಬಾರದು. ಹಿಂದೆ ಪ್ರಕೃತಿಯನ್ನು ಪೂಜಿಸುವ ಸಂಪ್ರದಾಯವಿತ್ತು. ಇತ್ತೀಚಿನ ವರ್ಷಗಳಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕೆ ಪ್ರಕೃತಿ ನಾಶ ಮಾಡುತ್ತಿದ್ದೇನೆ’ ಎಂದು ವಿಷಾದಿಸಿದರು.

‘ಸಂಪ್ರದಾಯ, ಆಚಾರ ವಿಚಾರ ಮರೆತು ಪಾಶ್ಚಿಮಾತ್ಯ ಸಂಸ್ಕೃತಿಯ ಅಂಧಾನುಕರಣೆ ಮಾಡುತ್ತಿರುವುದರಿಂದ ಹೊಸ ಹೊಸ ಕಾಯಿಲೆ ಬರುತ್ತಿವೆ. ಮನೆಯ ಆರೋಗ್ಯಕರ ಊಟ ಬಿಟ್ಟು, ರಸ್ತೆ ಬದಿಯ ಆಹಾರ ಮತ್ತು ಕುರುಕಲು ತಿಂಡಿ ಸೇವಿಸುತ್ತಿದ್ದೇವೆ. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹೀಗಾಗಿ ದೇಹವು ರೋಗದ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಏಡ್ಸ್ ಬಗ್ಗೆ ಜನರಲ್ಲಿ ಬೇರೂರಿರುವ ತಪ್ಪು ಕಲ್ಪನೆ ತೊಡೆದು ಹಾಕಬೇಕು. ಈ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಎಚ್‌ಐವಿ ಸೋಂಕಿತರಿಗೆ ಸರ್ಕಾರದ ಸೌಲಭ್ಯಗಳು ಮತ್ತು ಯೋಜನೆಗಳ ಅರಿವು ಮೂಡಿಸಬೇಕು. ಜತೆಗೆ ಅವರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು’ ಎಂದು ಸಲಹೆ ನೀಡಿದರು.

ಮಾರಕ ಕಾಯಿಲೆ: ‘ಜಗತ್ತನ್ನು ಅತಿಯಾಗಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಏಡ್ಸ್ ಸಹ ಒಂದು. ಎಚ್‌ಐವಿ ಸೋಂಕು ಪೀಡಿತರು ಹಲವು ಸಂಕಟ ಅನುಭವಿಸುತ್ತಿದ್ದಾರೆ. ಎಚ್‍ಐವಿ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಏಡ್ಸ್‌ ಗುಣಪಡಿಸಲಾಗದ ಮಾರಕ ಕಾಯಿಲೆ. ಆದರೆ, ಎಚ್‌ಐವಿ ಸೋಂಕಿತರ ಜೀವಿತಾವಧಿ ಹೆಚ್ಚಿಸಬಹುದು’ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಜಗದೀಶ್ ಹೇಳಿದರು.

‘ಅಸುರಕ್ಷಿತ ಲೈಂಗಿಕತೆ, ಎಚ್‌ಐವಿ ಸೋಂಕು ತಗುಲಿರುವ ವ್ಯಕ್ತಿಗಳಿಂದ ರಕ್ತ ಪಡೆಯುವುದು, ಮಾದಕ ವಸ್ತುಗಳ ಸೇವನೆಯಿಂದ ಏಡ್ಸ್‌ ಬರುತ್ತದೆ. ಆದ ಕಾರಣ ದೃಢೀಕೃತ ರಕ್ತ ಕೇಂದ್ರಗಳಿಂದ ಮಾತ್ರ ರಕ್ತ ಪಡೆಯಬೇಕು. ರಕ್ತದಾನ ಮಾಡುವಾಗಲೂ ಎಚ್ಚರ ವಹಿಸಬೇಕು. ಎಚ್‍ಐವಿ ಸೋಂಕು ಹರಡುವ ವಿಧಾನಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದು ಸಲಹೆ ನೀಡಿದರು.

ಏಡ್ಸ್‌ ಕುರಿತ ಜಾಗೃತಿ ಕರಪತ್ರ ಬಿಡುಗಡೆ ಮಾಡಲಾಯಿತು. ಎಚ್‍ಐವಿ ಸೋಂಕು ತಡೆಗೆ ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗಂಗಾಧರ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಘುಪತಿಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯ್‌ಕುಮಾರ್, ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ವಿಜಯಕುಮಾರಿ, ಜಿಲ್ಲಾ ಮಲೇರಿಯಾ ರೋಗ ನಿಯಂತ್ರಣಾಧಿಕಾರಿ ಡಾ.ಕಮಲಾ, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT