ಬುಧವಾರ, ಜನವರಿ 19, 2022
18 °C

ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಕಾಂಗ್ರೆಸ್‌ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಿರುವ ಎಂ.ಎಲ್‌.ಅನಿಲ್‌ಕುಮಾರ್‌ ಹಿಂದಿನ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಅವರ ಗೆಲುವು ನಿಶ್ಚಿತ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ಚನ್ನಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಅನಿಲ್‌ಕುಮಾರ್‌ ಚುನಾವಣೆಯಲ್ಲಿ ಆಯ್ಕೆಯಾದರೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸುತ್ತಾರೆ. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ’ ಎಂದು ಹೇಳಿದರು.

‘ಅನಿಲ್‌ಕುಮಾರ್‌ ಸುಮಾರು 3 ದಶಕಗಳಿಂದ ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಅವರು ಉತ್ತಮ ವಾಗ್ಮಿ. ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಅವರು ಒಳ್ಳೆಯ ರಾಜಕಾರಣಿ. ಮತದಾರರು ಜನಾನುರಾಗಿಯಾದ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ಅವಿಭಜಿತ ಕೋಲಾರ ಜಿಲ್ಲೆಯ ಮತದಾರರು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಅನಿಲ್‌ಕುಮಾರ್‌ ಅವರನ್ನು ಬೆಂಬಲಿಸಬೇಕು. ಜನಪ್ರತಿನಿಧಿಗಳು ಒಬ್ಬ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಲು ಸಿಕ್ಕಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅವಳಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡರ ಬೆಂಬಲಿಗರ ಪರವಾಗಿ ಅನಿಲ್‌ಕುಮಾರ್‌ರನ್ನು ಬೆಂಬಲಿಸುತ್ತೇವೆ’ ಎಂದು ಜೆಡಿಎಸ್‌ ಮುಖಂಡ ಅನ್ವರ್‌ ಪಾಷಾ ಹೇಳಿದರು.

‘ರಾಜಕಾರಣ ಸಂಪೂರ್ಣ ಕಲುಷಿತಗೊಂಡಿದೆ. ಈ ವ್ಯವಸ್ಥೆ ಸರಿಪಡಿಸುವ ದಿಸೆಯಲ್ಲಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವುದು ಜನಪ್ರತಿನಿಧಿಗಳ ಜವಾಬ್ದಾರಿ. ಹಣದಿಂದಲೇ ಎಲ್ಲದನ್ನೂ ಖರೀದಿಸಬಹುದೆಂದು ಮೆರೆಯುತ್ತಿರುವವರಿಗೆ ಮತ್ತು ಪ್ರಜಾಪ್ರಭುತ್ವವನ್ನು ಅಣಕಿಸಲು ಮುಂದಾಗಿರುವವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು’ ಎಂದು ತಿಳಿಸಿದರು.

ಮುಖಂಡರಾದ ರಾಜಗೋಪಾಲಗೌಡ, ಯಾಮಣ್ಣ, ಉಮಾಶಂಕರ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು