ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅಗತ್ಯ: ಜಿಲ್ಲಾಧಿಕಾರಿ ಮಂಜುನಾಥ್‌ ಅಭಿಪ್ರಾಯ

Last Updated 20 ಜುಲೈ 2019, 14:46 IST
ಅಕ್ಷರ ಗಾತ್ರ

ಕೋಲಾರ: ‘ದೇಶದಲ್ಲಿ ತಾಂತ್ರಿಕ ಕ್ಷೇತ್ರ ಸಾಕಷ್ಟು ಮುಂದುವರಿದಿದ್ದರೂ ಅಭಿವೃದ್ಧಿಗೆ ಮಾನವ ಸಂಪನ್ಮೂಲ ಅಗತ್ಯವಿದ್ದು, ಇದನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅಭಿಪ್ರಾಯಪಟ್ಟರು.

ಸಾರ್ವಜನಿಕ ಶಿಕ್ಷಣ ಇಲಾಖೆಯು ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ 2.25 ಲಕ್ಷ ವಿದ್ಯಾರ್ಥಿಗಳಿದ್ದು, 7,300 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕರು ಸಂಬಳಕ್ಕಾಗಿ ಕೆಲಸ ಮಾಡಬಾರದು. ಬದಲಿಗೆ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಸೂಚಿಸಿದರು.

‘ವ್ಯಕ್ತಿಯನ್ನು ಕತ್ತಲೆಯಿಂದ ಜ್ಞಾನದೆಡೆಗೆ ಕೊಂಡೊಯ್ಯುವುದೆ ಗುರುವಿನ ಕೆಲಸ. ಶಿಕ್ಷಕರಿಗೆ ಇತ್ತೀಚಿನ ವರ್ಷಗಳಲ್ಲಿ ಬಡ ಮಕ್ಕಳ ಬಗ್ಗೆ ಕಾಳಜಿ ಇಲ್ಲವಾಗುತ್ತಿದೆ. ದೇಶದ ಅಭಿವೃದ್ಧಿಗೆ ಅಗತ್ಯವಿರುವ ಮಾನವ ಸಂಪನ್ಮೂಲ ಕೊರತೆಯಾಗಲು ಕಾರಣವೇನು ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.

‘ನೀರಿನ ಸಮಸ್ಯೆ ದೇಶ, ರಾಜ್ಯ, ಜಿಲ್ಲೆಯನ್ನು ಕಾಡುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಜಲಶಕ್ತಿ ಅಭಿಯಾನ ಜಾರಿಗೆ ತಂದಿದ್ದು, ಈ ಅಭಿಯಾನದ ಕಾರ್ಯ ಚಟುವಟಿಕೆಗಳನ್ನು ಜವಾಬ್ದಾರಿಯಿಂದ ನಿಭಾಯಿಸಬೇಕು’ ಎಂದು ಸೂಚಿಸಿದರು.

ಕಲಿಕಾಸಕ್ತಿ ಹೆಚ್ಚಿಸಿ: ‘ಮಕ್ಕಳಲ್ಲಿ ಕಲಿಕಾಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಪೂರಕ ವಾತಾವರಣ ಸೃಷ್ಟಿಸುವುದು ಶಿಕ್ಷಕರ ಜವಾಬ್ದಾರಿ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಜಗದೀಶ್ ಹೇಳಿದರು.

‘ಈ ಹಿಂದೆ ರಾಜ್ಯದಲ್ಲಿ ಯಾವುದೇ ಹುದ್ದೆಯ ನೇಮಕಾತಿ ನಡೆದರೆ ಶೇ 25ರಷ್ಟು ಮಂದಿ ಕೋಲಾರ ಜಿಲ್ಲೆಯವರೇ ಆಯ್ಕೆಯಾಗುತ್ತಿದ್ದರು. ಆದರೆ, ಈಗ ಆ ಪರಿಸ್ಥಿತಿಯಿಲ್ಲ. ಇದಕ್ಕೆ ಕಾರಣವೇನೆಂದು ಎಲ್ಲರಿಗೂ ಗೊತ್ತಿದೆ. ಹಿಂದಿನ ಪರಿಸ್ಥಿತಿ ನಿರ್ಮಾಣ ಮಾಡಲು ಶಿಕ್ಷಕರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಮುಖ್ಯ ಶಿಕ್ಷಕರು ಈಗಿನಿಂದಲೇ ಕ್ರಮ ಕೈಗೊಳ್ಳಬೇಕು, ಇದಕ್ಕೆ ಪೂರಕವಾಗಿ ಇಲಾಖೆಯಿಂದ ಕ್ರಿಯಾ ಯೋಜನೆ ತಯಾರಿಸಿದ್ದು, ಕಡ್ಡಾಯವಾಗಿ ಪಾಲನೆ ಮಾಡಬೇಕು’ ಎಂದು ಸೂಚನೆ ನೀಡಿದರು.

ತಾತ್ಸರ ಹೆಚ್ಚಿದೆ: ‘ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ ವಿಶೇಷ ತರಗತಿ ಆರಂಭಿಸಬೇಕು. ಯಾವುದೇ ಶಾಲೆಯಲ್ಲಿ ಶೇ 100ರಷ್ಟು ಫಲಿತಾಂಶ ಬರದಿದ್ದರೆ ಅದಕ್ಕೆ ಮುಖ್ಯ ಶಿಕ್ಷಕರೇ ಹೊಣೆ. ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ತಾತ್ಸರ ಮನೋಭಾವ ಹೆಚ್ಚಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.

‘ಶಿಕ್ಷಕರು ತಮ್ಮ ಮಕ್ಕಳನ್ನು ಮಾತ್ರ ಖಾಸಗಿ ಶಾಲೆಗೆ ಸೇರಿಸುತ್ತಾರೆ. ಇದರಿಂದ ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆ ಹೋಗಿದೆ. ನಾನು ಮಾಲೂರು ತಾಲ್ಲೂಕಿನ ಶಾಲೆಗೆ ಭೇಟಿ ನೀಡಿದ್ದಾಗ ಅಲ್ಲಿನ ಶಿಕ್ಷಕರು 6ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆ ಸಹ ಕಲಿಸಿರದ ಸಂಗತಿ ಗೊತ್ತಾಯಿತು. ಆ ಶಾಲೆಯಲ್ಲಿ 28 ಮಂದಿ ಮಕ್ಕಳಿಗೆ 4 ಶಿಕ್ಷಕರಿದ್ದಾರೆ. ಮಕ್ಕಳಿಗೆ ಕನಿಷ್ಠ ಕನ್ನಡದ ಅಕ್ಷರ ಬರೆಯಲು ಬಾರದಿದ್ದರೆ ಹೇಗೆ?’ ಎಂದು ಪ್ರಶ್ನಿಸಿದರು.

ಮೊಬೈಲ್‌ ಬಳಸಬೇಡಿ: ‘ಮಕ್ಕಳು ಶಿಕ್ಷಕರ ವರ್ತನೆ ಗಮನಿಸುತ್ತಿರುತ್ತಾರೆ. ಮಕ್ಕಳು ಅದರ ಆಧಾರದಲ್ಲೇ ವರ್ತನೆ ಮಾಡಲಾರಂಭಿಸುತ್ತಾರೆ. ಶಿಕ್ಷಕರು ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಬೇಕು, ತರಗತಿ ವೇಳೆಯಲ್ಲಿ ಮೊಬೈಲ್‌ ಬಳಸಬಾರದು’ ಎಂದು ಕಿವಿಮಾತು ಹೇಳಿದರು.

‘8ನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ ಪ್ರತಿ ವಿದ್ಯಾರ್ಥಿಯ ವೈಯಕ್ತಿಕ ವಿವರದ ಕಡತ ನಿರ್ವಹಣೆ ಮಾಡಬೇಕು. ಪ್ರತಿ ಕಿರು ಪರೀಕ್ಷೆಯ ಫಲಿತಾಂಶವನ್ನು ಪೋಷಕರಿಗೆ ತೋರಿಸಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪೋಷಕರ ಜತೆ ಸಂಪರ್ಕ ಇಟ್ಟುಕೊಂಡು ಕಲಿಕೆ ಬಗ್ಗೆ ತಿಳಿಸುತ್ತಿರಬೇಕು. ಕಡ್ಡಾಯವಾಗಿ ಪೋಷಕರ ಸಭೆ ಕರೆಯಬೇಕು’ ಎಂದು ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಆರ್.ಅಶೋಕ್, ಕೆ.ಎಸ್.ನಾಗರಾಜಗೌಡ, ಎಸ್ಸೆಸ್ಸೆಲ್ಸಿ ಪರೀಕ್ಷೆ ಜಿಲ್ಲಾ ನೋಡಲ್ ಅಧಿಕಾರಿ ನಾಗೇಂದ್ರ ಪ್ರಸಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT