ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಲಾಕೋಮ ನಿರ್ಲಕ್ಷಿಸಿದರೆ ಶಾಶ್ವತ ಅಂಧತ್ವ‌‌: ಜಗದೀಶ್‌ ಹೇಳಿಕೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಜಗದೀಶ್‌ ಹೇಳಿಕೆ
Last Updated 8 ಮಾರ್ಚ್ 2021, 15:59 IST
ಅಕ್ಷರ ಗಾತ್ರ

ಕೋಲಾರ: ‘ಮನುಷ್ಯನ ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದದ್ದು. ದೃಷ್ಟಿ ಇಲ್ಲವೆಂದರೆ ಬದುಕೇ ಕತ್ತಲು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ಜಗದೀಶ್‌ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಗ್ಲಾಕೋಮ ಸಪ್ತಾಹ ಉದ್ಘಾಟಿಸಿ ಮಾತನಾಡಿ, ‘ಜಗತ್ತು ಪ್ರಕಾಶಿಸುತ್ತಿದೆ. ನಿಮ್ಮ ದೃಷ್ಟಿ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಗ್ಲಾಕೋಮ ಸಪ್ತಾಹ ಆಚರಿಸಲಾಗುತ್ತಿದೆ. ಮಾರ್ಚ್ 13ರವರೆಗೆ ಸಪ್ತಾಹ ನಡೆಯಲಿದೆ’ ಎಂದು ತಿಳಿಸಿದರು.

‘ಜಾಗರೂಕತೆಯಿಂದ ಕಣ್ಣು ಕಾಪಾಡಿಕೊಳ್ಳಬೇಕು. ಕಣ್ಣಿನ ಸಮಸ್ಯೆಗೆ ಅನೇಕ ಕಾರಣಗಳಿವೆ. ಕಣ್ಣಿನ ಸಮಸ್ಯೆ ಕಾಣಿಸಿಕೊಂಡ ತಕ್ಷಣ ನಿರ್ಲಕ್ಷಿಸದೆ ವೈದ್ಯರಿಂದ ತಪಾಸಣೆ ಮಾಡಿಸಿ ಆರಂಭದ ಹಂತದಲ್ಲೇ ಚಿಕಿತ್ಸೆ ಪಡೆಯಬೇಕು. ಇಲ್ಲದಿದ್ದರೆ ಜೀವನವಿಡೀ ತೊಂದರೆ ಅನುಭವಿಸಬೇಕಾಗುತ್ತದೆ. ಗ್ಲಾಕೋಮಗೆ ಸಕಾಲದಲ್ಲಿ ಚಿಕಿತ್ಸೆ ಪಡೆಯದೆ ನಿರ್ಲಕ್ಷಿಸಿದರೆ ಶಾಶ್ವತ ಅಂಧತ್ವ ಉಂಟಾಗುತ್ತದೆ’ ಎಂದರು.

‘ಪ್ರತಿ ವರ್ಷ ಮಾರ್ಚ್‌ನಲ್ಲಿ ವಿಶ್ವ ಗ್ಲಾಕೋಮ ನಿರ್ಮೂಲನೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಯಾವುದೇ ರೋಗ ಲಕ್ಷಣವಿಲ್ಲದೆ ಕಾಣಿಸಿಕೊಳ್ಳುವ ಕಾಯಿಲೆ ಗ್ಲಾಕೋಮ. ಗ್ಲಾಕೋಮದಿಂದ ಆಗುವ ತೊಂದರೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. 40 ವರ್ಷ ವಯಸ್ಸಿನ ನಂತರ ಕಣ್ಣಿನ ಒತ್ತಡ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಅಂಧತ್ವ ನಿವಾರಣಾಧಿಕಾರಿ ಡಾ.ಎನ್‌.ಸಿ.ನಾರಾಯಣಸ್ವಾಮಿ ಸಲಹೆ ನೀಡಿದರು.

‘ಮಧುಮೇಹ, ರಕ್ತದೊತ್ತಡ ಹಾಗೂ ದೃಷ್ಟಿ ದೋಷ ಇರುವವರಲ್ಲಿ ಗ್ಲಾಕೋಮ ಸಂಭವ ಹೆಚ್ಚು. ಪದೇ ಪದೇ ಕನ್ನಡಕ ಬದಲಾಯಿಸದಂತೆ ಕಡ್ಡಾಯವಾಗಿ ಕಣ್ಣಿನ ಒತ್ತಡ ಪರೀಕ್ಷೆ ಮಾಡಿಸಿಕೊಳ್ಳಬೇಕು. ಗ್ಲಾಕೋಮದಲ್ಲಿ ನೇರ ದೃಷ್ಟಿ ಸರಿಯಾಗಿದ್ದರೂ ದೃಷ್ಟಿ ವಲಯ ಕುಗ್ಗುತ್ತಾ ಬರುತ್ತದೆ’ ಎಂದು ಮಾಹಿತಿ ನೀಡಿದರು.

ಪೌಷ್ಟಿಕ ಆಹಾರ: ‘ಮನೆಯಲ್ಲಿ ಯಾರಾದರೂ ಗ್ಲಾಕೋಮದಿಂದ ಬಳಲುತ್ತಿದ್ದರೆ ಇತರ ಸದಸ್ಯರು ಕಡ್ಡಾಯವಾಗಿ ಕಣ್ಣಿನ ಒತ್ತಡ ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯರು ಸಲಹೆ ತಪ್ಪದೇ ಪಾಲಿಸಬೇಕು. ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ವಯಸ್ಸಿನಲ್ಲಿ ಹೆಚ್ಚಾಗಿ ಗ್ಲಾಕೋಮ ಕಾಣಿಸುತ್ತಿದೆ. ಮೊಬೈಲ್‌, ಕಂಪ್ಯೂಟರ್‌, ಟಿ.ವಿ ವೀಕ್ಷಣೆಯಿಂದ ಮಕ್ಕಳಲ್ಲಿ ದೃಷ್ಟಿ ದೋಷ ಉಂಟಾಗುತ್ತಿದೆ. ಇದರ ನಿವಾರಣೆಗೆ ಪೌಷ್ಟಿಕ ಆಹಾರ ಸೇವಿಸಬೇಕು’ ಎಂದು ತಿಳಿಸಿದರು.

ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚಿನ್ನಸ್ವಾಮಿಗೌಡ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್‌ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT