ಸೋಮವಾರ, ಮಾರ್ಚ್ 1, 2021
30 °C
ಸಭೆಯಲ್ಲಿ ಅಧಿಕಾರಿಗಳಿಗೆ ನೋಡಲ್‌ ಅಧಿಕಾರಿ ವೃತ್ವಿಕ್‌ ಪಾಂಡೆ ಸೂಚನೆ

ಕಾಲಮಿತಿಯಲ್ಲಿ ಜಲಶಕ್ತಿ ಅಭಿಯಾನ ಅನುಷ್ಠಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯಲ್ಲಿನ ನೀರಿನ ಸಮಸ್ಯೆಯ ಗಂಭೀರತೆ ಅರಿತು ಜಲಶಕ್ತಿ ಅಭಿಯಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ’ ಎಂದು ಜಲಶಕ್ತಿ ಅಭಿಯಾನದ ರಾಜ್ಯ ನೋಡಲ್ ಅಧಿಕಾರಿ ವೃತ್ವಿಕ್‌ ಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಲಶಕ್ತಿ ಅಭಿಯಾನ ಕುರಿತು ಇಲ್ಲಿ ಗುರುವಾರ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ವಿವಿಧ ಇಲಾಖೆ ಅಭಿಯಾನ ಅನುಷ್ಠಾನಕ್ಕೆ ಕ್ರಿಯಾಯೋಜನೆ ರೂಪಿಸಿದ್ದು, ಇದನ್ನು ಕಾಲಮಿತಿಯೊಳಗೆ ಪೂರ್ಣ ಮಾಡಬೇಕು’ ಎಂದು ತಿಳಿಸಿದರು.

‘ವಾತಾವರಣದಲ್ಲಿನ ಬದಲಾವಣೆಯಿಂದ ನೀರಿನ ಸಮಸ್ಯೆ ಎದುರಾಗುತ್ತಿದೆ. ದೇಶದ 256 ಜಿಲ್ಲೆಗಳ 1,597 ತಾಲ್ಲೂಕುಗಳಲ್ಲಿ ತೀವ್ರ ಬರ ಎದುರಾಗಿದೆ. ಈ ತಾಲ್ಲೂಕುಗಳಲ್ಲಿ ಮೊದಲ ಹಂತದಲ್ಲಿ ಜಲಶಕ್ತಿ ಅಭಿಯಾನ ಆರಂಭಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯ 5 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾಹಿತಿ ನೀಡಿದರು.

‘ಜಲಶಕ್ತಿ ಅಭಿಯಾನದ ಅನುಷ್ಠಾನಕ್ಕೆ ಇಲಾಖಾವಾರು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. 3 ನಗರಸಭೆಯಲ್ಲಿ ಚುನಾಯಿತ ಆಡಳಿತ ಮಂಡಳಿಯಿಲ್ಲದ ಕಾರಣ ಸರ್ಕಾರ ನನ್ನನ್ನು ಆಡಳಿತಾಧಿಕಾರಿಯಾಗಿ ನಿಯೋಜಿಸಿದೆ. ಹೊಸ ಮನೆ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳುವಂತೆ ಸೂಚಿಸಲಾಗುತ್ತಿದೆ. ಈ ಬಗ್ಗೆ ಎಂಜಿನಿಯರ್‌ಗಳು ಪರಿಶೀಲನೆ ಮಾಡುತ್ತಾರೆ’ ಎಂದರು.

31 ಕೆರೆ ಭರ್ತಿ: ‘ಜಿಲ್ಲೆಯ ಕೆರೆಗಳಿಗೆ ಕೆ.ಸಿ ವ್ಯಾಲಿ ಯೋಜನೆ ನೀರು ಹರಿದು ಬರುತ್ತಿದ್ದು, ಈಗಾಗಲೇ 31 ಕೆರೆ ಭರ್ತಿಯಾಗಿವೆ. ಜಿಲ್ಲೆಯಲ್ಲಿ ವಾಡಿಕೆ ಮಳೆಯಾಗಿದ್ದರೆ ಮತ್ತಷ್ಟು ಕೆರೆಗಳು ತುಂಬುತ್ತಿದ್ದವು. ಜಲಶಕ್ತಿ ಅಭಿಯಾನ ಕುರಿತು ತಾಲ್ಲೂಕುವಾರು ಕಾರ್ಯಾಗಾರ ನಡೆಸಿ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ತರಬೇತಿ ಕೊಡಿಸಲಾಗುತ್ತಿದೆ’ ಎಂದು ವಿವರಿಸಿದರು.

‘ಅಭಿಯಾನದ ಅನುಷ್ಠಾನಕ್ಕೆ ಕೈಗೊಂಡಿರುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ತಂತ್ರಾಂಶದಲ್ಲಿ ದಾಖಲು ಮಾಡಲು ಸಮಸ್ಯೆ ಎದುರಾಗಿದೆ. ಇದರಿಂದ ಜಿಲ್ಲೆಯು 186ನೇ ರ್‌್ಯಾಂಕ್‌ ಎಂದು ತೋರಿಸುತ್ತಿದೆ’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ನೋಡಲ್ ಅಧಿಕಾರಿ, ‘ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ತ್ಯಾಜ್ಯ ನೀರು ಮರು ಬಳಕೆಗೆ ಕ್ರಮ ಕೈಗೊಳ್ಳಬೇಕು. ಬೃಹತ್ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಬೇಕು. ಅಧಿಕಾರಿಗಳು ಒಗ್ಗೂಡಿ ಅಭಿಯಾನ ಯಶಸ್ವಿಗೊಳಿಸಬೇಕು. ಜನರಿಗೆ ಜಾಗೃತಿ ಮೂಡಿಸಿದರೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.

ಚೆಕ್‌ಡ್ಯಾಂ ನಿರ್ಮಾಣ: ‘ಜಿಲ್ಲೆಯಲ್ಲಿ 806 ಚೆಕ್‌ಡ್ಯಾಂ ನಿರ್ಮಿಸಲಾಗುತ್ತಿದೆ. ಈ ಪೈಕಿ 352 ಚೆಕ್‌ಡ್ಯಾಂ ಪೂರ್ಣಗೊಂಡಿದೆ. 454ರ ಕಾಮಗಾರಿ ಪ್ರಗತಿಯಲ್ಲಿದೆ. ಅದೇ ರೀತಿ ಸಣ್ಣ ನೀರಾವರಿ ಇಲಾಖೆಯಿಂದಲೂ ಪಾಲರ್‌ ನದಿ ಕಾಲುವೆಯಲ್ಲಿ ಬೃಹತ್‌ ಗಾತ್ರದ 18 ಚೆಕ್‌ಡ್ಯಾಂ ನಿರ್ಮಾಣ ಮಾಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್‌.ವಿ.ದರ್ಶನ್‌ ವಿವರಿಸಿದರು.

‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಖಾಲಿ ಜಾಗದಲ್ಲಿ ಸಸಿ ನೆಡಲು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಸ್ತಾವ ಸಲ್ಲಿಸಬೇಕು. ಈ ಬಗ್ಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿ. ಇದಕ್ಕೆ ಪೂರಕವಾಗಿ ಅರಣ್ಯ ಇಲಾಖೆಯವರು ಸಸಿ ಬೆಳೆಸಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ನೀರಿನ ಕೊರತೆಯಿದೆ. ಹೀಗಾಗಿ ಬೇಡಿಕೆಗೆ ತಕ್ಕಂತೆ ಸಸಿ ಬೆಳೆಸಲು ಸಾಧ್ಯವಾಗುತ್ತಿಲ್ಲ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ ವಲಯ) ದೇವರಾಜ್‌ ತಿಳಿಸಿದರು.

‘ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ಭರ್ತಿಯಾಗಿರುವ ಕೆರೆಗಳ ಸಮೀಪ ಸರ್ಕಾರಿ ಜಾಗ ಗುರುತಿಸಿದರೆ ಅರಣ್ಯ ಇಲಾಖೆಯ ನರ್ಸರಿ ಮಾಡಲು ಮಂಜೂರು ಮಾಡುತ್ತೇವೆ’ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.