ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಸೋಂಕು ದಾಖಲೆ ಪ್ರಮಾಣದಲ್ಲಿ ಏರಿಕೆ

ಮುಳಬಾಗಿಲಿನ ಸೋಂಕಿತ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರು
Last Updated 27 ಜುಲೈ 2020, 15:54 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಸೋಮವಾರ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಒಂದೇ ದಿನ 144 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇದರ ಬೆನ್ನಲ್ಲೇ ಜಿಲ್ಲಾ ಕೇಂದ್ರದ ಆರ್‌.ಎಲ್‌ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮುಳಬಾಗಿಲಿನ ಕುರುಬರಪೇಟೆ ಬಡಾವಣೆಯ 55 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಮೇ 12ರಂದು ಕೊರೊನಾ ಸೋಂಕಿನ ಪ್ರಕರಣ ವರದಿಯಾಗಿತ್ತು. ಆ ನಂತರ ದಿನವೊಂದರಲ್ಲೇ ಸೋಂಕಿತರ ಸಂಖ್ಯೆ ಎಂದಿಗೂ 100ರ ಗಡಿ ದಾಟಿರಲಿಲ್ಲ. ಜುಲೈ 21ರಂದು 99 ಮಂದಿ ಸೋಂಕಿತರು ಪತ್ತೆಯಾದದ್ದು ಈವರೆಗಿನ ಗರಿಷ್ಠ ಸಂಖ್ಯೆಯಾಗಿತ್ತು.

ಸೋಮವಾರ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿರುವುದು ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ. ಮತ್ತೊಂದೆಡೆ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಇಳಿಕೆಯಾಗಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. 144 ಮಂದಿ ಸೋಂಕಿತರು ಪತ್ತೆ ಆಗುವುದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 668ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ 28 ಮಂದಿಗೆ, ಸೋಂಕಿತರ ಸಂಪರ್ಕದಿಂದ 7 ಮಂದಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿರುವ ಒಬ್ಬರಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 11 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 11 ಮಂದಿಗೆ ಹಾಗೂ ಹೊರ ಜಿಲ್ಲೆಗೆ ಹೋಗಿ ಬಂದಿದ್ದ ಇಬ್ಬರಿಗೆ ಸೋಂಕು ಹರಡಿದೆ.

ಬಂಗಾರಪೇಟೆ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವ ಒಬ್ಬರಿಗೆ, ಸೋಂಕಿತರ ಸಂಪರ್ಕದಿಂದ ಮೂವರಿಗೆ ಮತ್ತು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ಬಂದಿರುವುದು ಗೊತ್ತಾಗಿದೆ.

ಆರೋಗ್ಯ ಸಿಬ್ಬಂದಿ: ಶ್ರೀನಿವಾಸಪುರ ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 22 ಮಂದಿಗೆ, ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ ಮತ್ತು ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಸೋಂಕು ತಗುಲಿದೆ. ಮುಳಬಾಗಿಲು ತಾಲ್ಲೂಕಿನಲ್ಲಿ ವಿಷಮ ಶೀತ ಜ್ವರಕ್ಕೆ ತುತ್ತಾಗಿರುವ 7 ಮಂದಿಗೆ, ಸೋಂಕಿತರ ಸಂಪರ್ಕದಿಂದ ಇಬ್ಬರಿಗೆ, ಹೊರ ಜಿಲ್ಲೆಗೆ ಹೋಗಿದ್ದ ಒಬ್ಬರಿಗೆ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಒಬ್ಬರಿಗೆ ಮತ್ತು 3 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಹರಡಿದೆ.

ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ, ಸುರಕ್ಷತಾ ಕ್ರಮವಾಗಿ ಇಡೀ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT