ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಿ: ಜಿ.ಪಂ ಅಧ್ಯಕ್ಷೆ ಗೀತಮ್ಮ

Last Updated 8 ಸೆಪ್ಟೆಂಬರ್ 2019, 19:30 IST
ಅಕ್ಷರ ಗಾತ್ರ

ಕೋಲಾರ: ‘ದೇಶದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸುತ್ತಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಮ್ಮ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ವತಿಯಿಂದ ಭಾನುವಾರ ಇಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಅನಕ್ಷರಸ್ಥರು ಸಾಕ್ಷರತಾ ಯೋಜನೆಗಳ ಪ್ರಯೋಜನ ಪಡೆದುಕೊಂಡು ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.

‘ಶೈಕ್ಷಣಿಕ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಸಾರ್ವಜನಿಕ ಕ್ಷೇತ್ರದ ಸಹಕಾರ, ಸಲಹೆ, ಸಹಭಾಗಿತ್ವ ಅಗತ್ಯವಗಿದೆ’ ಎಂದು ಹೇಳಿದರು.

‘ದೇಶದ ಪ್ರಗತಿಗೆ ಅನಕ್ಷರತೆ ಮಾರಕವಾಗಿದೆ. ಸಂಪೂರ್ಣ ಸಾಕ್ಷರತೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಅನಕ್ಷರಸ್ಥರನ್ನು ಮನವೊಲಿಸಿ ಅಕ್ಷರ ಕಲಿಸಲು ಪ್ರಯತ್ನಿಸಬೇಕು. ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನ ಸಿಗಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಆಂಜಿನಪ್ಪ ಮಾತನಾಡಿ, ‘ಅನಕ್ಷರತೆಯ ಕತ್ತಲು ಹೋಗಲಾಡಿಸಲು ಪ್ರತಿಯೊಬ್ಬರೂ ಪಣತೊಡಬೇಕು. ವಿದ್ಯಾವಂತರು ಒಬ್ಬರಿಗೆ ಅಕ್ಷರ ಕಲಿಸಿದರೆ ಲೋಕಶಿಕ್ಷಣ ಸಮಿತಿಯ ಕಾರ್ಯಕ್ರಮ ಯಶಸ್ವಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡತನ ನಿರ್ಮೂಲನೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅನಕ್ಷರಸ್ಥರಿಗೆ ಅದು ಅರಿವಿನ ಕೊರತೆಯಿಂದ ತಲುಪುತ್ತಿಲ್ಲ. ಇದರಿಂದಾಗಿ ಸಮಗ್ರ ಅಭಿವೃದ್ದಿ ಅಸಾಧ್ಯ’ ಎಂದರು.

‘ಗ್ರಾಮೀಣ ಭಾಗಗಳಲ್ಲಿ ಲೋಕಶಿಕ್ಷಣ ಸಮಿತಿಯಡಿ ಕೆಲಸ ಮಾಡುವ ಪ್ರೇರಕರು ಬದ್ಧತೆಯಿಂದ ಕೆಲಸ ಮಾಡಬೇಕು. ದಾಖಲೆಗಳಿಗಾಗಿ ಕೆಲಸ ಮಾಡದೇ ಕನಿಷ್ಟ ಒಂದಷ್ಟು ಅನಕ್ಷರಸ್ಥರಿಗೆ ಜ್ಞಾನದ ಬೆಳಕು ನೀಡಲು ಸಂಕಲ್ಪ ಮಾಡಿ’ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ರತ್ನಯ್ಯ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಅನಕ್ಷರಸ್ಥರು ಇರುವುದರಿಂದ ಶಾಲಾ ಶಿಕ್ಷಣಕ್ಕೂ ಅಡ್ಡಿಯಾಗಿದೆ, ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಮತ್ತೆ ಶಾಲೆಯ ಕಡೆ ತಿರುಗಿಯೂ ನೋಡುವುದಿಲ್ಲ’ ಎಂದು ಹೇಳಿದರು.

‘ಸರ್ಕಾರ ಸಾಕ್ಷರತೆಗಾಗಿ ಕೋಟ್ಯಾಂತರ ಹಣ ವೆಚ್ಚ ಮಾಡುತ್ತಿದೆ. ಸಾಕಷ್ಟು ಸುಧಾರಣೆಯಾಗಿದ್ದರೂ ಶೇ.100 ಸಾಕ್ಷರತೆಯ ಸಾಧನೆಯಾಗಿಲ್ಲ. ಸಾಕ್ಷರತಾ ಪ್ರೇರಕರು ಗ್ರಾಮದ ಶಾಲೆಗಳ ಶಿಕ್ಷಕರ ಸಹಕಾರ ಪಡೆದು ತರಗತಿ ನಡೆಸಿದರೆ ಗುರಿ ಸಾಧನೆಗೆ ಸಹಕಾರಿಯಾಗುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಗಂಗಪ್ಪ, ಸಾಕ್ಷರತಾ ಜಿಲ್ಲಾ ಸಂಯೋಜಕ ರಾಜಪ್ಪ, ತಾಲ್ಲೂಕು ಸಾಕ್ಷರತಾ ಸಂಯೋಜಕರಾದ ಶ್ರೀರಾಮ್, ಅಶ್ವಥ್, ಪ್ರೇರಕ ರಾಮಂದ್ರಪ್ಪ, ಸಮರ್ಥ ಭಾರತ ಟ್ರಸ್ಟ್ ಅಧ್ಯಕ್ಷ ತ್ಯಾಗರಾಜ್, ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT