ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಹೆಚ್ಚಳ: ಕಳವಳಕಾರಿ

2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ರೇಖಾ ವಿಷಾದ
Last Updated 9 ಆಗಸ್ಟ್ 2019, 13:54 IST
ಅಕ್ಷರ ಗಾತ್ರ

ಕೋಲಾರ: ‘ಮಕ್ಕಳ ವಿರುದ್ಧದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಜಾರಿಯಲ್ಲಿದ್ದರೂ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚುತ್ತಿರುವುದು ಕಳವಳಕಾರಿ’ ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ.ಎಸ್.ರೇಖಾ ವಿಷಾದಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಾಗೃತಿ ಸೇವಾ ಸಂಸ್ಥೆ ಸಹಯೋಗದಲ್ಲಿ ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮೂಲಭೂತ ಹಕ್ಕು ಮತ್ತು ಕರ್ತವ್ಯ, ಸಾಮಾನ್ಯ ಕಾನೂನು ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು. ಇಲ್ಲವೇ ಕಾನೂನು ಪ್ರಾಧಿಕಾರದ ಗಮನಕ್ಕೆ ತರಬೇಕು. ಶಾಲೆಗಳಲ್ಲಿ ಕಡ್ಡಾಯವಾಗಿ ಸಹಾಯವಾಣಿ ಸಂಖ್ಯೆ ಹಾಕಲಾಗಿದ್ದು, ಆ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

‘ಶಾಲೆಯಲ್ಲಿ, ಸಂಚರಿಸುವ ಬಸ್‌ಗಳಲ್ಲಿ ಅಥವಾ ಇತರೆಡೆ ಆಗುವ ಲೈಂಗಿಕ ಕಿರುಕುಳದ ಬಗ್ಗೆ ಪೋಷಕರಿಗೆ ತಿಳಿಸಲು ಹೆಣ್ಣು ಮಕ್ಕಳಿಗೆ ಮುಜುಗರ ಉಂಟಾದಲ್ಲಿ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಿ’ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್.ಗಂಗಾಧರ್ ಕಿವಿಮಾತು ಹೇಳಿದರು.

‘ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯದ ವಿರುದ್ದ ಧ್ವನಿಯೆತ್ತಬೇಕು. ಕಿರುಕುಳದ ವಿರುದ್ಧ ದೂರು ನೀಡಲು ಧೈರ್ಯದಿಂದ ಮುಂದೆ ಬಾರದಿದ್ದರೆ ಭವಿಷ್ಯದಲ್ಲಿ ಅದರಿಂದ ಮತ್ತಷ್ಟು ಸಮಸ್ಯೆ ಆಗುತ್ತದೆ. ಅದಕ್ಕೆ ಅವಕಾಶ ನೀಡದೆ ಆರಂಭದಲ್ಲೇ ದೂರು ಕೊಡಿ’ ಎಂದು ಸಲಹೆ ನೀಡಿದರು.

‘ಹೆಣ್ಣು ಮಕ್ಕಳ ರಕ್ಷಣೆಗಾಗಿ ಉಚಿತ ಸಹಾಯವಾಣಿ ಇದೆ. ಸಮಸ್ಯೆಯಾದರೆ ಕೂಡಲೇ ದೂರು ನೀಡಿ. ಕಾನೂನು ಪ್ರಾಧಿಕಾರಕ್ಕೆ ದೂರು ನೀಡಿದರೆ ರಕ್ಷಣೆ ಕೊಡುತ್ತೇವೆ’ ಎಂದು ಭರವಸೆ ನೀಡಿದರು.

ಉಪನ್ಯಾಸ: ವಕೀಲ ಕೆ.ಆರ್.ಧನರಾಜ್ ಜನ ಸಾಮಾನ್ಯರು ದಿನನಿತ್ಯ ಪಾಲಿಸಬೇಕಾದ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ವಕೀಲ ಕೆ.ವಿ.ಸುರೇಂದ್ರಕುಮಾರ್‌ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಶೈಲಾ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎನ್.ಡಿ.ಶ್ರೀನಿವಾಸ್, ನೂತನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎ.ಅಬ್ದುಲ್ ಖಲಾಕ್, ಉಪನ್ಯಾಸಕರಾದ ಎಸ್.ಸಿ.ಪದ್ಮಾ, ಎ.ಎಲ್.ವನಜಾ, ಎಚ್.ಆರ್.ಶಂಕರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT