ಸೋಮವಾರ, ಜನವರಿ 18, 2021
19 °C
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ಭರವಸೆ

ಜಿಲ್ಲಾ ಆಸ್ಪತ್ರೆಗೆ ಮೂಲಸೌಕರ್ಯ: ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಕೋವಿಡ್–19 ಸಂಕಷ್ಟದ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಯ ಹಣದಲ್ಲಿ ಹೆಚ್ಚಿನ ಮೂಲಸೌಕರ್ಯ ಕಲ್ಪಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್ ಭರವಸೆ ನೀಡಿದರು.

ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ ಸಂಗ್ರಹವಾಗಿರುವ ಮೊತ್ತವನ್ನು ಗಣಿ ಬಾಧಿತ ಗ್ರಾಮಗಳಲ್ಲಿ ವಿನಿಯೋಗಿಸುವ ಕುರಿತು ಇಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿ, ‘ಜಿಲ್ಲಾ ಆಸ್ಪತ್ರೆಯಲ್ಲಿನ ಔಷಧ, ಮಾತ್ರ ದಾಸ್ತಾನು ಶೈತ್ಯಾಗಾರ ನವೀಕರಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ ಅನೇಕ ಜನರು ಕಲ್ಲು ಒಡೆಯುವ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಲ್ಲಿ ಬಹುಪಾಲು ಮಂದಿ ಬಡವರಾಗಿದ್ದಾರೆ. ಆದ್ದರಿಂದ ಇವರಿಗೆ ಕ್ಷೇತ್ರವಾರು ಪರವಾನಗಿ ನೀಡಿದರೆ ಜೀವನೋಪಾಯಕ್ಕೆ ಆಧಾರವಾಗುತ್ತದೆ’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಕಲ್ಲು ಒಡೆಯುವ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರ ಬಗ್ಗೆ ಸರ್ವೆ ಮಾಡಬೇಕು. ಪರವಾನಗಿ ನೀಡುವ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ಮೊದಲ ಆದ್ಯತೆ ನೀಡಬೇಕು. ಕೆಲವರು ತಮಿಳುನಾಡು ಮತ್ತು ಆಂಧ್ರಪ್ರದೇಶದಿಂದ ಜಿಲ್ಲೆಗೆ ಬಂದು ಅನಧಿಕೃತವಾಗಿ ಗ್ರಾನೈಟ್ ಮಾರುತ್ತಿದ್ದಾರೆ. ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಿ’ ಎಂದು ಸಂಸದ ಎಸ್‌.ಮುನಿಸ್ವಾಮಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದರು.

ವಿಶೇಷ ಅನುದಾನವಿಲ್ಲ: ‘ಸರ್ಕಾರದಿಂದ ಕೋವಿಡ್‌ ಪರಿಸ್ಥಿತಿ ನಿರ್ವಹಣೆಗಾಗಿ ಯಾವುದೇ ವಿಶೇಷ ಅನುದಾನ ಬಂದಿಲ್ಲ. ಖನಿಜ ಪ್ರತಿಷ್ಠಾನ ನಿಧಿಯಲ್ಲಿ ಸಂಗ್ರಹವಾಗಿರುವ ಹಣದಲ್ಲಿ ಶೇ 30ರಷ್ಟನ್ನು ಕೋವಿಡ್ ನಿರ್ವಹಣೆಗೆ ಮೀಸಲಿಡಲಾಗಿದೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ವಿವರಿಸಿದರು.

‘ಜಿಲ್ಲಾ ಆಸ್ಪತ್ರೆಗೆ ಕಾಂಪೌಂಡ್‌ನ ಅಗತ್ಯವಿದೆ. ಸಂಸದರ ಮತ್ತು ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಕಾಂಪೌಂಡ್ ನಿರ್ಮಾಣ ಮಾಡಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸಿಬ್ಬಂದಿಯಿದ್ದು, ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗುತ್ತಿದೆ. ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕರಾದ ಕೆ.ಶ್ರೀನಿವಾಸಗೌಡ, ಕೆ.ವೈ.ನಂಜೇಗೌಡ, ಎಂ.ರೂಪಕಲಾ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.