ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಒ ನೇಮಕಕ್ಕೆ ಒತ್ತಾಯ: ಧರಣಿ

Last Updated 16 ಸೆಪ್ಟೆಂಬರ್ 2020, 15:05 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯನ್ನು ಶೀಘ್ರವೇ ಭರ್ತಿ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ಜಿ.ಪಂ ಎದುರು ಧರಣಿ ನಡೆಸಿದರು.

‘ಜಿ.ಪಂ ಸಿಇಒ ವರ್ಗಾವಣೆ ಮಾಡಿದ ಸರ್ಕಾರ ಆ ಹುದ್ದೆಗೆ ಹೊಸ ಅಧಿಕಾರಿಯನ್ನು ನಿಯೋಜಿಸಿಲ್ಲ. ಇದರಿಂದ ಜಿ.ಪಂ ಆಡಳಿತ ಹಳಿ ತಪ್ಪಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಸಿಇಒ ಹುದ್ದೆ ಖಾಲಿ ಇರುವುದರಿಗೆ ಜನರ ಸಮಸ್ಯೆಗೆ ಸ್ಪಂದನೆ ಇಲ್ಲವಾಗಿದೆ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘ತಾತ್ಕಾಲಿಕವಾಗಿ ಸಿಇಒ ಹುದ್ದೆಯ ಕಾರ್ಯಭಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿ ಅವರಿಗೆ ಕಾರ್ಯ ಒತ್ತಡ ಹೆಚ್ಚಿದೆ. ಹೀಗಾಗಿ ಅವರಿಗೆ ಜಿ.ಪಂನ ದೈನಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

‘ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸೇರಿದಂತೆ ಸಾಕಷ್ಟು ಸಮಸ್ಯೆ ಎದುರಾಗಿವೆ. ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಮುಗಿದಿದ್ದು, ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಸಿಇಒ ಮತ್ತು ಗ್ರಾ.ಪಂ ಗಳಲ್ಲಿ ಚುನಾಯಿತ ಸದಸ್ಯರು ಇಲ್ಲದ ಕಾರಣ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ಆರೋಪಿಸಿದರು.

ಭ್ರಷ್ಟಾಚಾರ ತಾಂಡವ: ‘ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿದ್ದ ಹಿಂದಿನ ಸಿಇಒ ದರ್ಶನ್‌ ಅವರನ್ನು ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತಂದು ವರ್ಗಾವಣೆ ಮಾಡಿಸಿದರು. ಸಿಇಒ ವರ್ಗಾವಣೆಯಲ್ಲಿ ಜಿಲ್ಲೆಯ ಕೆಲ ಹಿರಿಯ ಅಧಿಕಾರಿಗಳ ಪಾತ್ರವಿದೆ. ದರ್ಶನ್‌ ಅವರ ವರ್ಗಾವಣೆ ನಂತರ ಜಿ.ಪಂನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ’ ಎಂದು ಧರಣಿನಿರತರು ದೂರಿದರು.

‘ಸರ್ಕಾರ ಶೀಘ್ರವೇ ಸಿಇಒ ನೇಮಕ ಮಾಡಿ ಜಿಲ್ಲಾ ಪಂಚಾಯಿತಿಯಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಬೃಹತ್‌ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಸದಸ್ಯರಾದ ಮಂಜುನಾಥ್, ಹನುಮಯ್ಯ, ನವೀನ್, ನಾಗೇಶ್, ತಿಮ್ಮಣ್ಣ, ವಿನೋದ್, ವೆಂಕಟೇಶಪ್ಪ, ಕೇಶವ, ಸುಧಾಕರ್, ರವಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT