ಕೋಲಾರ: ಜಿಲ್ಲೆಯಲ್ಲಿ ವೈರಾಣು ಜ್ವರಕ್ಕೆ ಮಕ್ಕಳು ಒಳಗಾಗುತ್ತಿರುವುದನ್ನು ತಡೆಗಟ್ಟಲು ವಿಶೇಷ ವೈದ್ಯರ ತಂಡ ರಚಿಸಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಶನಿವಾರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್ ಅವರಿಗೆ ಮನವಿ ಸಲ್ಲಿಸಿದರು.
ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿರುವುದಾಗಿ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವೈರಲ್ ಫೀವರ್ ಮಕ್ಕಳಲ್ಲಿ ಕಾಣಿಸಿಕೊಂಡಿರುವುದು ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ. ಈಗಾಗಲೇ ನೂರಾರು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಆರೋಗ್ಯ ಇಲಾಖೆಯಿಂದ ಯಾವುದೇ ಕ್ರಮಕೈಗೊಳ್ಳದೇ ಇರುವುದು ಖಂಡನೀಯವಾಗಿದ್ದು, ಕೂಡಲೇ ವಿಶೇಷ ವೈದ್ಯರ ತಂಡವನ್ನು ರಚಿಸಿ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ಮುಖಂಡ ಕೆ.ನಾರಾಯಣಗೌಡ ಆಗ್ರಹಿಸಿದರು.
ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‍ಗಳ ಹಾವಳಿ ಬಗ್ಗೆ ಸಾಕಷ್ಟು ಬಾರಿ ಮನವಿ ಮೂಲಕ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಗಡಿ ಭಾಗಗಳಲ್ಲಂತೂ ಪರಿಸ್ಥಿತಿ ಹೇಳತೀರದಾಗಿದ್ದು, ಜನರ ಜೀವಗಳ ಜೊತೆ ಚೆಲ್ಲಾಟವಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದರು.
ಈಗಾಗಲೇ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರು ವಿಧಿಯಿಲ್ಲದೆ ನಕಲಿ ಕ್ಲಿನಿಕ್‍ಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ ವಿಶೇಷ ವೈದ್ಯರ ತಂಡ ರಚನೆ ಮಾಡುವ ಜೊತೆಗೆ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಿ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಡಾ.ಚಂದನ್, ತಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಇ.ಮಂಜುನಾಥ್, ಸದಸ್ಯರಾದ ಹನುಮಯ್ಯ, ನಾಗೇಶ್, ತಿಮ್ಮಣ್ಣ, ವೆಂಕಟೇಶ್, ನಾಗಯ್ಯ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.