ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಒತ್ತಾಯ; ಎಸ್ಎಫ್‌ಐ ಸದಸ್ಯರಿಂದ ಧರಣಿ

Last Updated 21 ಜನವರಿ 2020, 10:50 IST
ಅಕ್ಷರ ಗಾತ್ರ

ಕೋಲಾರ: ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌) ಸದಸ್ಯರು ನಗರದಲ್ಲಿ ಸೋಮವಾರ ಧರಣಿ ನಡೆಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿಯಿಂದ ಮೆಕ್ಕೆ ವೃತ್ತದವರೆಗೂ ಧರಣಿ ನಡೆಸಿದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸರ್ಕಾರದ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿದರು.

ಎಸ್‌ಎಫ್‌ಐ ಸದಸ್ಯೆ ಚಾಂದಿನಿ ಮಾತನಾಡಿ, ‘ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಕರ್ಯಗಳಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯ ಸರ್ಕಾರ ಶೈಣಿಕ್ಷ ಕ್ಷೇತ್ರವನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ದ್ವಿತೀಯ ಹಾಗೂ ಅಂತಿಮ ವರ್ಷದಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್ ನೀಡಬೇಕು’ ಎಂದು ಒತ್ತಾಯಿಸಿದರು.

‘ಹಿಂದೆ ಸರ್ಕಾರದಿಂದ 2016-17ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗಿತ್ತು. ಆದರೆ, 2017-18 ಮತ್ತು 2018-19 ನೇ ಸಾಲಿನಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಿರಲಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿದಾಗ ಸರ್ಕಾರದಿಂದ ಬಂದ ಕೂಡಲೇ ವಿತರಿಸಲಾಗುವುದು ಎಂದು ಭರವಸೆ ನೀಡಿದ್ದರೂ, ಇದುರೆಗೂ ಭರವಸೆ ಈಡೇರಿಸಿಲ್ಲ’ ಎಂದು ದೂರಿದರು.

‘ಸರ್ಕಾರಿ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳು ಬಡ, ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು, ಉನ್ನತ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ಅವಶ್ಯವಿದೆ. ಹಾಗಾಗಿ ರಾಜ್ಯ ಸರ್ಕಾರ ತಾರತಮ್ಯ ಎಸಗದೆ ಈ ಶೈಕ್ಷಣಿಕ ವರ್ಷದಲ್ಲೇ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಜತೆಗೆ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡುವಂತೆ ನೀಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಎಸ್‌ಎಫ್‌ಐ ಮುಖಂಡರಾದ ಮಣಿ, ಚಂದ್ರಶೇಖರ್, ಶ್ರೀಕಾಂತ್, ಅಂಬರೀಶ್, ಸುಪ್ರೀಮ್, ಪೃಥ್ವಿ, ವೆಂಕಟ್, ಅನಿತಾ, ರಮ್ಯಾ, ಅರ್ಪಿತಾ, ಶ್ರಾವಣಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT