ಬುಧವಾರ, ಡಿಸೆಂಬರ್ 8, 2021
27 °C

ಕೋಲಾರ: ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನ್ಯಾಯಮೂರ್ತಿ ಎ.ಜಿ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

‘ಸದಾಶಿವ ಆಯೋಗವು ವರದಿ ನೀಡಿ ಹಲವು ವರ್ಷಗಳೇ ಕಳೆದಿವೆ. ವರದಿ ಜಾರಿಗಾಗಿ ರಾಜ್ಯದೆಲ್ಲೆಡೆ ನಿರಂತರ ಹೋರಾಟ ನಡೆಯುತ್ತಿವೆ. ಆದರೆ, ಸರ್ಕಾರವು ವರದಿ ಜಾರಿಗೆ ಮೀನಾಮೇಷ ಎಣಿಸುತ್ತಿದೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರವು ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿ ಸರಿಪಡಿಸಿ ಜನಸಂಖ್ಯೆಗೆ ಅನುಗುಣವಾಗಿ ವರ್ಗೀಕರಣ ಮಾಡಲು ಸದಾಶಿವ ಆಯೋಗ ರಚಿಸಿತ್ತು. ಆಯೋಗವು ಗಣತಿ ನಡೆಸಿ ಮಾದಿಗ ಸಮುದಾಯಕ್ಕೆ ಶೇ 6, ಹೊಲೆಯ ಸಮುದಾಯಕ್ಕೆ ಶೇ 5, ಕೊರಮ, ಲಂಬಾಣಿ ಮತ್ತು ಬೋವಿ ಸಮುದಾಯಕ್ಕೆ ಶೇ 3, ಇತರೆ ಜಾತಿಗಳಿಗೆ ಶೇ 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸು ಮಾಡಿದೆ’ ಎಂದು ಸಮಿತಿ ಜಿಲ್ಲಾ ಘಟಕದ ಸಂಚಾಲಕ ಮುನಿಯಪ್ಪ ಹೇಳಿದರು.

‘ಸುಪ್ರೀಂ ಕೋರ್ಟ್‌ ನೊಂದ ಜನ ಸಮುದಾಯಗಳ ಸಾಮಾಜಿಕ ನ್ಯಾಯಕ್ಕೆ ಧ್ವನಿಯಾಗಿದೆ. ವಿಧಾನಸಭೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದ ಮುಂದಿದ್ದ ಅಡೆತಡೆ ನಿವಾರಣೆಯಾಗಿದೆ’ ಎಂದು ತಿಳಿಸಿದರು.

ಸರ್ಕಾರಗಳು ವಿಫಲ: ‘ಶೋಷಣೆಗೆ ಒಳಗಾಗಿರುವ ತಳ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸಿಬೇಕೆಂಬ ಉದ್ದೇಶದಿಂದ ಅಂಬೇಡ್ಕರ್ ಸಂವಿಧಾನದ ಮೂಲಕ ಮೀಸಲಾತಿ ಕಾಯ್ದೆ ಅನುಷ್ಠಾನಗೊಳಿಸಿದ್ದಾರೆ. ಇದರಿಂದ ದಲಿತರು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಪಡೆದು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಸರ್ಕಾರಗಳು ಪೂರ್ಣ ಪ್ರಮಾಣದ ಮೀಸಲಾತಿ ಜಾರಿಗೊಳಿಸುವಲ್ಲಿ ವಿಫಲವಾಗಿವೆ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನು ಪ್ರಸಕ್ತ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದು ಜಾರಿಗೊಳಿಸಬೇಕು. ಸುಗ್ರೀವಾಜ್ಞೆ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಭೂ ಪರಭಾರೆ ನಿಷೇಧ ಕಾಯ್ದೆಗೆ (ಪಿಟಿಸಿಎಲ್) ತಿದ್ದುಪಡಿ ತರಬೇಕು’ ಎಂದು ಮನವಿ ಮಾಡಿದರು.

ಸಮಿತಿ ರಾಜ್ಯ ಘಟಕದ ಸಂಘಟನಾ ಸಂಚಾಲಕ ರಮೇಶ್, ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ವಿಜಿ, ಖಜಾಂಚಿ ಗೋವಿಂದರಾಜು, ಸಂಘಟನಾ ಸಂಚಾಲಕರಾದ ಮುನಿಚೌಡಪ್ಪ, ವೆಂಕಟರವಣಪ್ಪ, ವೆಂಕಟೇಶ್, ಕೇಶವ, ಕೆ.ಪಳನಿ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು