ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ರೈತ ಕುಲಕ್ಕೆ ಮಾರಕ: ಜೆಡಿಎಸ್ ಆಕ್ರೋಶ, ಧರಣಿ

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯ
Last Updated 18 ಆಗಸ್ಟ್ 2020, 13:15 IST
ಅಕ್ಷರ ಗಾತ್ರ

ಕೋಲಾರ: ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಇಲ್ಲಿ ಮಂಗಳವಾರ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೋವಿಡ್‌ ಸಂದರ್ಭ ಬಳಸಿಕೊಂಡು ಸುಗ್ರೀವಾಜ್ಞೆ ಮೂಲಕ ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ. ಸರ್ಕಾರಗಳು ರೈತರನ್ನು ಬೀದಿಗೆ ತಳ್ಳಿ, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿವೆ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ 1 ವರ್ಷದ ಅಧಿಕಾರಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಕೊರೊನಾ ಸೋಂಕಿನ ನೆಪದಲ್ಲಿ ಜನರ ತೆರಿಗೆ ಹಣ ಲೂಟಿ ಮಾಡಿದ್ದೇ ಸರ್ಕಾರದ ದೊಡ್ಡ ಸಾಧನೆ. ಬಿಜೆಪಿಯ ದುರಾಡಳಿತದಿಂದ ಜನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಕಿಡಿಕಾರಿದರು.

‘ಸರ್ಕಾರ ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ. ಸರ್ಕಾರದ ಈ ನಡೆ ಖಂಡನೀಯ’ ಎಂದು ಗುಡುಗಿದರು.

‘ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದರಿಂದ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಣ್ಣ ಭೂ ಹಿಡುವಳಿದಾರರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ಧರಣಿನಿರತರು ಅಸಮಾಧಾನ ವ್ಯಕ್ತಪಡಿಸಿದರು.

‘ರೈತ ಕುಲಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ರೈತರಿಗೆ ಜಾಗೃತಿ ಮೂಡಿಸಿ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು, ಮಾಜಿ ಸದಸ್ಯ ಆರ್‌.ಚೌಡರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ನಂಜುಂಡಪ್ಪ, ತೂಪಲ್ಲಿ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಗೋಪಾಲಗೌಡ, ಮಂಜುನಾಥ್, ಪಕ್ಷದ ಮುಖಂಡರಾದ ಗೋಪಾಲಪ್ಪ, ರಾಮು, ಮಲ್ಲೇಶ್‌ಬಾಬು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT