ಬುಧವಾರ, ಅಕ್ಟೋಬರ್ 16, 2019
21 °C

ಕೊಲೆ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಒತ್ತಾಯ

Published:
Updated:
Prajavani

 ಕೋಲಾರ: ವಿಜಯಪುರ ಜಿಲ್ಲೆಯ ಅಸಂತಾಪುರ ಗ್ರಾಮದ ಯುವತಿ ರೇಣುಕಾ ಮಾದರ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿ, ಪ್ರಗತಿಪರ ದಲಿತ ಸಂಘಟನೆಗಳ ಯುವ ವೇದಿಕೆಯಿಂದ ನಗರದಲ್ಲಿ ಮಂಗಳವಾರ ಧರಣಿ ನಡೆಸಿದರು.

ಮುಖಂಡ ಟಿ.ವಿಜಯ್‌ಕುಮಾರ್ ಮಾತನಾಡಿ, ‘ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ವಿಫಲವಾಗಿದೆ’ ಎಂದು ದೂರಿದರು.

‘ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿ ಇರುವ ಜಾಗೃತಿ ಸಮಿತಿಗಳನ್ನು ರಚಿಸಿ ಬಲವರ್ಧನೆಗೊಳಿಸಬೇಕು. ಮಹಿಳೆ ರಕ್ಷಣೆ ಮತ್ತು ಅವರ ನೋವುಗಳನ್ನು ಹಂಚಿಕೊಳ್ಳಲು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಜಿಲ್ಲೆಯ ಎಲ್ಲಾ ಸರ್ಕಾರಿ, ಸರ್ಕಾರೇತರ ಶಾಲಾ, ಕಾಲೇಜು, ಹಾಸ್ಟೆಲ್, ಇಲಾಖೆಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ಕಾಂಪೌಂಡ್, ಆಡಳಿತ ಕಚೇರಿಯಲ್ಲಿ ಸಿಸಿಕ್ಯಾಮೆರಾ ಅಳವಡಿಸಬೇಕು’ ಎಂದು ಆಗ್ರಹಿಸಿದರು.

‘ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹೆಣ್ಣು ಮಕ್ಕಳ ಚಿಕಿತ್ಸಾ ಘಟಕ ಆರಂಭಿಸುವುದರ ಜತೆಗೆ ಮಹಿಳಾ ವೈದ್ಯರೇ ಚಿಕಿತ್ಸೆ ನೀಡಬೇಕು. ಪೊಲೀಸ್ ಠಾಣೆಯಲ್ಲಿ ತಿಂಗಳಿಗೊಮ್ಮೆ ದಲಿತ ಕುಂದುಕೊರತೆಗಳ ಸಭೆಗಳನ್ನು ಸಮರ್ಪಕವಾಗಿ ನಡೆಸಬೇಕು. ಕೋಲಾರ, ಕೆಜಿಎಫ್ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ದಾಖಲಾಗಿರುವ ಅಟ್ರಾಸಿಟಿ ದೂರುಗಳಿಗೆ ಸಂಬಂಧಿಸಿದಂತೆ ಸರಿಯಾಗಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

ಪ್ರಗತಿಪರ ಸಂಘಟನೆಗಳ ಮುಖಂಡರಾದ ನಾಗರಾಜ್, ವೆಂಕಟೇಶ್, ಸೋಮಶೇಖರ್, ರಾಮಾಂಜಿನಪ್ಪ, ದೇವರಾಜ್, ನಾಗೇಶ್, ಎಂ.ಚಂದ್ರಶೇಖರ್, ಮಂಜುಳಾ, ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

Post Comments (+)