ಶುಕ್ರವಾರ, ಆಗಸ್ಟ್ 19, 2022
22 °C
ಕೆರೆ– ರಾಜಕಾಲುವೆಗಳ ಒತ್ತುವರಿ: ರೈತ ಸಂಘ ಸದಸ್ಯರ ಪ್ರತಿಭಟನೆ

ತೆರವಿಗೆ ವಿಶೇಷ ತಂಡ ರಚಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲೆಯ ಕೆರೆ, ರಾಜಕಾಲುವೆಗಳ ಒತ್ತುವರಿ ತೆರವಿಗೆ ವಿಶೇಷ ತಂಡ ರಚಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ಮಾಡಿದರು.

‘ರಿಯಲ್‌ ಎಸ್ಟೇಟ್‌ ಮಾಫಿಯಾ ಜಿಲ್ಲೆಯ ಬಹುಪಾಲು ಕೆರೆಗಳು ಹಾಗೂ ರಾಜಕಾಲುವೆಗಳನ್ನು ಒತ್ತುವರಿ ಮಾಡಿದೆ. ಕೆರೆಯಂಗಳ ಹಾಗೂ ರಾಜಕಾಲುವೆಗಳ ಜಾಗದಲ್ಲಿ ಅನಧಿಕೃತ ಲೇಔಟ್‌ಗಳು ತಲೆ ಎತ್ತಿವೆ. ಲಂಚದಾಸೆಗೆ ಅಧಿಕಾರಿಗಳೇ ಈ ಅಕ್ರಮಕ್ಕೆ ಕೈಜೋಡಿಸಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.

‘ಕೆರೆಗಳ ತವರು ಎಂದು ಹೆಸರಾಗಿರುವ ಕೋಲಾರ ಜಿಲ್ಲೆಯಲ್ಲಿ 2,800ಕ್ಕೂ ಹೆಚ್ಚು ಕೆರೆಗಳಿವೆ. ಈ ಹಿಂದೆ ಮಳೆಗಾಲದಲ್ಲಿ ಎಲ್ಲಾ ಕೆರೆಗಳು ತುಂಬುತ್ತಿದ್ದವು. ಆದರೆ, ಭೂಗಳ್ಳರ ಹಾವಳಿಯಿಂದಾಗಿ ಕೆರೆ, ರಾಜಕಾಲುವೆಗಳು ಕಣ್ಮರೆಯಾಗಿವೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಕಳವಳ ವ್ಯಕ್ತಪಡಿಸಿದರು.

‘ನಕಲಿ ದಾಖಲೆಪತ್ರ ಸೃಷ್ಟಿಸಿ ಗ್ರಾಮೀಣ ಭಾಗದ ಸರ್ಕಾರಿ ಗೋಮಾಳ, ಗುಂಡು ತೋಪು, ಸ್ಮಶಾನ, ಕೆರೆ ಅಂಗಳ ಒತ್ತುವರಿ ಮಾಡಲಾಗಿದೆ. ಆದರೆ, ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಸರ್ಕಾರಿ ಜಮೀನು ರಕ್ಷಿಸಬೇಕಾದ ಅಧಿಕಾರಿಗಳೇ ಭೂಗಳ್ಳರ ಜತೆ ಶಾಮೀಲಾಗಿದ್ದಾರೆ’ ಎಂದು ಕಿಡಿಕಾರಿದರು.

ಸ್ವರೂಪವೇ ಬದಲು: ‘ಪೂರ್ವಿಕರು ಒಂದು ಕೆರೆಯಿಂದ ಮತ್ತೊಂದು ಕೆರೆಗೆ ರಾಜಕಾಲುವೆಗಳ ಮೂಲಕ ನೀರಿನ ಸಂಪರ್ಕ ಕಲ್ಪಿಸಿದ್ದರು. ಈಗ ರಾಜಕಾಲುವೆಗಳು ಒತ್ತುವರಿ ಆಗಿರುವುದರಿಂದ ಮಳೆ ನೀರು ಕೆರೆಗಳಿಗೆ ಹರಿಯುತ್ತಿಲ್ಲ. ಮತ್ತೊಂದೆಡೆ ಒತ್ತುವರಿಯಿಂದ ಕೆರೆ ಹಾಗೂ ರಾಜಕಾಲುವೆಗಳ ಮೂಲ ಸ್ವರೂಪವೇ ಬದಲಾಗಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಸಣ್ಣಪುಟ್ಟ ಜಮೀನು ಒತ್ತುವರಿ ಮಾಡುವ ರೈತರ ಮೇಲೆ ಶಿಸ್ತುಕ್ರಮ ಜರುಗಿಸುವ ಜಿಲ್ಲಾಡಳಿತ ಕೆರೆ, ರಾಜಕಾಲುವೆಗಳ ಒತ್ತುವರಿ ವಿಚಾರದಲ್ಲಿ ಮೌನಕ್ಕೆ ಶರಣಾಗಿದೆ. ಅಧಿಕಾರಿಗಳು ನೆಪ ಮಾತ್ರಕ್ಕೆ ಕೆಲ ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸಿ ತೆರೆಮರೆಯಲ್ಲಿ ರಿಯಲ್‌ ಎಸ್ಟೇಟ್‌ ದಂಧೆಕೋರರ ಜತೆ ವ್ಯವಹಾರ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು.

ಮುತ್ತಿಗೆ ಎಚ್ಚರಿಕೆ: ‘ಜಿಲ್ಲಾಧಿಕಾರಿಯು ಕೆರೆ, ರಾಜಕಾಲುವೆಗಳು ಹಾಗೂ ಸರ್ಕಾರಿ ಜಮೀನುಗಳ ರಕ್ಷಣೆ ವಿಚಾರದಲ್ಲಿ ವಿಶೇಷ ಕಾಳಜಿ ವಹಿಸಬೇಕು. ಒತ್ತುವರಿದಾರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಒತ್ತುವರಿ ತೆರವು ಮಾಡಿಸಬೇಕು. ಒತ್ತುವರಿದಾದರಿಗೆ ನೆರವು ನೀಡಿರುವ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಸಂಘಟನೆ ಸದಸ್ಯರಾದ ಶಾಂತಮ್ಮ, ಸಂಧ್ಯಾ, ಮಂಜುನಾಥ್, ಪ್ರತಾಪ್, ಮಣಿ, ಸುಪ್ರೀಂಚಲ, ವಿನೋದ್, ರವಣಪ್ಪ, ಶ್ರೀನಿವಾಸರೆಡ್ಡಿ, ಆಂಜಿನಪ್ಪ, ರವೀಂದ್ರ ಪಾಲ್ಗೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.