ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ

ರಾಜ್ಯ ರೈತ ಸೇನೆ ಸದಸ್ಯರ ಬೈಕ್‌ ರ್‌್ಯಾಲಿ: ಸರ್ಕಾರಗಳ ವಿರುದ್ಧ ಆಕ್ರೋಶ
Last Updated 19 ನವೆಂಬರ್ 2020, 14:18 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸೇನೆ ಸದಸ್ಯರು ಇಲ್ಲಿ ಗುರುವಾರ ಧರಣಿ ನಡೆಸಿದರು.

ಬಂಗಾರಪೇಟೆ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್‌ ರ್‌್ಯಾಲಿ ನಡೆಸಿದ ಸಂಘಟನೆ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಜನರ ಹಿತ ಕಾಯುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಪರವಾಗಿರುವ ಸರ್ಕಾರಗಳು ಕೋವಿಡ್‌ ಹೆಸರಿನಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿವೆ’ ಎಂದು ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಎಂ.ಆರ್.ನಾರಯಣಗೌಡ ಆರೋಪಿಸಿದರು.

‘ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರಿ ಜಮೀನುಗಳು ಭೂಗಳ್ಳರ ಪಾಲಾಗುತ್ತಿವೆ. ಕಂದಾಯ ಇಲಾಖೆ ಅಧಿಕಾರಿಗಳೇ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆಪತ್ರ ಸೃಷ್ಟಿಸುತ್ತಿದ್ದಾರೆ. ಕೆರೆ, ರಾಜಕಾಲುವೆ, ಗೋಮಾಳ, ಗುಂಡು ತೋಪುಗಳು ಮಾಯವಾಗುತ್ತಿವೆ. ಲಂಚದಾಸೆಗೆ ಅಧಿಕಾರಿಗಳೇ ಭೂಗಳ್ಳರ ಜತೆ ಶಾಮೀಲಾಗಿದ್ದಾರೆ’ ಎಂದು ದೂರಿದರು.

ಬದುಕು ಅತಂತ್ರ: ‘ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಸರ್ಕಾರ ಕೊರೊನಾ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ. ಸರ್ಕಾರಗಳು ಬಂಡವಾಳಶಾಹಿಗಳ ಹಿತರಕ್ಷಣೆಗಾಗಿ ಜನಪರ ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿವೆ. ಸರ್ಕಾರಗಳ ದುರಾಡಳಿತದಿಂದ ಬಡ ಜನರು, ಕಾರ್ಮಿಕರು, ರೈತರ ಬದುಕು ಅತಂತ್ರವಾಗಿದೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್‌ಗೌಡ ಕಿಡಿಕಾರಿದರು.

‘ದೇಶ ಹಾಗೂ ರಾಜ್ಯದಲ್ಲಿ ಆಡಳಿತಾತ್ಮಕ ಅರಾಜಕತೆ ಸೃಷ್ಟಿಯಾಗಿದೆ. ಪ್ರಧಾನಿ ಮೋದಿಯವರು ಚುನಾವಣೆ ಪೂರ್ವದಲ್ಲಿ ಕೊಟ್ಟ ಆಶ್ವಾಸನೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಸರ್ಕಾರಗಳು ರೈತರನ್ನು ಬೀದಿಗೆ ತಳ್ಳಿ, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿವೆ. ಕೊರೊನಾ ಸೋಂಕಿನ ನೆಪದಲ್ಲಿ ಜನರ ತೆರಿಗೆ ಹಣ ಲೂಟಿ ಮಾಡಿದ್ದೇ ಸರ್ಕಾರಗಳ ಸಾಧನೆ’ ಎಂದು ಲೇವಡಿ ಮಾಡಿದರು.

ಬದುಕು ಬರ್ಬರ: ‘ಸರ್ಕಾರಗಳು ಕೋವಿಡ್‌ ಸಂದರ್ಭ ಬಳಸಿಕೊಂಡು ಸುಗ್ರೀವಾಜ್ಞೆ ಮೂಲಕ ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆ ಜಾರಿಗೊಳಿಸುತ್ತಿವೆ. ದೇಶವು ಮೊದಲೇ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿತ್ತು. ಕೋವಿಡ್‌ ಮತ್ತು ಲಾಕ್‌ಡೌನ್‌ ಕಾರಣಕ್ಕೆ ದೇಶದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ಕೃಷಿಕರು, ಕಾರ್ಮಿಕರು, ಬಡವರು, ದಲಿತರ ಬದುಕು ಬರ್ಬರವಾಗಿದೆ’ ಎಂದು ಧರಣಿನಿರತರು ಗುಡುಗಿದರು.

‘ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಎಲ್ಲಾ ಸಮುದಾಯದ ಜನರಿಗೂ ಹಣಕಾಸು ನೆರವು ನೀಡಬೇಕು. ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಹಣ ಬಿಡುಗಡೆ ಮಾಡಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೆ.ಬಿ.ಮುನಿವೆಂಕಟಪ್ಪ, ಉಪಾಧ್ಯಕ್ಷ ಎಂ.ವಿ.ಶ್ರೀಧರ್, ಸಂಘಟನಾ ಕಾರ್ಯದರ್ಶಿಗಳಾದ ವೆಂಕಟಾಚಲಪತಿ, ಮಂಜುನಾಥ್, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಮಂಜುನಾಥ್‌ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT