ಮಂಗಳವಾರ, ಜೂನ್ 22, 2021
24 °C

ವಿಶೇಷ ಪ್ಯಾಕೇಜ್‌ಗೆ ಒತ್ತಾಯ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಲಾಕ್‌ಡೌನ್‌ ಸಂಕಷ್ಟದ ಹಿನ್ನೆಲೆಯಲ್ಲಿ ಕಾರ್ಮಿಕರು ಹಾಗೂ ರೈತರ ಬದುಕಿನ ರಕ್ಷಣೆಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಕಾರ್ಮಿಕರು ಸಿಐಟಿಯು ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಇಲ್ಲಿ ಶುಕ್ರವಾರ ತಮ್ಮ ಮನೆಗಳ ಬಳಿ ಪ್ರತಿಭಟನೆ ಮಾಡಿದರು.

‘ಕೋವಿಡ್‌ 2ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಘೋಷಿಸಿದ. ಇದರಿಂದ ಅಸಂಘಟಿತ ವಲಯದ ಕಾರ್ಮಿಕರು, ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು, ವಲಸೆ ಕಾರ್ಮಿಕರು ಹಾಗೂ ರೈತರ ಜೀವನ ನಿರ್ವಹಣೆಗೆ ಸಮಸ್ಯೆಯಾಗಿದೆ’ ಎಂದು ಪ್ರತಿಭಟನಾಕಾರರು ಹೇಳಿದರು.

‘ಸರ್ಕಾರ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ₹ 1,200 ಕೋಟಿ ಪ್ಯಾಕೇಜ್ ಘೋಷಿಸಿರುವುದು ಅವೈಜ್ಞಾನಿಕವಾಗಿದೆ. ಪ್ಯಾಕೇಜ್‌ನ ಮೊತ್ತ ಕಡಿಮೆ ಇರುವುದರಿಂದ ಜನರ ಸಮಸ್ಯೆ ಬಗೆಹರಿಯುವುದಿಲ್ಲ. ರೈತರು ಮತ್ತು ಕಾರ್ಮಿಕರು ಈ ದೇಶದ ಆಸ್ತಿಯಾಗಿದ್ದು, ಅವರನ್ನು ಕಡೆಗಣಿಸಿದರೆ ಭವಿಷ್ಯದಲ್ಲಿ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ರೈತರು ಮತ್ತು ಕಾರ್ಮಿಕರ ಹಿತ ಕಾಯುವುದು ಸರ್ಕಾರದ ಜವಾಬ್ದಾರಿ’ ಎಂದು ಒತ್ತಾಯಿಸಿದರು.

‘ರಾಜ್ಯ ಸರ್ಕಾರ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು. ಸಾರ್ವತ್ರಿಕವಾಗಿ ಲಸಿಕೆ ನೀಡಬೇಕು. ಕೊರೊನಾ ಸೋಂಕಿತರಿಗೆ ಔಷಧ ಮಾತ್ರೆ, ವೈದ್ಯಕೀಯ ಆಮ್ಲಜನಕ ಸೇರಿದಂತೆ ಅಗತ್ಯ ಸೇವೆಯನ್ನು ಸಮಾರೋಪಾದಿಯಲ್ಲಿ ನೀಡಬೇಕು. ಅಸಂಘಟಿತ ಕಾರ್ಮಿಕರು ಹಾಗೂ ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡುವ ಕುಟುಂಬಗಳಿಗೆ 3 ತಿಂಗಳವರೆಗೆ ಮಾಸಿಕ ₹ 10 ಸಾವಿರ ಆರ್ಥಿಕ ನೆರವು ನೀಡಬೇಕು’ ಎಂದು ಒತ್ತಾಯಿಸಿದರು.

ಕೂಲಿ ಹೆಚ್ಚಿಸಿ: ‘ರೈತ ವಿರೋಧಿ ಕಾಯ್ದೆಗಳನ್ನು ಕೈಬಿಟ್ಟು ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ, ವೈಜ್ಞಾನಿಕ ಬೆಂಬಲ ಸಿಗುವಂತೆ ಮಾಡಬೇಕು. ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ 200 ಕೆಲಸದ ದಿನಗಳಿಗೆ ಕೂಲಿಯನ್ನು ₹ 700ಕ್ಕೆ ಹೆಚ್ಚಿಸಬೇಕು ಮತ್ತು ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಅಂಗನವಾಡಿ, ಆಶಾ ಮತ್ತು ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರಿಗೆ ಸುರಕ್ಷಾ ವಿಮೆ ನೀಡಬೇಕು’ ಎಂದು ಕೋರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು