ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರಿಗೆ ವಿಮೆ ಮಾಡಿಸಿ

ಅಧಿಕಾರಿಗಳಿಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಸೂಚನೆ
Last Updated 18 ಮೇ 2022, 15:38 IST
ಅಕ್ಷರ ಗಾತ್ರ

ಕೋಲಾರ: ‘ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಸ್ವಚ್ಛತಾ ಕೆಲಸಗಾರರಿಗೆ ವಿಮೆ ಮಾಡಿಸಬೇಕು. ವಿಮೆ ಮಾಡಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಖಡಕ್‌ ಎಚ್ಚರಿಕೆ ನೀಡಿದರು.

ಇಲ್ಲಿ ಬುಧವಾರ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ (ಎಂ.ಎಸ್) ಕಾಯ್ದೆ-2013ರ ತರಬೇತಿ ಹಾಗೂ ಸ್ವಚ್ಛತಾ ಕಾರ್ಮಿಕರ ಸಮಸ್ಯೆಗಳ ಕುರಿತ ಸಭೆಯಲ್ಲಿ ಮಾತನಾಡಿ, ‘ಪೌರ ಕಾರ್ಮಿಕರು ಹಾಗೂ ಸ್ವಚ್ಛತಾ ಕೆಲಸಗಾರರಿಗೆ ವಿಮೆ ಮಾಡಿಸದಿರುವುದು ಗಮನಕ್ಕೆ ಬಂದಿದೆ. ಅಧಿಕಾರಿಗಳ ಈ ಧೋರಣೆ ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಪೌರ ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ, ಆಯೋಗದ ಉದ್ದೇಶವಾಗಿದೆ. ಪೌರ ಕಾರ್ಮಿಕರು ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ವಿಮೆ ಮಾಡಿಸಿದ್ದಲ್ಲಿ ₹ 4 ಲಕ್ಷ ಪರಿಹಾರವನ್ನು ಆಯೋಗದಿಂದ ನೀಡಲಾಗುವುದು’ ಎಂದು ವಿವರಿಸಿದರು.

‘ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿಯನ್ನು 2013ರಲ್ಲೇ ನಿಷೇಧ ಮಾಡಲಾಗಿದೆ. ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟರೆ ಅವರ ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಸಹಾಯಧನ ನೀಡಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪೌರ ಕಾರ್ಮಿಕರ ಅಭಿವೃದ್ಧಿಗೆ ಕಾರ್ಯ ನಿರ್ವಹಿಸಬೇಕು. ಪೌರ ಕಾರ್ಮಿಕರಿಗೆ ಕಡ್ಡಾಯವಾಗಿ ಸುರಕ್ಷತಾ ಸಲಕರಣೆಗಳನ್ನು ನೀಡಬೇಕು’ ಎಂದು ಸೂಚಿಸಿದರು.

ಸಮಸ್ಯೆಗೆ ಸ್ಪಂದಿಸಿ: ‘ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾ.ಪಂಗಳಲ್ಲಿ ಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರ ಪ್ರತಿ ಸಮಸ್ಯೆಗೂ ಅಧಿಕಾರಿಗಳು ಸ್ಪಂದಿಸಬೇಕು. ಪೌರ ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು’ ಎಂದು ಹೇಳಿದರು.

‘ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕನಿಷ್ಠ ವೇತನ ನೀಡದಿರುವುದು ಗಮನಕ್ಕೆ ಬಂದಿದೆ. ಕಾರ್ಮಿಕ ಕಾಯ್ದೆ ಪ್ರಕಾರ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಎಲ್ಲರಿಗೂ ಕನಿಷ್ಠ ವೇತನ ನೀಡಬೇಕು. ಕನಿಷ್ಠ ವೇತನ ನೀಡದೆ ಕಾರ್ಮಿಕ ಕಾನೂನು ಉಲ್ಲಂಘಿಸುತ್ತಿರುವ ಕಾರ್ಖಾನೆಗಳ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಲಾಗಿದೆ. ಪೌರ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡದೆ ವಂಚಿಸುವ ಗುತ್ತಿಗೆದಾರರ ವಿರುದ್ಧವೂ ಕ್ರಮ ಜರುಗಿಸುತ್ತೇವೆ’ ಎಂದು ತಿಳಿಸಿದರು.

ಬಾಕಿ ವೇತನ ಪಾವತಿ: ‘ಪೌರ ಕಾರ್ಮಿಕರಿಗೆ ಬಾಕಿ ವೇತನವನ್ನು ಶೀಘ್ರವೇ ಪಾವತಿಸಬೇಕು. ವೇತನ ಪಾವತಿಯ ಪೂರ್ಣ ಮಾಹಿತಿಯನ್ನು ಒದಗಿಸಬೇಕು. ನಿಗದಿತ ಪ್ರದೇಶಗಳಲ್ಲಿ ಪೌರ ಕಾರ್ಮಿಕರು ಕಾರ್ಯ ನಿರ್ವಹಿಸಬೇಕು. ಅವರಿಗೆ ಕಡ್ಡಾಯವಾಗಿ ವಸತಿ ಸೌಲಭ್ಯ ಕಲ್ಪಿಸಸಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಆದೇಶಿಸಿದರು.

‘ಪೌರ ಕಾರ್ಮಿಕರು ಆಯಾ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಆರೋಗ್ಯ ತಪಾಸಣೆಯ ಪೂರ್ಣ ಮಾಹಿತಿಯನ್ನು ವೈದ್ಯಾಧಿಕಾರಿಗಳು ನೀಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೌಕರ್ಯಗಳಿವೆ ಹಾಗೂ ತಜ್ಞ ವೈದ್ಯರಿದ್ದಾರೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್‌ಕುಮಾರ್, ಉಪ ಕಾರ್ಯದರ್ಶಿ ಸಂಜೀವಪ್ಪ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸಂಶೋಧನಾಧಿಕಾರಿ ವೆಂಕಟೇಶ್‍ಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ, ವಿವಿಧ ನಗರಸಭೆ ಮತ್ತು ಪುರಸಭೆಗಳ ಆಯುಕ್ತರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT