ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯದಿಂದ ಬೌದ್ಧಿಕ– ಮಾನಸಿಕ ವಿಕಸನ

Last Updated 18 ನವೆಂಬರ್ 2020, 15:44 IST
ಅಕ್ಷರ ಗಾತ್ರ

ಕೋಲಾರ: ‘ಕೋವಿಡ್‌ ಕಾರಣಕ್ಕೆ ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಗ್ರಂಥಾಲಯಗಳು ಮಕ್ಕಳಿಗೆ ಬೌದ್ಧಿಕ ಹಾಗೂ ಮಾನಸಿಕ ವಿಕಸನಕ್ಕೆ ದಾರಿಯಾಗುತ್ತಿವೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗಾನಂದ ಕೆಂಪರಾಜ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಓದುವ ಬೆಳಕು ಹಾಗೂ ಗ್ರಂಥಾಲಯ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

‘ಕೋವಿಡ್‌ ಆತಂಕದಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಮನುಷ್ಯನ ದೈನಂದಿನ ಚಟುವಟಿಕೆ ಸ್ತಬ್ಧವಾಗಿವೆ. ಕೊರೊನಾ ಸೋಂಕು ಎಲ್ಲಾ ಕ್ಷೇತ್ರಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಓದುವ ಹವ್ಯಾಸ ಬೆಳೆಸಿಕೊಂಡು ಓದುವ ಮತ್ತು ಓದಿಸುವ ಕೆಲಸವಾಗಬೇಕು’ ಎಂದು ಆಶಿಸಿದರು.

‘ಗ್ರಂಥಾಲಯಗಳು ಸರಸ್ವತಿಯ ದೇಗುಲಗಳು. ತಂದೆ ತಾಯಿಯನ್ನು ಗೌರವಿಸುವಂತೆ ಪುಸ್ತಕಗಳನ್ನು ಗೌರವಿಸಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಪ್ರೇಮಿಯಾದವರು ಮಾನವೀಯ ಮೌಲ್ಯ ಬೆಳೆಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ರೂಪಗೊಳ್ಳುತ್ತಾರೆ. ಪೋಷಕರು ಮಕ್ಕಳಲ್ಲಿ ಓದುವ ಆಸಕ್ತಿ ಬೆಳೆಸಬೇಕು ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು’ ಎಂದು ಕಿವಿಮಾತು ಹೇಳಿದರು.

‘ಮಕ್ಕಳ ಬೌದ್ಧಿಕ ವಿಕಸನಕ್ಕೆ ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯದ ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಂಥಾಲಯ ಆರಂಭಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು. ಮಕ್ಕಳು ಓದಿನತ್ತ ಹೆಚ್ಚು ಗಮನ ಹರಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು’ ಎಂದು ಕೊಂಡರಾಜನಹಳ್ಳಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಬೈರಾರೆಡ್ಡಿ ಸಲಹೆ ನೀಡಿದರು.

ಸಂಸ್ಕಾರ ಕಲಿಸುತ್ತದೆ: ‘ಓದು ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸುತ್ತದೆ. ವ್ಯಕ್ತಿಯನ್ನು ಶಕ್ತಿಯಾಗಿ ರೂಪಿಸುತ್ತದೆ ಪುಸ್ತಕಗಳ ಜತೆಗೆ ಅಂತರ್ಜಾಲದಲ್ಲೂ ಬೇಕಾದ ಮಾಹಿತಿ ಲಭ್ಯವಿದ್ದು, ಹೆಚ್ಚಿನ ಜ್ಞಾನ ಪಡೆದು ಎತ್ತರಕ್ಕೆ ಬೆಳೆಯಬೇಕು. ಪುಸ್ತಕಗಳು 10 ಸ್ನೇಹಿತರಿಗೆ ಸಮಾನ’ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕ ದಿವಾಕರ್ ಹೇಳಿದರು.

ಪುಸ್ತಕ ಓದುವ ಹವ್ಯಾಸಿಗರನ್ನು ಸನ್ಮಾನಿಸಲಾಯಿತು. ಜಿಲ್ಲಾ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕೊಂಡರಾಜನಹಳ್ಳಿ ಗ್ರಾ.ಪಂ ಗ್ರಂಥಾಲಯದ ಮೇಲ್ಚಿಚಾರಕಿ ಮಂಜುಳಾ, ಸ್ವರ್ಣಭೂಮಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಶಿವಕುಮಾರ್, ಸಂಪನ್ಮೂಲ ವ್ಯಕ್ತಿ ಸುಬ್ರಮಣಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT