ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ

ಕಾರ್ಯಕರ್ತರ ಸಬೆಯಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಗಂಭೀರ ಚರ್ಚೆ
Last Updated 1 ಮಾರ್ಚ್ 2019, 12:47 IST
ಅಕ್ಷರ ಗಾತ್ರ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಫೆ.5ರಂದು ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಲಾಯಿತು.

ಎಂವಿಕೆ ಗೋಲ್ಡನ್ ಡೇರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾರ್ಚ್‌ 5ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಶುಕ್ರವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಗಂಭೀರ ಚರ್ಚೆ ನಡೆಯಿತು.

ಜೆಡಿಎಸ್‌ ಜಿಲ್ಲಾ ಘಟಕ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿ, ‘ಮುಖ್ಯಮಂತ್ರಿಯವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಸಭೆ ಆಯೋಜಿಸುವಂತೆ ಸೂಚಿಸಿದ್ದು, ಪಕ್ಷದ ಮುಖಂಡರು ಪ್ರತಿ ಕ್ಷೇತ್ರದಿಂದ ಹೆಚ್ಚಿನ ಕಾರ್ಯಕರ್ತರನ್ನು ಕರೆತರಬೇಕು’ ಎಂದು ತಿಳಿಸಿದರು.

‘ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಲು ಆಯಾ ಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರೇ ಬಸ್‌ ವ್ಯವಸ್ಥೆ ಮಾಡಬೇಕು. ಪ್ರತಿ ಕ್ಷೇತ್ರದಿಂದ ಕನಿಷ್ಠ 5 ಸಾವಿರ ಕಾರ್ಯಕರ್ತರನ್ನು ಕರೆತರಬೇಕು. ಕೋಲಾರ ಕ್ಷೇತ್ರದಿಂದ ಇತರ ಕ್ಷೇತ್ರಗಳಿಗಿಂತ ಹೆಚ್ಚು ಕಾರ್ಯಕರ್ತರನ್ನು ಸೇರಿಸಲು ಶಾಸಕ ಕೆ.ಶ್ರೀನಿವಾಸಗೌಡರು ಪ್ರಯತ್ನ ಮಾಡಬೇಕು’ ಎಂದು ಸಲಹೆ ನೀಡಿದರು.

‘ಕಾರ್ಯಕ್ರಮದಲ್ಲಿ ಪಕ್ಷದ ಶಕ್ತಿ ಪ್ರದರ್ಶನವಾಗಬೇಕು. ಇದರಿಂದ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗೆ ಟಿಕೆಟ್‌ ಕೇಳಲು ಅನುಕೂಲವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಜಾಗ ಗುರುತಿಸಿಲ್ಲ: ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರುವ ಅವಶ್ಯಕತೆಯಿಂದ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

‘ಕಾರ್ಯಕ್ರಮಕ್ಕೆ ಇನ್ನು ಜಾಗ ಗುರುತಿಸಿಲ್ಲ. ಪಕ್ಷದ ಸ್ಥಳೀಯ ನಾಯಕರೆಲ್ಲಾ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇವೆ’ ಎಂದು ವಿವರಿಸಿದರು.

ಅಪಾರ ನಂಬಿಕೆಯಿದೆ: ‘ಕುಮಾರಸ್ವಾಮಿ ಅವರಿಗೆ ಜಿಲ್ಲೆಯ ಮೇಲೆ ಅಪಾರ ನಂಬಿಕೆಯಿದೆ. ಇಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಅವರು ಅಗತ್ಯ ಅನುದಾನ ಕಲ್ಪಿಸುತ್ತಾರೆ. ಆದರೆ, ಅವರ ನಂಬಿಕೆ ಉಳಿಸಿಕೊಳ್ಳಬೇಕು’ ಎಂದು ಮಾಲೂರಿನ ಮಾಜಿ ಶಾಸಕ ಕೆ.ಎಸ್.ಮಂಜುನಾಥಗೌಡ ಸಲಹೆ ನೀಡಿದರು.

‘ಮೊದಲು ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ಘೋಷಿಸಬೇಕು. ರಾಜ್ಯದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜೆಡಿಎಸ್ ಬಗ್ಗೆ ಜನಕ್ಕೆ ಅಪಾರ ನಂಬಿಕೆಯಿದೆ. ಕೋಲಾರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಗೆಲುವು ನಿಶ್ಚಿತವೆಂಬ ನಂಬಿಕೆಯನ್ನು ಕುಮಾರಸ್ವಾಮಿ ಅವರಿಗೆ ಮೂಡಿಸಬೇಕು’ ಎಂದು ಕೋರಿದರು.

ಮಾಜಿ ಶಾಸಕ ಎಂ.ನಾರಾಯಣಸ್ವಾಮಿ, ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳಾದ ಸಮೃದ್ಧಿ ಮಂಜುನಾಥ್, ಮಲ್ಲೇಶ್‌ಬಾಬು, ರವಿ, ಜಿಲ್ಲಾ ಪಂಚಾಯಿತಿ ಸದಸ್ಯ ನಂಜುಂಡಪ್ಪ, ಮಾಜಿ ಅಧ್ಯಕ್ಷೆ ಮಂಗಮ್ಮ ಮುನಿಸ್ವಾಮಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಾಬು ಮೌನಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT