ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಕೈಜೋಡಿಸಿ

ಮೋದಿ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಮನವಿ
Last Updated 17 ಸೆಪ್ಟೆಂಬರ್ 2019, 16:25 IST
ಅಕ್ಷರ ಗಾತ್ರ

ಕೋಲಾರ: ‘ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿರುವಂತೆ ಪಕ್ಷದ ಕಾರ್ಯಕರ್ತರು ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಸಂಸದ ಎಸ್‌.ಮುನಿಸ್ವಾಮಿ ಮನವಿ ಮಾಡಿದರು.

ಮೋದಿಯವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಇಲ್ಲಿನ ಕೀಲುಕೋಟೆ ಆಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸೇವಾ ಸಪ್ತಾಹ ಮತ್ತು ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಮಾತನಾಡಿ, ‘ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಬೇಕು’ ಎಂದು ಹೇಳಿದರು.

‘ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಯಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಪರಿಸರ ಸಚಿವಾಲಯವು 2016ರ ಮಾ.11ರಿಂದ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿರ್ಬಂಧಿಸಿದೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‍ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕಬೇಕು. ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಸಾಧ್ಯವಾದಷ್ಟು ಸಮಾಜದಿಂದ ದೂರ ಮಾಡಬೇಕು’ ಎಂದು ಸಲಹೆ ನೀಡಿದರು.

‘ಉತ್ತಮ ಪರಿಸರಕ್ಕಾಗಿ ಮೋದಿಯವರ ಸಂಕಲ್ಪಕ್ಕೆ ಇಡೀ ದೇಶದ ಪರಿಸರ ಪ್ರೇಮಿಗಳು ಕೈಜೋಡಿಸಿದ್ದಾರೆ. ಮೋದಿಯವರ ದೇಶ ಪ್ರೇಮ, ದೂರದೃಷ್ಟಿಯಿಂದ ದೇಶವು ವಿಶ್ವಗುರುವಾಗುವತ್ತ ಸಾಗಿದೆ. ಜಾಗತಿಕವಾಗಿ ದೇಶದ ಘನತೆ ಹೆಚ್ಚಿದೆ, ವಿಶ್ವದ ದೊಡ್ಡಣ್ಣ ಅಮೆರಿಕ ಸಹ ಭಾರತದತ್ತ ತಿರುಗು ನೋಡುತ್ತಿದೆ’ ಎಂದರು.

‘ಮೋದಿ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಜನ ಶ್ರಮದಾನದ ಮೂಲಕ ಸ್ವಚ್ಛತಾ ಅಭಿಯಾನ ಹಾಗೂ ಪರಿಸರ ಸಂರಕ್ಷಣೆ ಕಾರ್ಯ ಮಾಡುತ್ತಿದ್ದಾರೆ. ಹಲವೆಡೆ ಸಸಿ ನೆಡುತ್ತಿದ್ದಾರೆ. ಮೋದಿ ಅವರಂತಹ ನಾಯಕರು ದೇಶಕ್ಕೆ ಅಗತ್ಯವಿದೆ. ಸಮಾಜಕ್ಕೆ ಅನುಕೂಲ ಕಲ್ಪಿಸುವುದು ಮೋದಿಯವರ ಉದ್ದೇಶ. ಅವರ ಆಶಯದಂತೆ ಪಕ್ಷದ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಶ್ರಮದಾನ, ಸಸಿ ನೆಡುವ ಕಾರ್ಯ ನಡೆಯುತ್ತಿದೆ’ ಎಂದು ವಿವರಿಸಿದರು.

ಶ್ರೀ ನರಸಿಂಹರಾಜ (ಎಸ್‌ಎನ್‌ಆರ್‌) ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ, ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಓಂಶಕ್ತಿ ಚಲಪತಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಂ.ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT