ಶನಿವಾರ, ಜನವರಿ 22, 2022
16 °C

ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ– ಪ್ರಸಾದ ವಿನಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ನಗರದ ಹೊರವಲಯದ ಶತಶೃಂಗ ಪರ್ವತ ಶ್ರೇಣಿಯಲ್ಲಿರುವ ‘ದಕ್ಷಿಣ ಕಾಶಿ’ ಎಂದೇ ಹೆಸರಾಗಿರುವ ಅಂತರಗಂಗೆ ಬೆಟ್ಟದ ಕಾಶಿ ವಿಶ್ವೇಶ್ವರಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಜಾತ್ರೆ ನಡೆಯಿತು.

ದೇವಾಲಯವನ್ನು ವಿದ್ಯುತ್‌ ದೀಪ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದೇವಾಲಯಕ್ಕೆ ಸಾಗುವ ಮಾರ್ಗದ ಉದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಸ್ವಾಗತ ಕಮಾನು ಹಾಕಲಾಗಿತ್ತು. ಜಿಟಿಜಿಟಿ ಮಳೆ ಹಾಗೂ ಮೈ ಕೊರೆಯುವ ಚಳಿ ನಡುವೆಯೂ ಜಿಲ್ಲೆಯ ಬೇರೆ ತಾಲ್ಲೂಕುಗಳಿಂದ ಭಕ್ತರ ದೊಡ್ಡ ದಂಡೇ ಹರಿದು ಬಂದಿತು. ಅಕ್ಕಪಕ್ಕದ ಜಿಲ್ಲೆಗಳ ನೂರಾರು ಭಕ್ತರು ತಂಡೋಪತಂಡವಾಗಿ ಜಾತ್ರೆಗೆ ಬಂದರು.

ಜಾತ್ರೆ ಹಿನ್ನೆಲೆಯಲ್ಲಿ ಬೆಟ್ಟದ ಕೆಳಗಿನಿಂದ ಮೇಲಿನವರೆಗೂ ಜನವೋ ಜನ. ದೇವರ ದರ್ಶನ ಪಡೆಯಲು ಭಕ್ತಾದಿಗಳು ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬೆಟ್ಟದಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಜಿಲ್ಲಾ ಚಿನ್ನ ಬೆಳ್ಳಿ ವರ್ತಕರ ಸಂಘ ಹಾಗೂ ಬಜರಂಗ ದಳದ ವತಿಯಿಂದ ಭಕ್ತರ ಅನುಕೂಲಕ್ಕಾಗಿ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ವೃತ್ತದಿಂದ ಬೆಟ್ಟದವರೆಗೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಲಾಗಿತ್ತು. ನಿಲ್ದಾಣದ ಸಮೀಪ ಶಿವ, ಹನುಮ, ಶ್ರೀರಾಮನ ಕಟೌಟ್‌ ಹಾಗೂ ಬೃಹತ್ ಸ್ವಾಗತ ಕಮಾನುಗಳು ರಾರಾಜಿಸುತ್ತಿದ್ದವು.
ರಸ್ತೆಯ ಇಕ್ಕೆಲಗಳಲ್ಲಿ ಭಗವಧ್ವಜ ಕಟ್ಟಲಾಗಿತ್ತು. ಇಡೀ ಪ್ರದೇಶ ಕೇಸರಿಮಯವಾಗಿತ್ತು. ಭಕ್ತರ ಅನುಕೂಲಕ್ಕಾಗಿ ಸ್ವಯಂ ಸೇವಕರನ್ನು ನಿಯೋಜಿಸಲಾಗಿತ್ತು. ಬಜರಂಗದಳ ಕಾರ್ಯಕರ್ತರು ಜಾತ್ರೆಯ ಯಶಸ್ಸಿಗೆ ಒಂದು ವಾರದಿಂದ ಸಿದ್ಧತೆ ನಡೆಸಿದ್ದರು.

ಅನ್ನದಾನ: ಕಾಶಿ ವಿಶ್ವೇಶ್ವರ ದೇವಾಲಯದ ಬಳಿಯ ಕಲ್ಲಿನ ಬಸವ ಮೂರ್ತಿಯ ಬಾಯಿಯಿಂದ ಬರುವ ಸಿಹಿ ನೀರು ಕುಡಿಯಲು ಭಕ್ತರು ಮುಗಿಬಿದ್ದರು. ಮತ್ತೆ ಕೆಲ ಭಕ್ತರು ಬಾಟಲಿಗಳಿಗೆ ನೀರು ತುಂಬಿಸಿಕೊಂಡರು. ಇನ್ನು ಕೆಲವರು ಪವಿತ್ರ ಜಲ ಪ್ರೋಕ್ಷಣೆ ಮಾಡಿಕೊಂಡು ಪುನೀತರಾದರು. ಭಕ್ತರಿಗಾಗಿ ಬೆಟ್ಟದ ಮೇಲೆ ಹಾಗೂ ಕೆಳ ಭಾಗದಲ್ಲಿ ಪ್ರಸಾದ ವಿನಿಯೋಗ ಮಾಡಲಾಯಿತು. ಕೋಟೆ ಬಡಾವಣೆಯ ಸೋಮೇಶ್ವರ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ವಿಶೇಷ ಪೂಜೆ ನಡೆಯಿತು.

ಬಜರಂಗದಳ, ವಿಶ್ವ ಹಿಂದೂ ಪರಿಷತ್‌ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಪ್ರತಿ ವರ್ಷದಂತೆ ಈ ಬಾರಿಯೂ ಅನ್ನದಾನ ನಡೆಸಿದರು. ಕೋವಿಡ್‌ ಹಿನ್ನೆಲೆಯಲ್ಲಿ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ನೀಡಲಾಯಿತು. ‘ನಮ್ಮ ಗೆಳೆಯರ ಬಳಗ’ದ ಸದಸ್ಯರು ಭಕ್ತರಿಗೆ ಸಸಿ ವಿತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.