ಮಂಗಳವಾರ, ಮಾರ್ಚ್ 9, 2021
29 °C
ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಡಿ.ಸಿ ಸತ್ಯಭಾಮ ಸಲಹೆ

ಕನ್ನಡ ಭಾಷೆ ಅಭಿವೃದ್ಧಿ ಆಗಲಿ: ಡಿ.ಸಿ ಸತ್ಯಭಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಗಡಿ ಜಿಲ್ಲೆಯಾದ ಕೋಲಾರವು ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಗೆ ಹೊಂದಿಕೊಂಡಿದೆ. ತೆಲುಗು ಭಾಷೆಯ ಪ್ರಭಾವ ಹೆಚ್ಚಾಗಿರುವ ಜಿಲ್ಲೆಯಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಆಗಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆಶಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಕನ್ನಡ ಕಾರ್ಯಕ್ರಮಗಳು ನಡೆದರೆ ಸಾಲದು. ಕನ್ನಡ ಭಾಷೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕಾರ್ಯ ಚಟುವಟಿಕೆ ರೂಪಿಸಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯ ಶ್ರೀನಿವಾಸಪುರ ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಹೆಚ್ಚಾಗಿ ತೆಲುಗು ಭಾಷೆ ಮಾತನಾಡುವ ಜನರಿದ್ದಾರೆ. ಕೆಜಿಎಫ್ ತಾಲ್ಲೂಕಿನಲ್ಲಿ ತಮಿಳು ಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜಿಲ್ಲೆಯ ಜನರು ತೆಲುಗು, ತಮಿಳು ಭಾಷೆಯ ಜತೆಗೆ ಕನ್ನಡ ಭಾಷೆಯನ್ನೂ ಬಳಸುತ್ತಾರೆ. ಜಿಲ್ಲೆ ತ್ರಿಭಾಷಾ ಸಂಗಮವಾಗಿದೆ. ಗಡಿ ಭಾಗದಲ್ಲಿ ಕನ್ನಡದ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕು’ ಎಂದು ಸಲಹೆ ನೀಡಿದರು.

‘ಪಾಶ್ಚಿಮಾತ್ಯ ಸಂಸ್ಕೃತಿ, ಆಧುನಿಕತೆ ಮತ್ತು ಇಂಗ್ಲೀಷ್ ವ್ಯಾಮೋಹದಿಂದ ಕನ್ನಡಕ್ಕೆ ಭಾಷೆಗೆ ಧಕ್ಕೆ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಕನ್ನಡಿಗರಲ್ಲಿ ಮಾತೃ ಭಾಷೆ ಪ್ರೇಮ ಬೆಳೆಸಬೇಕು. ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ ಉತ್ತಮವಾಗಿ ಕೆಲಸ ಮಾಡುತ್ತಿದೆ. ಇನ್ನಷ್ಟು ಕಾರ್ಯಕ್ರಮ ರೂಪಿಸಿ ನಾಡು ನುಡಿ ಭಾಷೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.

‘ಜ.28ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉತ್ತಮ ವಿಚಾರಗೋಷ್ಠಿಗಳನ್ನು ಆಯೋಜಿಸಬೇಕು. ಒಟ್ಟಾರೆ ಸಮ್ಮೇಳನ ಅರ್ಥಪೂರ್ಣವಾಗಿ ನಡೆಯಬೇಕು. ಜಿಲ್ಲೆಯ ಜನರಲ್ಲಿ ಕನ್ನಡ ಭಾಷೆ ಬಗ್ಗೆ ಜಾಗೃತಿ ಮೂಡಿಸುವ ವಿಚಾರಗೋಷ್ಠಿಗಳನ್ನು ಆಯೋಜಿಸಬೇಕು’ ಎಂದು ತಿಳಿಸಿದರು.

ಸಕಲ ಸಿದ್ಧತೆ: ‘ಜಿಲ್ಲೆಯಲ್ಲಿ ಮೊದಲಿನಿಂದಲೂ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ಕನ್ನಡಪರ ಕಾರ್ಯಕ್ರಮಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಲಾಗುತ್ತಿದೆ. ಗಡಿ ಜಿಲ್ಲೆಯಲ್ಲಿ ಕನ್ನಡದ ಅಭಿವೃದ್ಧಿಗೆ ನಾಟಕಗಳು, ಗಡಿ ಉತ್ಸವಗಳನ್ನು ನಡೆಸಲಾಯಿತು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಾನಂದ ಕೆಂಪರಾಜ್ ಮಾಹಿತಿ ನೀಡಿದರು.

‘ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲೂ ನಾಡು ನುಡಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಕೋವಿಡ್‌ ಕಾರಣಕ್ಕೆ ಹಿಂದಿನ ವರ್ಷದಲ್ಲಿ ಹೆಚ್ಚು ಕಾರ್ಯಕ್ರಮ ನಡೆಸಲು ಸಾಧ್ಯವಾಗಲಿಲ್ಲ’ ಎಂದು ವಿವರಿಸಿದರು.

‘ಜಿಲ್ಲಾ ಕೇಂದ್ರದಲ್ಲಿ 2 ದಿನ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ವಿವಿಧ ತಾಲ್ಲೂಕುಗಳಿಂದ ಬರುವ ಸಾಹಿತ್ಯಾಸಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಹಿತ್ಯಾಸಕ್ತರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ’ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷರ್‌ ಗೌರವ ಕಾರ್ಯದರ್ಶಿ ವೆಂಕಟಸ್ವಾಮಿ, ಕೋಶಾಧ್ಯಕ್ಷ ರತ್ನಪ್ಪ ಮೇಲಾಗಾಣಿ, ನಗರ ಘಟಕದ ಅಧ್ಯಕ್ಷ ಶಿವಕುಮಾರ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು