ಶ್ರೀನಿವಾಸಪುರ: ಗಡಿ ಭಾಗದ ಜನರು ಕನ್ನಡ ಭಾಷಾಭಿಮಾನ ಬೆಳೆಸಿಕೊಂಡು, ನಾಡು ನುಡಿ ಮೊದಲು ಎಂಬ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ಜನ ಜಾಗೃತಿ ವೇದಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗುರುವಾರ ಏರ್ಪಡಿಸಿದ್ದ ರಸಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲಿಷ್ ವ್ಯಾಮೋಹ ಹಾಗೂ ಗಡಿ ಪ್ರದೇಶದ ಅನ್ಯ ಭಾಷಾ ಪ್ರೇಮ ಕನ್ನಡಕ್ಕೆ ಮುಳುವಾಗಬಾರದು ಎಂದರು.
ಗಡಿ ಭಾಗದ ನಾಗರಿಕರು ಕನ್ನಡ ಕಲಾವಿದರನ್ನು ಪ್ರೋತ್ಸಾಹಿಸಬೇಕು. ಕನ್ನಡ ಚಿತ್ರಗಳು ಹಾಗೂ ಧಾರಾವಾಹಿಗಳ ವೀಕ್ಷಣೆ ಮಾಡಬೇಕು. ಕನ್ನಡ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಕೊಂಡು ಓದಬೇಕು. ಕನ್ನಡ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕಿನಲ್ಲಿ ಮೂರು ಸಾವಿರ ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಕ್ಷೇತ್ರ ಸ್ಥಾಪನೆಗೆ ಪ್ರಯತ್ನಿಸಲಾಗುತ್ತಿದೆ. ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಆರ್‌ಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ನಾಡು ನುಡಿ ಮಹತ್ವ ಕುರಿತು ಮಾತನಾಡಿದರು.
ಬೆಳಿಗ್ಗೆ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಧ್ವಜಾರೋಹಣ ಹಾರಿಸಲಾಯಿತು. ರಸ ಸಂಜೆ ಕಾರ್ಯಕ್ರಮದದಲ್ಲಿ ವಾದ್ಯಗೋಷ್ಠಿ ನಡೆಯಿತು. ಜತೆಗೆ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವೇಣುಗೋಪಾಲರೆಡ್ಡಿ, ಮುಖಂಡರಾದ ಶ್ರೀನಾಥ್ ಬಾಬು, ಸಿ.ರವಿ, ಪೂಲ ಶಿವಾರೆಡ್ಡಿ, ಸಿ.ಮುನಿಯಪ್ಪ, ಶಂಕರರೆಡ್ಡಿ, ಸಿ.ಎನ್.ಶ್ರೀನಿನಾಸ್, ಮಧುಸೂದನ್, ಮುರಳಿ, ಬೈರೇಗೌಡ, ಶ್ರೀನಿವಾಸ್, ರಂಗಪ್ಪ, ರಘು ಇದ್ದರು.
ರಸಸಂಜೆ ಕಾರ್ಯಕ್ರಮದಲ್ಲಿ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು