ಗುರುವಾರ , ಮಾರ್ಚ್ 23, 2023
22 °C

ಬಿಜೆಪಿಯಿಂದ ಸಾಮರಸ್ಯ ಹಾಳು: ಜಮೀರ್ ಅಹಮ್ಮದ್ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಿವಾಸಪುರ: ‘ಮತದಾರರು ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮಾನ ಅಂತರ ಕಾಯ್ದುಕೊಳ್ಳಬೇಕು. ಜೆಡಿಎಸ್‌ಗೆ ಮತ ನೀಡಿದರೆ ಬಿಜೆಪಿಗೆ ಮತ ನೀಡಿದಂತಾಗುತ್ತದೆ’ ಎಂದು ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಹೇಳಿದರು.

ತಾಲ್ಲೂಕಿನ ಗೌನಿಪಲ್ಲಿಯಲ್ಲಿ ಬುಧವಾರ ಏರ್ಪಡಿಸಿದ್ದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಹೋಟೆಲ್ ವಾಸ್ತವ್ಯ ಮಾಡಿ ಜನರಿಂದ ದೂರವಾದರು. ಕೊನೆಗೆ ಬಿಜೆಪಿಗೆ ಅಧಿಕಾರ ಬಿಟ್ಟುಕೊಟ್ಟರು ಎಂದು ಟೀಕಿಸಿದರು.

ಬಿಜೆಪಿಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿಯಿಲ್ಲ. ಅದು ಹಿಂದೂ, ಮುಸ್ಲಿಮರಲ್ಲಿ ಒಡಕು ಮೂಡಿಸುತ್ತಿದೆ. ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದೆ. ಮತದಾರರು ಇದನ್ನು ಗಮನಿಸಬೇಕು. ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಹೇಳಿದರು.‌

ಶಾಸಕ ರಮೇಶ್ ಕುಮಾರ್ ಮಾತನಾಡಿ, ಅಂದು ಗಾಂಧೀಜಿಯ ಹತ್ಯೆ ಮಾಡಿದ ಸಂಘಟನೆಗೆ ಸೇರಿದವರು ಇಂದು ದೇಶ ಆಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಂದ ದೇಶಕ್ಕೆ ದರಿದ್ರ ಆವರಿಸಿದೆ. ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಿಂಚಿತ್ತು ಕರುಣೆಯಿಲ್ಲ. ಮೋದಿ ಸೂಟು ಧರಿಸಿ ಸುಳ್ಳು ಹೇಳುತ್ತಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. ಅವರು ಮತ್ತೆ ಮುಖ್ಯಮಂತ್ರಿ ಆಗಬೇಕು ಎಂಬುದು ಜನರ ಇಚ್ಛೆ. ಬಿಜೆಪಿ ತುಂಬಿರುವ ಕತ್ತಲೆ ಕಳೆಯುವ ಶಕ್ತಿ ಕಾಂಗ್ರೆಸ್‌ಗೆ ಮಾತ್ರ ಇದೆ ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಮಿಷನ್ ದಂಧೆಯಲ್ಲಿ ಮುಳುಗಿ ಜನರ ಸಮಸ್ಯೆಗಳಿಗೆ ಗಮನ ನೀಡುತ್ತಿಲ್ಲ. ಇದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಅಭಿಪ್ರಾಯಪಟ್ಟರು.

ಶಾಸಕ ರಮೇಶ್ ಕುಮಾರ್ ತಾಲ್ಲೂಕಿನ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಕ್ಷೇತ್ರಕ್ಕೆ ಸರ್ಕಾರದಿಂದ 25 ಸಾವಿರ ಮನೆ ಮಂಜೂರು ಮಾಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಡಿಸಿಸಿ ಬ್ಯಾಂಕ್ ಪುನಶ್ಚೇತನಗೊಳ್ಳಲು ಅವರು ಕಾರಣ. ಅವರ ಅಭಿವೃದ್ಧಿ ಕಾರ್ಯ ಕಂಡು ಬೇರೆ ಪಕ್ಷದ ಮುಖಂಡರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವಾ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಮುಖಂಡರಾದ ದಿಂಬಾಲ ಅಶೋಕ್, ಎಂ. ಶ್ರೀನಿವಾಸನ್, ಮ್ಯಾಕಲ ನಾರಾಯಣಸ್ವಾಮಿ, ಸಿ.ಎಂ. ಮುನಿಯಪ್ಪ, ಎನ್. ಮುನಿಸ್ವಾಮಿ, ಎನ್.ಜಿ. ಬ್ಯಾಟಪ್ಪ, ಅಕ್ಬರ್ ಷರೀಫ್, ಬಿ.ಜಿ. ಸೈಯದ್ ಖಾದರ್, ಸಂಜಯ್‌ ರೆಡ್ಡಿ, ಗೊಲ್ಲಹಳ್ಳಿ ಶಿವಪ್ರಸಾದ್, ಅಂಬರೀಶ್, ಶಶಿಕುಮಾರ್, ವಿ. ಮುನಿಯಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು