ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ: ಸಚಿವ ನಾಗೇಶ್‌

ಕನ್ನಡ ರಾಜ್ಯೋತ್ಸವ
Last Updated 1 ನವೆಂಬರ್ 2020, 14:52 IST
ಅಕ್ಷರ ಗಾತ್ರ

ಕೋಲಾರ: ‘ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡಿಗರು ಸಹಬಾಳ್ವೆಯಿಂದ ಬದುಕು ಕಟ್ಟಿಕೊಳ್ಳಬೇಕು. ಶಾಂತಿ, ಸಹನೆ, ತಾಳ್ಮೆ, ಸಹೋದರತೆಯ ಜತೆಗೆ ಬದುಕಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್‌ ಕಿವಿಮಾತು ಹೇಳಿದರು.

ಇಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿ, ‘ದೇಶದ ಇತರೆ ಭಾಷೆಗಳಂತೆ ಕನ್ನಡ ಭಾಷೆಯು ಭವ್ಯ ಇತಿಹಾಸ ಮತ್ತು ಶ್ರೀಮಂತ ಸಾಹಿತ್ಯ ಹೊಂದಿದೆ. ಕನ್ನಡ ಸಾಹಿತ್ಯಕ್ಕೆ 8 ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರ’ ಎಂದು ಸಂತಸ ವ್ಯಕ್ತಪಡಿಸಿದರು.

‘ಜನರ ಆಡು ಭಾಷೆ ಯಾವುದೇ ಆಗಿರಲಿ, ಕನ್ನಡ ಕಲಿಕೆ ಕಡ್ಡಾಯವಾಗಬೇಕು. ಕನ್ನಡವೇ ಉಸಿರು, ಕನ್ನಡವೇ ಹಸಿರು. ಕನ್ನಡ ಭಾಷೆ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಸಾಕಷ್ಟು ಮಂದಿ ಉನ್ನತ ಹುದ್ದೆಯಲ್ಲಿದ್ದಾರೆ. ಕನ್ನಡದಲ್ಲಿ ಓದಿದವರಿಗೆ ಹೆಚ್ಚು ಉದ್ಯೋಗಾವಕಾಶ ಸಹ ಸಿಗುತ್ತಿವೆ’ ಎಂದು ಅಭಿಪ್ರಾಯಪಟ್ಟರು.

‘ಗಡಿ ಜಿಲ್ಲೆ ಕೋಲಾರದಲ್ಲಿ ಕನ್ನಡ, ತೆಲುಗು, ತಮಿಳು ಭಾಷೆ ಮಾತನಾಡುವವರಿದ್ದಾರೆ. ಜಿಲ್ಲೆಯು ತ್ರಿಭಾಷಾ ಸಂಗಮವಾಗಿದೆ. ಆದರೆ, ಭಾಷೆ ವಿಚಾರದಲ್ಲಿ ಬೇಧ ಭಾವವಿಲ್ಲ. ಎಲ್ಲಾ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಭಾಷಾ ಸಾಮರಸ್ಯವಿದೆ. ಭಾಷಾವಾರು ಪ್ರಾಂತ್ಯ ರಚನೆ ವೇಳೆ ಕೋಲಾರವನ್ನು ಆಂಧ್ರಪ್ರದೇಶ, ತಮಿಳುನಾಡಿಗೆ ಸೇರಿಸುವ ಪ್ರಸ್ತಾವ ಬಂದಾಗ ಇಲ್ಲಿನ ಜನ ಕರ್ನಾಟಕದಲ್ಲೇ ಉಳಿಯುವ ಇಂಗಿತ ವ್ಯಕ್ತಪಡಿಸಿದ್ದರು. ಜಿಲ್ಲೆಯ ಜನ ಕನ್ನಡವನ್ನು ಅಭಿಮಾನದಿಂದ ಉಳಿಸಿ ಬೆಳೆಸುತ್ತಿದ್ದಾರೆ’ ಎಂದು ಹೇಳಿದರು.

‘ಕೊರೊನಾ ಸೋಂಕು ಇಡೀ ವಿಶ್ವವನ್ನು ಕಾಡುತ್ತಿದ್ದು, ಜಿಲ್ಲೆಗೂ ಅದರ ಬಿಸಿ ತಟ್ಟಿದೆ. ಜಿಲ್ಲೆ ಕೊರೊನಾ ಸೋಂಕನ್ನು ಹತೋಟಿಗೆ ತಂದು ಅರ್ಥ ವ್ಯವಸ್ಥೆ ಸರಿದೂಗಿಸಲು ಜನರು ಕೈಜೋಡಿಸಿದ್ದು ಗಮನಾರ್ಹ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ಕೆರೆಗಳು ತುಂಬುತ್ತಿವೆ. ರೈತರು ಒಳ್ಳೆಯ ಬೆಳೆ ಬೆಳೆದು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಸಲಹೆ ನೀಡಿದರು.

ಭಾಷೆ ಶಾಶ್ವತ: ‘ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸರಳವಾಗಿ ಆಚರಿಸಲಾಗುತ್ತಿದೆ. ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕಾರಣ ಬೇರೆ ಜಿಲ್ಲೆಗಳಿಗಿಂತ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಸಾಧ್ಯವಾದಷ್ಟು ತಗ್ಗಿಸಲು ಸಾಧ್ಯವಾಯಿತು. ರಾಜಕೀಯ ಶಾಶ್ವತವಲ್ಲ. ಆದರೆ, ನಡೆ, ನುಡಿ, ಭಾಷೆ ಶಾಶ್ವತ. ಕನ್ನಡ ರಾಜ್ಯೋತ್ಸವವು ಮನಸ್ಸಿನಲ್ಲಿ ವಿಜೃಂಭಣೆಯಿಂದಿರಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಆಶಿಸಿದರು.

ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್‌.ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್‌ರೆಡ್ಡಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಶೋಭಿತಾ, ನಗರಸಭೆ ಆಯುಕ್ತ ಶ್ರೀಕಾಂತ್, ಕನ್ನಡಪರ ಸಂಘಟನೆಗಳ ಮುಖಂಡರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT