ರೌಡಿಪಟ್ಟಿಯಲ್ಲಿ ಕವಿರಾಜ್ ಹೆಸರು
ಕೋಲಾರ: ‘ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ 10ಕ್ಕೂ ಹೆಚ್ಚು ಅಪರಾಧ ಪ್ರಕರಣ ದಾಖಲಾಗಿವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ರೆಡ್ಡಿ ತಿಳಿಸಿದರು.
ಇಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ‘2007ರಲ್ಲಿ ನಡೆದಿದ್ದ ಅಪರಾಧ ಪ್ರಕರಣವೊಂದರಲ್ಲಿ ಭೂಗತ ಪಾತಕಿ ರವಿ ಪೂಜಾರಿ ಮತ್ತು ಕವಿರಾಜ್ ಆರೋಪಿಗಳಾಗಿದ್ದರು. ವರ್ತೂರು ಪ್ರಕಾಶ್ ಪ್ರಕರಣದಲ್ಲೂ ರವಿ ಪೂಜಾರಿಯ ಕೈವಾಡವಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದರು.
‘ಕವಿರಾಜ್ ಮೂಲತಃ ತಮಿಳುನಾಡಿನ ಹೊಸೂರು ನಿವಾಸಿ. ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳ ರೌಡಿ ಪಟ್ಟಿಯಲ್ಲಿ ಆತನ ಹೆಸರಿದೆ. ತಮಿಳುನಾಡಿನಲ್ಲಿ ಈತನನ್ನು ಬಂಧಿಸಿ ಜಿಲ್ಲೆಗೆ ಕರೆತಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಣಕ್ಕಾಗಿಯೇ ವರ್ತೂರು ಪ್ರಕಾಶ್ ಅವರನ್ನು ಅಪಹರಣ ಮಾಡಿದ್ದಾಗಿ ಆತ ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾನೆ’ ಎಂದು ಮಾಹಿತಿ ನೀಡಿದರು.
‘ನ್ಯಾಯಾಲಯಕ್ಕೆ ಭಾನುವಾರ ರಜೆಯಿದ್ದ ಕಾರಣ ಕವಿರಾಜ್ನನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ. ಆತನನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಿದರೆ ಅಪಹರಣದ ಹಿಂದಿನ ಕಾರಣ, ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ. ಪ್ರಕರಣದ ಇತರೆ ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.