ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಅಕ್ರಮದ ಮೇಲೆ ಹದ್ದಿನ ಕಣ್ಣಿಡಿ

ಸಭೆಯಲ್ಲಿ ನೋಡಲ್‌ ಅಧಿಕಾರಿಗಳಿಗೆ ಚುನಾವಣಾ ವೆಚ್ಚ ವೀಕ್ಷಕರ ಸೂಚನೆ
Last Updated 20 ಮಾರ್ಚ್ 2019, 15:37 IST
ಅಕ್ಷರ ಗಾತ್ರ

ಕೋಲಾರ: ‘ಚುನಾವಣೆ ವೇಳೆ ಅಭ್ಯರ್ಥಿಗಳು ಮತದಾರರ ಓಲೈಕೆಗಾಗಿ ಹಲವು ಆಮಿಷವೊಡ್ಡುತ್ತಾರೆ. ಹಣ. ಮದ್ಯ ಹಾಗೂ ಉಡುಗೊರೆ ಹಂಚಿಕೆಯಂತಹ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಡಿ’ ಎಂದು ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ಮಿಹಿರ್ ಜಿ.ರಾಯ್ಕಾ ಸೂಚಿಸಿದರು.

ಚುನಾವಣಾ ವೆಚ್ಚ ಸಂಬಂಧ ಇಲ್ಲಿ ಬುಧವಾರ ನಡೆದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಎಚ್ಚರದಿಂದಿರಬೇಕು’ ಎಂದು ತಿಳಿಸಿದರು.

‘ಚುನಾವಣೆ ಹೊಸ್ತಿಲಲ್ಲಿ ಪಾವತಿ ಸುದ್ದಿಗಳ ಹಾವಳಿ ಹೆಚ್ಚುತ್ತಿದೆ. ಸಾಮಾಜಿಕ ಜಾಲತಾಣಗಳೂ ಇದರ ವ್ಯಾಪ್ತಿಗೆ ಸೇರಿಕೊಂಡಿವೆ. ಆದ ಕಾರಣ ಜಿಲ್ಲಾ ಮಾಧ್ಯಮ ಮೇಲ್ವಿಚಾರಣಾ ಕೋಶವು ಅಭ್ಯರ್ಥಿಗಳ ಸಾಮಾಜಿಕ ಜಾಲತಾಣ ಖಾತೆಗಳ ಮೇಲೆ ನಿಗಾ ವಹಿಸಬೇಕು’ ಎಂದು ಸಲಹೆ ನೀಡಿದರು.

‘ಅನುಮಾನಾಸ್ಪದ ಬ್ಯಾಂಕ್ ಖಾತೆ ವ್ಯವಹಾರಗಳ ಮೇಲೆ ಎಚ್ಚರ ವಹಿಸಿ. ಸಾಮೂಹಿಕವಾಗಿ ಹಣ ವರ್ಗಾವಣೆಯಾಗುವ ಪಾವತಿ ಆ್ಯಪ್‌ಗಳು, ಉಡುಗೊರೆಯ ಕೂಪನ್‌ಗಳು ಹಾಗೂ ವೋಚರ್‌ಗಳ ಹಂಚಿಕೆ ಮೇಲೆಯೂ ನಿಗಾ ಇಡಬೇಕು’ ಎಂದು ತಿಳಿಸಿದರು.

ಸೂಕ್ಷ್ಮ ಕ್ಷೇತ್ರ: ‘ಕೋಲಾರವು ಸೂಕ್ಷ್ಮ ಲೋಕಸಭಾ ಕ್ಷೇತ್ರವಾಗಿದ್ದರೂ ಎಲ್ಲಾ ಅಧಿಕಾರಿಗಳ ಸಹಕಾರ ಹಾಗೂ ಪರಿಶ್ರಮದಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಸಾಧ್ಯವಿದೆ’ ಎಂದು ಮತ್ತೊಬ್ಬ ಚುನಾವಣಾ ವೆಚ್ಚ ವೀಕ್ಷಕ ವಿಕಾಸ್‌ಕುಮಾರ್ ಜೆಫ್ ಅಭಿಪ್ರಾಯಪಟ್ಟರು.

‘ಅಭ್ಯರ್ಥಿಗಳ ಚುನಾವಣಾ ವೆಚ್ಚಕ್ಕೆ ಮಿತಿಯಿದೆ. ಆದರೆ, ಅಭ್ಯರ್ಥಿಗಳು ನಿಗದಿತ ಮಿತಿಗಿಂತ ಹೆಚ್ಚು ವೆಚ್ಚ ಮಾಡುತ್ತಾರೆಂಬ ಅಭಿಪ್ರಾಯ ಸಾರ್ವಜನಿಕರಲ್ಲಿ ಬಲವಾಗಿದೆ. ಚೆಕ್‌ಪೋಸ್ಟ್ ಹಾಗೂ ಪ್ಲೈಯಿಂಗ್ ಸ್ಕ್ವಾಡ್‌ ತಂಡದವರು ಮೈಯೆಲ್ಲಾ ಕಣ್ಣಾಗಿ ಕಾರ್ಯ ನಿರ್ವಹಿಸಬೇಕು. ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಸಾಮಾನ್ಯವಾಗಿ ಅಭ್ಯರ್ಥಿಗಳು ಚುನಾವಣೆ ಸಂದರ್ಭದಲ್ಲಿ ಹಣ, ಮದ್ಯ ಹಾಗೂ ಉಡುಗೊರೆ ಹಂಚಿಕೆಗೆ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳನ್ನು ಗುರಿಯಾಗಿಸಿಕೊಳ್ಳುತ್ತಾರೆ. ಇಂತಹ ಪ್ರದೇಶಗಳ ಮೇಲೆ ತೀವ್ರ ನಿಗಾ ವಹಿಸಿ. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸುವ ವಾತಾವರಣ ಸೃಷ್ಟಿಸಬೇಕು’ ಎಂದು ಸೂಚಿಸಿದರು.

1,593 ಮತಗಟ್ಟೆ: ‘ಕೋಲಾರ ಲೋಕಸಭಾ ಕ್ಷೇತ್ರವು ಜಿಲ್ಲೆಯ 6 ವಿಧಾನಸಭಾ ಕ್ಷೇತ್ರ ಮತ್ತು ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆಯ 2 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ 1,593 ಮತಗಟ್ಟೆಗಳಿದ್ದು, ಇವುಗಳನ್ನು ಶೇ 100ರಷ್ಟು ಪರೀಕ್ಷಿಸಿ ಮೂಲಸೌಕರ್ಯ ಕಲ್ಪಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಚುನಾವಣಾ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಿದರು.

‘396 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಮತ್ತು 1,197 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಜಿಲ್ಲೆಯು ರೇಷ್ಮೆ, ಹಾಲು ಮತ್ತು ಮಾವು ಉತ್ಪಾದನೆಗೆ ಹೆಸರುವಾಸಿಯಾಗಿದೆ. ಜಿಲ್ಲೆ ವ್ಯಾಪ್ತಿಯಲ್ಲಿ 27 ಹೋಬಳಿ ಹಾಗೂ 156 ಗ್ರಾಮ ಪಂಚಾಯಿತಿಗಳಿವೆ. 2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 15,36,401 ಜನಸಂಖ್ಯೆಯಿದೆ’ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಸೆಪಟ್‌, ಕೆಜಿಎಫ್‌ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT