ಮಂಗಳವಾರ, ಮೇ 18, 2021
22 °C
ಸಿರಿಗನ್ನಡ ವೇದಿಕೆ ಜಿಲ್ಲಾ ಅಧ್ಯಕ್ಷ ರಾಮಚಂದ್ರಪ್ಪ ಕಿವಿಮಾತು

ಕನ್ನಡ ಭಾಷಿಕರು ಆತ್ಮಾವಲೋಕನ ಮಾಡಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಸಂಘಟನೆ ವತಿಯಿಂದ ಜಿಲ್ಲೆಯ ಗಡಿ ಪ್ರದೇಶದಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹಮ್ಮಿಕೊಳ್ಳುವ ಮೂಲಕ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆಯ ಅಭಿವೃದ್ಧಿಗೆ ಶ್ರಮಿಸುತ್ತೇವೆ’ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾ ಅಧ್ಯಕ್ಷ ಎಚ್.ರಾಮಚಂದ್ರಪ್ಪ ಹೇಳಿದರು.

ಇಲ್ಲಿ ಇತ್ತೀಚೆಗೆ ನಡೆದ ಸಿರಿಗನ್ನಡ ವೇದಿಕೆ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಅನ್ಯಭಾಷಿಕರ ಒಲವು ಹೆಚ್ಚಾಗಿದೆ. ಹೀಗಾಗಿ ಕನ್ನಡ ಭಾಷೆ ಬಗ್ಗೆ ಜನ ನಿರಾಸಕ್ತಿ ತೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಕನ್ನಡ ಭಾಷಿಕರು ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದರು.

‘ಸಂಘಟನೆ ವತಿಯಿಂದ ಮುಂದಿನ ದಿನಗಳಲ್ಲಿ ಯುವ ಕವಿಗಳಿಗೆ ವಿಚಾರಗೋಷ್ಠಿ, ಕವಿಗೋಷ್ಠಿ ಹಮ್ಮಿಕೊಳ್ಳಲಾಗುತ್ತದೆ. ಯುವ ಕವಿಗಳ ಸಣ್ಣಪುಟ್ಟ ತಪ್ಪು ತಿದ್ದುವ ಕೆಲಸ ಮಾಡುತ್ತೇವೆ. ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕನ್ನಡ ಭಾಷೆಗೆ ಕಾರ್ಯಕ್ರಮಗಳನ್ನು ನಡೆಸಿ ಕನ್ನಡದ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದರು.

‘ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡಿಗರು ಸಹಬಾಳ್ವೆಯಿಂದ ಬದುಕು ಕಟ್ಟಿಕೊಳ್ಳಬೇಕು. ಶಾಂತಿ, ಸಹನೆ, ತಾಳ್ಮೆ, ಸಹೋದರತೆಯ ಜತೆಗೆ ಬದುಕಬೇಕು. ದೇಶದ ಇತರೆ ಭಾಷೆಗಳಂತೆ ಕನ್ನಡ ಭಾಷೆಯು ಭವ್ಯ ಇತಿಹಾಸ ಮತ್ತು ಶ್ರೀಮಂತ ಸಾಹಿತ್ಯ ಹೊಂದಿದೆ’ ಎಂದು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

‘ಜನರ ಆಡು ಭಾಷೆ ಯಾವುದೇ ಆಗಿರಲಿ, ಕನ್ನಡ ಕಲಿಕೆ ಕಡ್ಡಾಯವಾಗಬೇಕು. ಕನ್ನಡವೇ ಉಸಿರು, ಕನ್ನಡವೇ ಹಸಿರು. ಕನ್ನಡ ಭಾಷೆ ಬಗ್ಗೆ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಸಾಕಷ್ಟು ಮಂದಿ ಉನ್ನತ ಹುದ್ದೆಯಲ್ಲಿದ್ದಾರೆ. ಕನ್ನಡದಲ್ಲಿ ಓದಿದವರಿಗೆ ಹೆಚ್ಚು ಉದ್ಯೋಗಾವಕಾಶ ಸಹ ಸಿಗುತ್ತಿವೆ’ ಎಂದು ವಿವರಿಸಿದರು.

ತ್ರಿಭಾಷಾ ಸಂಗಮ: ‘ಗಡಿ ಜಿಲ್ಲೆ ಕೋಲಾರದಲ್ಲಿ ಕನ್ನಡ, ತೆಲುಗು, ತಮಿಳು ಭಾಷೆ ಮಾತನಾಡುವವರಿದ್ದಾರೆ. ಜಿಲ್ಲೆಯು ತ್ರಿಭಾಷಾ ಸಂಗಮವಾಗಿದೆ. ಆದರೆ, ಭಾಷೆ ವಿಚಾರದಲ್ಲಿ ಬೇಧ ಭಾವವಿಲ್ಲ. ಎಲ್ಲಾ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿರುವುದು ಶ್ಲಾಘನೀಯ’ ಎಂದು ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಸುಬ್ಬರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘಟನೆಯ ಗೌರವಾಧ್ಯಕ್ಷ ಡಾ.ಕೆ.ಎಂ.ಜೆ.ಮೌನಿ, ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಬಿ.ಆರ್‌.ಲಕ್ಷ್ಮಣ್‌ಗೌಡ, ಖಜಾಂಚಿ ಸಿ.ರವೀಂದ್ರಸಿಂಗ್, ಮಹಿಳಾ ಘಟಕದ ಸದಸ್ಯರಾದ ಕೋಮಲಾ, ಸುಮಿತ್ರಾ, ರಾಧಾ ಪಾಲ್ಗೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.