ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಮಪತ್ರ ಸಲ್ಲಿಕೆಗೆ ಇಂದು ಕೊನೆ!

ಕೋಲಾರ ಕ್ಷೇತ್ರ: ಜೆಡಿಎಸ್‌, ಕಾಂಗ್ರೆಸ್‌ ಅಭ್ಯರ್ಥಿಗಳ ಉಮೇದುವಾರಿಕೆ ಸಲ್ಲಿಕೆಗೆ ವೇದಿಕೆ ಸಜ್ಜು
Published 3 ಏಪ್ರಿಲ್ 2024, 22:30 IST
Last Updated 3 ಏಪ್ರಿಲ್ 2024, 22:30 IST
ಅಕ್ಷರ ಗಾತ್ರ

ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಗುರುವಾರ (ಏ.4) ಕೊನೆಯ ದಿನವಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ.

ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೆ.ವಿ.ಗೌತಮ್‌ ಹಾಗೂ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ಗುರುವಾರ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಮಲ್ಲೇಶ್‌ ಬಾಬು ಅವರು ಮುಖಂಡರ ಜೊತೆಗೂಡಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ನಗರದ ಬಂಗಾರಪೇಟೆ ವೃತ್ತದಲ್ಲಿ ಬೆಳಿಗ್ಗೆ 10.30ಕ್ಕೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಲಾಗುತ್ತದೆ. ಸಂಸದ ಎಸ್‌.ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್‌.ವೇಣುಗೋಪಾಲ್‌, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಸೇರಿದಂತೆ ಜೆಡಿಎಸ್‌ ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಮಲ್ಲೇಶ್‌ ಬಾಬು ಈಗಾಗಲೇ ಒಂದು ಸೆಟ್‌ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್‌ ನಾಮಪತ್ರ ಸಲ್ಲಿಸುವ ವೇಳೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಚಿವರಾದ ಬೈರತಿ ಸುರೇಶ್‌, ಡಾ.ಎಂ.ಸಿ.ಸುಧಾಕರ್‌ ಪಾಲ್ಗೊಳ್ಳಲಿದ್ದಾರೆ.

ಗುರುವಾರ ಬೆಳಿಗ್ಗೆ ಕೋಲಾರಮ್ಮ ದೇಗುಲಕ್ಕೆ ಪೂಜೆ ಸಲ್ಲಿಸಿ, ಮೆಥೋಡಿಸ್ಟ್‌ ಚರ್ಚ್‌, ಕ್ಲಾಕ್‌ ಟವರ್‌ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಆದಾದ ಮೇಲೆ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರೋಡ್‌ ಶೋ ಆರಂಭಿಸಲಿದ್ದಾರೆ. 

ಕ್ಷೇತ್ರದಲ್ಲಿ ಕೆಆರ್‌ಎಸ್ ಪಕ್ಷದಿಂದ ಎ.ವಿ.ಮಹೇಶ್‌, ಸ್ವತಂತ್ರ ಅಭ್ಯರ್ಥಿಯಾಗಿ ರಂಜಿತ್‌ ಕುಮಾರ್‌, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಎ.ದೇವರಾಜು, ಸೋಷಿಯಲಿಸ್ಟ್‌ ಪಾರ್ಟಿಯಿಂದ (ಇಂಡಿಯಾ) ಡಿ.ಗೋಪಾಲಕೃಷ್ಣ ಹಾಗೂ ಬಹುಜನ ಸಮಾಜ ಪಾರ್ಟಿಯಿಂದ ಎಸ್‌.ಬಿ.ಸುರೇಶ್‌ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT