ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಂತ್ರಣ: ಕೋಲಾರ ಜಿಲ್ಲೆ ಪ್ರಥಮ

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಮೆಚ್ಚುಗೆ
Last Updated 21 ಅಕ್ಟೋಬರ್ 2020, 14:03 IST
ಅಕ್ಷರ ಗಾತ್ರ

ಕೋಲಾರ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ 3ರಷ್ಟಿದ್ದು, ರಾಜ್ಯದಲ್ಲೇ ಇದು ಅತಿ ಕಡಿಮೆಯಾಗಿದೆ. ಕೋವಿಡ್‌–19 ನಿಯಂತ್ರಣದಲ್ಲಿ ಜಿಲ್ಲೆಯು ಪ್ರಥಮ ಸ್ಥಾನದಲ್ಲಿದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗೆ ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಕೊರೊನಾ ಸೋಂಕಿನ ತಡೆಗೆ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ರೀತಿ ಕಾರ್ಯ ನಿರ್ವಹಿಸಿ ಕೋವಿಡ್‌ ತಪಾಸಣೆ ಹೆಚ್ಚಿಸಬೇಕು. ಮಧುಮೇಹ, ಎಚ್‌ಐವಿ, ಕ್ಷಯ ರೋಗಿಗಳು, 60 ವರ್ಷ ದಾಟಿದ ವಯೋವೃದ್ಧರು ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಕೋವಿಡ್‌ ಪರೀಕ್ಷೆ ಮಾಡಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯು ಗಡಿ ಭಾಗದಲ್ಲಿದ್ದು, ತಮಿಳುನಾಡು ಮತ್ತು ಆಂಧಪ್ರದೇಶದಿಂದ ಜಿಲ್ಲೆಗೆ ಪ್ರತಿನಿತ್ಯ ಸಾಕಷ್ಟು ಜನ ಬರುತ್ತಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಕ್ರೀನಿಂಗ್ ಮಾಡಬೇಕು. ಹೋಂ ಕ್ವಾರಂಟೈನ್‌ನಲ್ಲಿ ಇರುವವರಿಗೆ ಗ್ರಾ.ಪಂ ಸಿಬ್ಬಂದಿ ಕರೆ ಮಾಡಿ ಆರೋಗ್ಯ ವಿಚಾರಿಸಬೇಕು’ ಎಂದು ತಿಳಿಸಿದರು.

‘ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡಿಸಿ ಹೋಂ ಕ್ವಾರಂಟೈನ್‌ನಲ್ಲಿ ಇಡಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಂಡು ಕೋವಿಡ್‌ ನಿಯಂತ್ರಣಕ್ಕೆ ಕೈಜೋಡಿಸಬೇಕು’ ಎಂದು ಕಿವಿಮಾತು ಹೇಳಿದರು.

ಗ್ರಂಥಾಲಯ ತೆರೆಯಿರಿ: ‘ನರೇಗಾ ಯೋಜನೆಯಡಿ ಅಂಗನವಾಡಿ ಮತ್ತು ಮಹಿಳೆಯರ ಸ್ವ-ಸಹಾಯ ಗುಂಪುಗಳಿಗೆ ಗ್ರಾ.ಪಂಗಳಲ್ಲಿ ಕಟ್ಟಡ ಕಟ್ಟಿಸಬಹುದು. ರಾಜೀವ್‌ಗಾಂಧಿ ಸೇವಾ ಕೇಂದ್ರಗಳಲ್ಲಿ ಗ್ರಂಥಾಲಯ ತೆರೆಯಬೇಕು. ನರೇಗಾ ಅನುದಾನದಲ್ಲಿ ಶಾಲೆಗಳಿಗೆ ಕಾಂಪೌಂಡ್‌ ನಿರ್ಮಿಸಬಹುದು’ ಎಂದು ವಿವರಿಸಿದರು.

‘ಗ್ರಾಮ ಶಿಕ್ಷಣ ಕಾರ್ಯಪಡೆ ರಚಿಸಲಾಗಿದ್ದು, ಮಕ್ಕಳ ಕಲಿಕೆಯೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು ಇದರ ಉದ್ದೇಶವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಬೇಕು. ಇವರಿಗೆ ಮೊದಲು ಬಿಡ್ಜ್ ಕೋರ್ಸ್ ಆರಂಭಿಸಬೇಕು’ ಎಂದು ಮಾಹಿತಿ ನೀಡಿದರು.

ಪೌಷ್ಟಿಕ ಆಹಾರ: ‘ಜಿಲ್ಲಾ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ಉತ್ತಮ ಸೌಲಭ್ಯ ಕಲ್ಪಿಸಲಾಗಿದೆ. ಸೋಂಕಿತರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಸೋಂಕಿತರ ಮನೆಗಳನ್ನು ಕಂಟೈನ್‌ಮೆಂಟ್‌ ವ್ಯಾಪ್ತಿ ಎಂದು ಪರಿಗಣಿಸಲಾಗುತ್ತಿದೆ. ಹೋಂಡಾ ಕಂಪನಿಯು ಕೊರೊನಾ ಸೋಂಕಿತರಿಗೆ ಡಯಾಲಿಸಿಸ್‌ ಚಿಕಿತ್ಸೆ ನೀಡಲು ₹ 18 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣ ಕೊಡಲು ಒಪ್ಪಿದೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.

‘ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಶೇ 100ರಷ್ಟು ಬಿತ್ತನೆಯಾಗಿದೆ. ಬೇಡಿಕೆಗೆ ತಕ್ಕಂತೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ. ಬೆಳೆ ನಷ್ಟಕ್ಕೆ ₹ 98 ಲಕ್ಷ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಬೆಳೆ ಸಮೀಕ್ಷೆ ಶೇ 100ರಷ್ಟು ಪೂರ್ಣಗೊಂಡಿದೆ. ಜಿಲ್ಲೆಯ 148 ಗ್ರಾ.ಪಂಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಜಾಗ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ನರೇಗಾ ಅಡಿ ವಾರ್ಷಿಕ 55.41 ಲಕ್ಷ ಮಾನವ ದಿನಗಳ ಸೃಜನೆಯ ಗುರಿಯಿದ್ದು, 40 ಲಕ್ಷ ಮಾನವ ದಿನಗಳ ಕೆಲಸ ಮಾಡಲಾಗಿದೆ. ಶಾಲೆ, ಹಾಸ್ಟೆಲ್, ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ವೈಯಕ್ತಿಕವಾಗಿ ಪೌಷ್ಟಿಕ ಆಹಾರ ಕೈ ತೋಟ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT