ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯ

ಸರ್ಕಾರಗಳು ಕಾರ್ಮಿಕರ ಹಿತ ಕಾಯುತ್ತಿಲ್ಲ: ಕೆಪಿಆರ್‌ಎಸ್‌– ಸಿಐಟಿಯು ಸದಸ್ಯರ ಆಕ್ರೋಶ
Last Updated 19 ಜನವರಿ 2019, 13:17 IST
ಅಕ್ಷರ ಗಾತ್ರ

ಕೋಲಾರ: ರೈತ ಕಾರ್ಮಿಕರ ಸಖ್ಯತಾ ದಿನಾಚರಣೆ ಅಂಗವಾಗಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಸಿಐಟಿಯು ಸದಸ್ಯರು ಇಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.

‘ದೇಶ ಮತ್ತು ರಾಜ್ಯದಲ್ಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ರಕ್ಷಣೆ ಇಲ್ಲವಾಗಿದೆ. ಈ ಸಂಗತಿ ಸರ್ಕಾರಗಳಿಗೆ ಹಾಗೂ ಅಧಿಕಾರಿಗಳಿಗೆ ಗೊತ್ತಿದ್ದರೂ ಕಾರ್ಮಿಕರ ಹಿತ ಕಾಯುವ ಪ್ರಯತ್ನ ಮಾಡುತ್ತಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯ 6 ತಾಲ್ಲೂಕುಗಳೂ ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆಯಾಗಿದ್ದು, ಸರ್ಕಾರ ಸಮರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಕೊರತೆ ಇರುವುದರಿಂದ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ರೈತರಿಗೆ ಹಸಿರು ಮೇವು ಮತ್ತು ಒಣ ಮೇವು ವಿತರಿಸಬೇಕು’ ಎಂದು ಕೆಪಿಆರ್‌ಎಸ್‌ ರಾಜ್ಯ ಘಟಕದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಹೇಳಿದರು.

‘ಈಗಾಗಲೇ ಜಿಲ್ಲೆಯ ಗ್ರಾಮಗಳಲ್ಲಿ, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಸಮಸ್ಯೆ ತೀವ್ರಗೊಳ್ಳುವುದಕ್ಕೂ ಮುನ್ನವೇ ಎಚ್ಚೆತ್ತು ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು. ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದರು.

ರೆಸಾರ್ಟ್‌ನಲ್ಲಿ ಮೋಜು: ‘ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗದ ಕಾರಣ ಕೋಟ್ಯಂತರ ರೂಪಾಯಿ ಬೆಳೆ ನಷ್ಟವಾಗಿದೆ. ಕೃಷಿ ಕಾರ್ಮಿಕರಿಗೆ ಕೆಲಸ ಇಲ್ಲದೆ ನಗರ ಮತ್ತು ಪಟ್ಟಣ ಪ್ರದೇಶಕ್ಕೆ ಗುಳೆ ಹೋಗುತ್ತಿದ್ದಾರೆ. ಆದರೆ, ಅಧಿಕಾರಿಕ್ಕಾಗಿ ಕಿತ್ತಾಡುತ್ತಿರುವ ಜನಪ್ರತಿನಿಧಿಗಳು ರೆಸಾರ್ಟ್‌ನಲ್ಲಿ ಮೋಜು ಮಾಡುತ್ತಿದ್ದಾರೆ. ಜನಪ್ರತಿನಿಧಿಗಳಿಗೆ ಜನರ ಕಷ್ಟದ ಅರಿವಿಲ್ಲ’ ಎಂದು ಧರಣಿನಿರತರು ಆರೋಪಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಬರ ಅಧ್ಯಯನ ತಂಡಗಳು ಜಿಲ್ಲೆಗೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿವೆ. ಜಿಲ್ಲಾಡಳಿತ ಬರ ಪರಿಹಾರಧನ ಬಿಡುಗಡೆಗೆ ಪ್ರಸ್ತಾವ ಸಲ್ಲಿಸಿದೆ. ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಸರ್ಕಾರಗಳು ಹಣ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿವೆ’ ಎಂದು ದೂರಿದರು.

ನರೇಗಾ ವಿಸ್ತರಿಸಿ: ‘ಆಹಾರ ಧಾನ್ಯಗಳ ಕೊರತೆ ಇರುವುದರಿಂದ ಪಡಿತರ ವ್ಯವಸ್ಥೆಯಲ್ಲಿ ಒಂದು ಕುಟುಂಬಕ್ಕೆ 35 ಕೆ.ಜಿ ಪಡಿತರ ನೀಡಬೇಕು. ಸಮತೋಲನ ಆಹಾರದ ಭಾಗವಾಗಿ ಅಕ್ಕಿಯ ಜತೆಗೆ ಗೋಧಿ ವಿತರಿಸಬೇಕು. ಪ್ರತಿಯೊಬ್ಬರಿಗೂ ನರೇಗಾ ಅಡಿ ಕೆಲಸ ನೀಡಬೇಕು. ಇದನ್ನು ನಗರ ಪ್ರದೇಶಕ್ಕೂ ವಿಸ್ತರಿಸಬೇಕು. ಕಾರ್ಮಿಕರಿಗೆ ನೀಡುವ ಸೌಕರ್ಯಗಳನ್ನು ಸಕಾಲಕ್ಕೆ ಕಲ್ಪಿಸಬೇಕು’ ಎಂದು ಮನವಿ ಮಾಡಿದರು.

ಕೆಪಿಆರ್‌ಎಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಟಿ.ಎಂ.ವೆಂಟಕೇಶ್, ಸಿಐಟಿಯು ಜಿಲ್ಲಾ ಘಟಕದ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ, ಸದಸ್ಯರಾದ ಎನ್‌.ಎನ್‌.ಶ್ರೀರಾಮ, ಶ್ರೀನಿವಾಸ್, ಬಿ.ಎಲ್.ಕೇಶವರಾಜ್, ಮುನಿರಾಜಮ್ಮ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT