ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಡಿಯುವ ವರ್ಗದ ಬಗ್ಗೆ ಕಾಳಜಿ ವಹಿಸಬೇಕು: ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು

Last Updated 30 ಜುಲೈ 2021, 13:36 IST
ಅಕ್ಷರ ಗಾತ್ರ

ಕೋಲಾರ: ‘ಆಳುವ ಸರ್ಕಾರಗಳು ಕಾರ್ಮಿಕರನ್ನು ನಿರ್ಲಕ್ಷಿಸಬಾರದು. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ದುಡಿಯುವ ವರ್ಗದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಕಿವಿಮಾತು ಹೇಳಿದರು.

ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯು ಇಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರಿಗೆ ದಿನಸಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಅಧಿಕಾರಿಗಳು ಸರ್ಕಾರದ ಸವಲತ್ತುಗಳನ್ನು ಕಾರ್ಮಿಕರ ಮನೆ ಬಾಗಿಲಿಗೆ ತಲುಪಿಸಬೇಕು. ಸವಲತ್ತು ನೀಡಿಕೆಯಲ್ಲಿ ಲೋಪವಾಗಬಾರದು’ ಎಂದು ಸೂಚಿಸಿದರು.

‘ಕಾರ್ಮಿಕರು ಶ್ರಮ ಜೀವಿಗಳು. ಅವರ ಶ್ರಮದಿಂದಲೇ ದೇಶ ಬಲಿಷ್ಠವಾಗಿದೆ ಮತ್ತು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಕಾರ್ಮಿಕರಿಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಸರ್ಕಾರ ಹಾಗೂ ಅಧಿಕಾರಿಗಳು ಕಾರ್ಮಿಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಾದ್ಯಂತ ಕಟ್ಟಡ ನಿರ್ಮಾಣ ಕೆಲಸ ಮಾಡುವ 35 ಸಾವಿರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ನೋಂದಾಯಿತರಾಗಿದ್ದಾರೆ. ಆದರೆ, ಸರ್ಕಾರ ಕೇವಲ 2 ಸಾವಿರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್‌ ನೀಡಿದೆ. ಈ ಕಿಟ್‌ಗಳನ್ನು ಯಾರಿಗೆ ಕೊಡುವುದು ಯಾರಿಗೆ ಬಿಡುವುದು? ಅಧಿಕಾರಿಗಳು ಜಿಲ್ಲೆಯಲ್ಲಿನ ಕಟ್ಟಡ ಕಾರ್ಮಿಕರ ಪಟ್ಟಿ ಮಾಡಿ ಸರ್ಕಾರಕ್ಕೆ ಸರಿಯಾದ ಮಾಹಿತಿ ಕೊಡಬೇಕು’ ಎಂದು ಹೇಳಿದರು.

‘ಜಿಲ್ಲೆಯು ಕೈಗಾರಿಕೆಗಳಿಗೆ ಹೆಸರುವಾಸಿಯಾಗಿದೆ. ಜಿಲ್ಲೆಯ ನರಸಾಪುರ, ವೇಮಗಲ್, ಮಾಲೂರು, ದೇವರಾಯಸಮುದ್ರ ಸೇರಿದಂತೆ ಹಲವೆಡೆ ಕೈಗಾರಿಕಾ ಪ್ರದೇಶಗಳು ಕಾರ್ಯಾರಂಭ ಮಾಡಿವೆ. ಇದರಿಂದ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಿವೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಇಎಸ್‌ಐ ಆಸ್ಪತ್ರೆ ಆರಂಭಿಸುವ ನಿಟ್ಟಿನಲ್ಲಿ ಶಾಸಕರ ನಿಯೋಗ ಕರೆದೊಯ್ದು ಮುಖ್ಯಮಂತ್ರಿಗಳ ಜತೆ ಚರ್ಚಿಸುತ್ತೇವೆ’ ಎಂದು ಭರವಸೆ ನೀಡಿದರು.

ಸಮಸ್ಯೆಗೆ ಸ್ಪಂದಿಸಬೇಕು: ‘ಸರ್ಕಾರ ಹಾಗೂ ಅಧಿಕಾರಿಗಳು ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಬೇಕು. ಕಾರ್ಮಿಕರ ಯೋಗಕ್ಷೇಮ ವಿಚಾರಿಸಿ ಅವರ ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.

‘ದೇಶದ ಕಾರ್ಮಿಕರು ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರು 2 ವರ್ಷದಿಂದ ಕೋವಿಡ್‌ ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್‌ಡೌನ್‌ ಹಾಗೂ ಕೋವಿಡ್‌ನಿಂದ ಕೋಟ್ಯಂತರ ಕಾರ್ಮಿಕರು ಕೆಲಸ ಕಳೆದುಕೊಂಡು ನಿತ್ಯದ ಆದಾಯದಿಂದ ವಂಚಿತರಾಗಿದ್ದಾರೆ. ಸಂಪಾದನೆ ಇಲ್ಲದೆ ಕಾರ್ಮಿಕರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಬೀದಿಗೆ ಬಿದ್ದ ಕಾರ್ಮಿಕರಿಗೆ ಆಹಾರ, ಉಚಿತ ವೈದ್ಯಕೀಯ ಸೇವೆ ಒದಗಿಸುವುದು ಎಲ್ಲರ ಜವಾಬ್ದಾರಿ’ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್.ಚೌಡರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಂಜುಂಡಪ್ಪ, ಕಾರ್ಮಿಕ ನಿರೀಕ್ಷಕಿ ಕೆ.ರಾಜೇಶ್ವರಿ, ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕುರ್ಕಿ ರಾಜೇಶ್ವರಿ, ತಾಲ್ಲೂಕು ಘಟಕದ ಅಧ್ಯಕ್ಷ ಬಾಬುಮೌನಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT