ಭಾನುವಾರ, ಅಕ್ಟೋಬರ್ 25, 2020
22 °C
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿಕೆ

ಜೆಡಿಎಸ್‌ ಪಕ್ಷದಲ್ಲಿ ಹೊಂದಾಣಿಕೆ ಕೊರತೆ: ಪರಿಷತ್ ಜೆಡಿಎಸ್‌ ಸದಸ್ಯ ಗೋವಿಂದರಾಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜೆಡಿಎಸ್ ಪಕ್ಷದಲ್ಲಿ ನಾಯಕತ್ವದ ಕೊರತೆಯಿಲ್ಲ. ಆದರೆ, ಹೊಂದಾಣಿಕೆ ಕೊರತೆಯಿದೆ. ವರಿಷ್ಠರು ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಇದನ್ನೆಲ್ಲಾ ಸರಿಪಡಿಸುತ್ತಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜೆಡಿಎಸ್‌ನಲ್ಲಿ ಪಕ್ಷ ಸಂಘಟನೆ ಸಾಲದು. ಎಲ್ಲಾ ಪಕ್ಷಗಳಲ್ಲೂ ಭಿನ್ನಮತ ಸಹಜ. ಕಾಂಗ್ರೆಸ್ ಪಕ್ಷದಲ್ಲೂ ಭಿನ್ನಮತವಿದೆ. ಅದೇ ರೀತಿ ಜೆಡಿಎಸ್‌ನಲ್ಲೂ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿವೆ. ಇದನ್ನೆಲ್ಲಾ ಸರಿಪಡಿಸುತ್ತೇವೆ’ ಎಂದು ತಿಳಿಸಿದರು.

‘ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರು ಮತ್ತು ಮುಖಂಡರ ಸಭೆ ಕರೆಯಲಾಗಿತ್ತು. ಆದರೆ, ಈ ಸಭೆಗೆ ಚುನಾವಣಾ ಅಧಿಕಾರಿಗಳಿಂದ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಚುನಾವಣಾ ಅಧಿಕಾರಿಗಳು ಸಭೆಗೆ ತಡೆಯೊಡ್ಡಿದ್ದರಿಂದ ಸಭೆ ರದ್ದುಪಡಿಸಿದೆವು’ ಎಂದು ವಿವರಿಸಿದರು.

‘ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಆರ್.ಚೌಡರೆಡ್ಡಿ ಅವರು ಈ ಹಿಂದಿನ ಅವಧಿಯಲ್ಲಿ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಸಾಕಷ್ಟು ಕೆಲಸ ಮಾಡಿದ್ದಾರೆ. ಜತೆಗೆ ಪಕ್ಷ ಸಂಘಟನೆಗೂ ಶ್ರಮ ವಹಿಸಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಅವರ ಗೆಲುವು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಗರಕ್ಕೆ ಕೊಡುಗೆ: ‘ಚೌಡರೆಡ್ಡಿ ಅವರು ಪದವೀಧರರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿಲ್ಲ. ನಗರದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಕೋಲಾರದ ಅಭಿವೃದ್ಧಿಗೆ ₹ 18 ಕೋಟಿ ಮಂಜೂರು ಮಾಡಿಸಿದ್ದರು. ಆ ಅನುದಾನದಲ್ಲೇ ಈಗ ಜಿಲ್ಲಾ ಕೇಂದ್ರದ ರಸ್ತೆಗಳ ಅಭಿವೃದ್ಧಿ ಕೆಲಸ ನಡೆಯುತ್ತಿವೆ. ಹೀಗಾಗಿ ಜಿಲ್ಲೆಯ ಮತದಾರರು ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯ 4 ಮಂದಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುವ ಸಾಮರ್ಥ್ಯ ಬೆಳೆಸಿಕೊಂಡಿದ್ದೇವೆ. ಜಿಲ್ಲೆಯ ಮತದಾರರು ಇದೇ ಜಿಲ್ಲೆಯವರಾದ ಚೌಡರೆಡ್ಡಿ ಅವರನ್ನು ಗೆಲ್ಲಿಸುವ ಮೂಲಕ ಹೆಚ್ಚಿನ ಶಕ್ತಿ ತುಂಬಬೇಕು’ ಎಂದು ಕೋರಿದರು.

ಸದನದಲ್ಲಿ ಹೋರಾಟ: ‘ಚೌಡರೆಡ್ಡಿ ಅವರು ವಿಧಾನ ಪರಿಷತ್ ಸದಸ್ಯರಾಗಿ 6 ವರ್ಷಗಳಿಂದ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ, ಅನುದಾನಿತ ಶಾಲೆಗಳು ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಸಲು ಹೆಚ್ಚಿನ ಆಸಕ್ತಿ ತೋರಿದ್ದಾರೆ. ಶಿಕ್ಷಕರು ಮತ್ತು ಅರೆಕಾಲಿಕ ಉಪನ್ಯಾಸಕರ ವೇತನ, ಸೇವಾ ಭದ್ರತೆ ಸಂಬಂಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಾ ಬಂದಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ನಾರಾಯಣಸ್ವಾಮಿ ಹೇಳಿದರು.

‘ಚೌಡರೆಡ್ಡಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಹೆಗಲು ಕೊಟ್ಟು ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನೀರಾವರಿ ಹೋರಾಟದ ಸಭೆಗಳಲ್ಲಿ ಭಾಗವಹಿಸಿದ್ದಾರೆ. ಎತ್ತಿನ ಹೊಳೆ, ಕೆ.ಸಿ ವ್ಯಾಲಿ ಯೋಜನೆಗಳಿಗೂ ಬೆಂಬಲ ನೀಡುತ್ತಾ ಬಂದಿದ್ದಾರೆ’ ಎಂದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಾಬುಮೌನಿ, ಪಕ್ಷದ ಮುಖಂಡರಾದ ಶ್ರೀನಾಥ್, ಗೋಪಾಲ್, ರಾಮು, ನಟರಾಜ್, ನಂಜುಂಡಗೌಡ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು