ಶನಿವಾರ, ಸೆಪ್ಟೆಂಬರ್ 25, 2021
22 °C
7ರಂದು ಉಮೇದುವಾರಿಕೆ ಪರಿಶೀಲನೆ

ಕೋಚಿಮುಲ್‌ ಚುನಾವಣೆ: ಕೊನೆ ದಿನ 56 ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಕೋಚಿಮುಲ್) ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದ ಸೋಮವಾರ 56 ನಾಮಪತ್ರ ಸಲ್ಲಿಕೆಯಾಗಿವೆ.

ಆಡಳಿತ ಮಂಡಳಿಯ 13 ನಿರ್ದೇಶಕರ ಸ್ಥಾನಗಳಿಗೆ ಮೇ 13ರಂದು ಚುನಾವಣೆ ನಡೆಯಲಿದೆ. 13 ನಿರ್ದೇಶಕರ ಸ್ಥಾನಗಳ ಪೈಕಿ ಕೋಲಾರ ಜಿಲ್ಲೆಗೆ 6 ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ 7 ಸ್ಥಾನ ಹಂಚಿಕೆಯಾಗಿದ್ದು, ಒಕ್ಕೂಟದ ಸದಸ್ಯ ಸಹಕಾರ ಸಂಘಗಳ ಪ್ರತಿನಿಧಿಗಳು ಮತ ಚಲಾಯಿಸುತ್ತಾರೆ.

ಕಡೆಯ ದಿನ ನಾಮಪತ್ರ ಸಲ್ಲಿಕೆಗೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಮಾಲೂರು ತಾಲ್ಲೂಕಿನಿಂದ 4, ಬಂಗಾರಪೇಟೆ 4, ಕೋಲಾರ 6, ಮುಳಬಾಗಿಲು 3, ಶ್ರೀನಿವಾಸಪುರ 5, ಶಿಡ್ಲಘಟ್ಟ 3, ಚಿಕ್ಕಬಳ್ಳಾಪುರ 7, ಗೌರಿಬಿದನೂರು 4, ಚಿಂತಾಮಣಿ 4, ಬಾಗೇಪಲ್ಲಿ 2, ಗುಡಿಬಂಡೆ 3 ಮಂದಿ ಉಮೇದುವಾರಿಕೆ ಸಲ್ಲಿಸಿದರು.

ಜಿಲ್ಲಾವಾರು ಮತ ಕ್ಷೇತ್ರದ ಒಕ್ಕೂಟದ ಸರ್ವ ಸದಸ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಗಳ ಕ್ಷೇತ್ರದಿಂದ ಕೋಲಾರದ 6 ಮತ್ತು ಚಿಕ್ಕಬಳ್ಳಾಪುರದ 5 ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯಾದವು.

ಶಾಸಕರ ಸಾಥ್‌: ಕೋಚಿಮುಲ್‌ನ ಹಾಲಿ ನಿರ್ದೇಶಕರು ಸೇರಿದಂತೆ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರತಿನಿಧಿಗಳು ಸಹ ಹೊಸದಾಗಿ ಉಮೇದುವಾರಿಕೆ ಸಲ್ಲಿಸಿದರು. ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಬಂದು ಉಪ ವಿಭಾಗಾಧಿಕಾರಿ ಸೋಮಶೇಖರ್‌ ಅವರಿಗೆ ನಾಮಪತ್ರ ಸಲ್ಲಿಸಿದರು. ಕೆಲ ಅಭ್ಯರ್ಥಿಗಳಿಗೆ ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ್, ಮಾಜಿ ಶಾಸಕರಾದ ಕೊತ್ತೂರು ಜಿ.ಮಂಜುನಾಥ್, ಕೆ.ಎಸ್.ಮಂಜುನಾಥಗೌಡ ಸಾಥ್ ನೀಡಿದರು. ಹಾಲಿ ಅಧ್ಯಕ್ಷ ಹಾಗೂ ಮಾಲೂರು ಶಾಸಕ ಕೆ.ವೈ.ನಂಜೇಗೌಡರು ನಾಮಪತ್ರ ಸಲ್ಲಿಸಿರುವವರಲ್ಲಿ ಪ್ರಮುಖರು.

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದ ಉಪ ವಿಭಾಗಾಧಿಕಾರಿ ಕಚೇರಿ ಬಳಿ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿತ್ತು.

ನಾಮಪತ್ರ ಪರಿಶೀಲನೆ: ಮಂಗಳವಾರ (ಮೇ 7) ಬೆಳಿಗ್ಗೆ 11ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮೇ 8 ಕಡೆಯ ದಿನ. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾಧಿಕಾರಿಯು ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಾರೆ. ನಂತರ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ಮಾಡುತ್ತಾರೆ.

ನಗರದ ಗೋಕುಲ್ ಕಾಲೇಜಿನಲ್ಲಿ ಮೇ 13ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರವರೆಗೆ ಚುನಾವಣೆ ನಡೆಯುತ್ತದೆ. ಅದೇ ದಿನ ಸಂಜೆ ಮತ ಎಣಿಕೆ ಮಾಡಿ ಚುನಾವಣಾ ಫಲಿತಾಂಶ ಘೋಷಿಸಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು