ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಶಾಲೆ ವ್ಯಾಮೋಹ ಬಿಡಿ

ಪೋಷಕರಿಗೆ ಜಿ.ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ರೂಪಶ್ರೀ ಕಿವಿಮಾತು
Last Updated 22 ಜನವರಿ 2020, 16:14 IST
ಅಕ್ಷರ ಗಾತ್ರ

ಕೋಲಾರ: ‘ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಡಬೇಕು. ನೈತಿಕ ಮೌಲ್ಯ ಮತ್ತು ಸಮಾಜದಲ್ಲಿ ಸೌಹಾರ್ದತೆಯಿಂದ ಬದುಕುವ ಕೌಶಲ ಕಲಿಸುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ರೂಪಶ್ರೀ ಕಿವಿಮಾತು ಹೇಳಿದರು.

ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಬುಧವಾರ ಸರ್ಕಾರಿ ಪ್ರೌಢ ಶಾಲಾ ಹಬ್ಬ ಉದ್ಘಾಟಿಸಿ ಮಾತನಾಡಿ, ‘ಖಾಸಗಿ ಕಾನ್ವೆಂಟ್ ಸಂಸ್ಕೃತಿಯಲ್ಲಿ ಮಕ್ಕಳಿಗೆ ಇಂಗ್ಲಿಷ್‌ ಕಲಿಸಬಹುದು. ಆದರೆ, ಸಮಾಜದಲ್ಲಿ ಬಡವರು, ಉಳ್ಳವರ ನಡುವೆ ಹೊಂದಿಕೊಂಡು ಬದುಕುವ ಕಲೆ ಕಲಿಸುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರಿಗೂ ಜವಾಬ್ದಾರಿಯಿದೆ. ಮನೆಯಲ್ಲಿ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸುವುದು ಪೋಷಕರ ಜವಾಬ್ದಾರಿ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ಫಲಿತಾಂಶವೂ ಸುಧಾರಿಸಿದೆ’ ಎಂದು ತಿಳಿಸಿದರು.

‘ಅರಾಭಿಕೊತ್ತನೂರು ಶಾಲೆಯು ಸರ್ಕಾರಿ ಶಾಲೆಗಳಿಗೆ ಮಾದರಿಯಾಗಿದೆ. ಅಕ್ಕಪಕ್ಕದ ಖಾಸಗಿ ಶಾಲೆಗಳು ಈ ಶಾಲೆಗೆ ದಾಖಲಾಗುತ್ತಿದ್ದಾರೆ. ಶಾಲೆಗೆ ಸಭಾಂಗಣ ನಿರ್ಮಿಸಿಕೊಡಲು ಅನುದಾನ ಬಿಡುಗಡೆ ಮಾಡಿಸುತ್ತೇನೆ. ತರಗತಿ ಕೊಠಡಿ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಉದ್ಘಾಟಿಸುತ್ತೇವೆ’ ಎಂದರು.

ಬಡತನ ಅಡ್ಡಿಯಲ್ಲ: ‘ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಮಾತು ಸತ್ಯ. ಮಕ್ಕಳನ್ನು ಶಾಲೆಗೆ ಕಳುಹಿಸಿದರೆ ತಮ್ಮ ಜವಾಬ್ದಾರಿ ಮುಗಿಯಿತು ಎಂಬ ಭಾವನೆ ಬೇಡ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ಯಯ್ಯ ಹೇಳಿದರು.

‘ತಾಯಂದಿರು ಕನಿಷ್ಠ ತಿಂಗಳಿಗೊಮ್ಮೆ ಶಾಲೆಗೆ ಬಂದು ಮಕ್ಕಳ ನಡೆ, ಕಲಿಕೆ ಪ್ರಗತಿ ಬಗ್ಗೆ ವಿಚಾರಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅಂಬೇಡ್ಕರ್, ಅಬ್ದುಲ್‌ ಕಲಾಂ, ವಿಶ್ವೇಶ್ವರಯ್ಯ ಎಲ್ಲರೂ ಬಡ ಕುಟುಂಬದಿಂದ ಬಂದವರು, ಅವರೆಲ್ಲಾ ಸರ್ಕಾರಿ ಶಾಲೆಗಳಲ್ಲಿ ಓದಿ ಸಾಧಕರಾಗಿದ್ದಾರೆ. ಮಕ್ಕಳು ಅವರ ಆದರ್ಶ ಮಕ್ಕಳು ಪಾಲಿಸಬೇಕು, ಕಲಿಕೆಗೆ ಬಡತನ ಅಡ್ಡಿಯಲ್ಲ. ಮಕ್ಕಳಲ್ಲಿ ಶ್ರದ್ಧೆ, ಆಸಕ್ತಿಯಿದ್ದರೆ ಏನೂ ಬೇಕಾದರೂ ಸಾಧಿಸಬಹುದು’ ಎಂದು ಸಲಹೆ ನೀಡಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆ ಹತ್ತಿರವಾಗುತ್ತಿದ್ದು, ಮಕ್ಕಳ ಆಸಕ್ತಿ ಕಲಿಕೆ ಕಡೆ ಇರಬೇಕು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು. ಸರ್ಕಾರಿ ಶಾಲೆಗಳ ಮಕ್ಕಳು ಮಹಾನ್ ಸಾಧಕರಾಗಬಹುದು ಎಂಬುದನ್ನು ಸಾಧಿಸಿ ತೋರಿಸಬೇಕು’ ಎಂದು ಆಶಿಸಿದರು.

ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತಿರ್ಣರಾಗಿರುವ ಮುನಿಸ್ವಾಮಿರೆಡ್ಡಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆ ಹಾಗೂ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಮನಸೂರೆಗೊಂಡಿತು.

ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್, ವಿಷಯ ಪರಿವೀಕ್ಷ ಕೃಷ್ಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮುನಿಯಪ್ಪ, ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್‌ಕುಮಾರ್, ಶಿಕ್ಷಕರಾದ ಸಚ್ಚಿದಾನಂದಮೂರ್ತಿ, ಎಸ್.ಅನಂತ ಪದ್ಮನಾಭ್, ಶ್ವೇತಾ, ಸುಗುಣಾ, ಭವಾನಿ, ಲೀಲಾ, ಫರೀದಾ, ವೆಂಕಟರೆಡ್ಡಿ, ಶ್ರೀನಿವಾಸಲು, ಡಿ.ಚಂದ್ರಶೇಖರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT