ಶನಿವಾರ, ನವೆಂಬರ್ 28, 2020
26 °C
ಕೇಂದ್ರ ಅಧ್ಯಯನ ತಂಡದ ಸದಸ್ಯ ಅನಿಲ್ ಗಾಯಕ್‌ವಾಡ್‌ ಸೂಚನೆ

ಸಾರ್ವಜನಿಕವಾಗಿ ಫಲಾನುಭವಿ ಆಯ್ಕೆ ನಡೆಯಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ‘ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನ, ಯೋಜನೆಗಳ ಮಾರ್ಗಸೂಚಿ ಪಾಲನೆ ಮತ್ತು ಪಾರದರ್ಶಕತೆ ಅಂಶಗಳ ಕುರಿತು ಸಮಗ್ರ ಪರಿಶೀಲನೆ ನಡೆಸುತ್ತೇವೆ’ ಎಂದು ಕೇಂದ್ರ ಅಧ್ಯಯನ ತಂಡದ ಸದಸ್ಯ ಅನಿಲ್ ಗಾಯಕ್‌ವಾಡ್‌ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಯೋಜನೆಗಳ ಸಂಬಂಧ ಇಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಸರ್ಕಾರಿ ಯೋಜನೆಗಳ ಅನುಷ್ಠಾನ, ಫಲಾನುಭವಿಗಳ ಆಯ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮನೆ ಮುಂದೆ ನಡೆಯಬಾರದು. ಬದಲಿಗೆ ಸಾರ್ವಜನಿಕರ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆಯಬೇಕು’ ಎಂದರು.

‘ಯೋಜನೆಗಳು ಸರ್ಕಾರದ ನಿಯಮಾನುಸಾರ ಹಾಗೂ ಮಾರ್ಗಸೂಚಿ ಅನ್ವಯ ಜಾರಿಯಾಗಬೇಕು. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಯೋಜನೆಗಳಲ್ಲಿ ಆಗಬೇಕಾದ ಸುಧಾರಣೆಗಳ ಬಗ್ಗೆ ಗ್ರಾ.ಪಂ ಮಟ್ಟದಲ್ಲಿ ಕ್ಷೇತ್ರ ಭೇಟಿ ವೇಳೆ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸುತ್ತೇವೆ’ ಪರಿಶೀಲಿಸಲಾಗುವುದು ಎಂದು ಹೇಳಿದರು.

‘ಸರ್ಕಾರಿ ಕಚೇರಿಗಳು ಹಾಗೂ ಅಂಗನವಾಡಿ ಕಟ್ಟಡಗಳ ಸುತ್ತ ಕಾಂಪೌಂಡ್ ನಿರ್ಮಿಸಲು ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮನವಿ ಮಾಡಿದರು.

‘ಕೇಂದ್ರದ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಸದ್ಯ ₹ 1.20 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಈ ಮೊತ್ತ ಕಡಿಮೆ ಇರುವುದರಿಂದ ಇಂದಿನ ಮಾರುಕಟ್ಟೆ ದರದಲ್ಲಿ ಮನೆ ನಿರ್ಮಿಸಿಕೊಳ್ಳಲು ಫಲಾನುಭವಿಗಳಿಗೆ ಸಾಧ್ಯವಾಗುತ್ತಿಲ್ಲ. ಆದ ಕಾರಣ ಸಹಾಯಧನವನ್ನು ₹ 4 ಲಕ್ಷಕ್ಕೆ ಹೆಚ್ಚಿಸಬೇಕು’ ಎಂದು ಕೋರಿದರು.

‘ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಿಸಿದ ಶೌಚಾಲಯಗಳನ್ನು ಜನರು ಬಳಸುತ್ತಿರಲಿಲ್ಲ. ಈಗ ಜನರ ಮನಸ್ಥಿತಿ ಬದಲಾಗಿದ್ದು, ಶೌಚಾಲಯ ಬಳಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸಲಾಗುತ್ತಿದೆ. ನೀಲಗಿರಿ ಮರಗಳ ತೆರವಿಗೆ ನರೇಗಾ ಯೋಜನೆಯಡಿ ಸಹಾಯಧನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು’ ಎಂದು ಹೇಳಿದರು.

ಗುರಿ ಸಾಧನೆ: ‘ನರೇಗಾದಲ್ಲಿ ಈ ವರ್ಷ 55.41 ಲಕ್ಷ ಮಾನವ ದಿನ ಸೃಜಿಸುವ ಗುರಿ ನೀಡಲಾಗಿತ್ತು. ಈಗಾಗಲೇ 42.70 ಲಕ್ಷ ಮಾನವ ದಿನಗಳ ಕೆಲಸ ಮಾಡಲಾಗಿದ್ದು, ಶೇ 77.07ರಷ್ಟು ಗುರಿ ಸಾಧನೆಯಾಗಿದೆ. ಪಿಆರ್‌ಇಡಿ, ಅರಣ್ಯ, ಕೃಷಿ, ರೇಷ್ಮೆ, ತೋಟಗಾರಿಕೆ ಇಲಾಖೆಗಳಲ್ಲಿ ಶೇ 85ರಷ್ಟು ಗುರಿ ಸಾಧಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್‌ ವಿವರಿಸಿದರು.

‘ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 1,785 ಮನೆಗಳ ನಿರ್ಮಾಣದ ಗುರಿಯಿದ್ದು, ಈಗಾಗಲೇ 1,586 ಮನೆಗಳು ನಿರ್ಮಾಣ ಹಂತದಲ್ಲಿವೆ. ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 20 ಯೋಜನೆಗಳನ್ನು ಆಯ್ಕೆ ಮಾಡಿಕೊಂಡು 159 ಕಿ.ಮೀ ರಸ್ತೆ ನಿರ್ಮಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ತ್ಯಾಜ್ಯ ವಿಲೇವಾರಿ ಘಟಕ: ‘ಸ್ವಚ್ಛ ಸಂಕೀರ್ಣ ಯೋಜನೆಯಡಿ ಜಿಲ್ಲೆಯ 156 ಗ್ರಾ.ಪಂಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿದೆ. ಜಿಲ್ಲಾಧಿಕಾರಿಯು ಈಗಾಗಲೇ 153 ಗ್ರಾ.ಪಂಗಳಿಗೆ ಜಾಗ ನೀಡಿದ್ದಾರೆ. 112 ಶಾಲಾ ಶೌಚಾಲಯ ನಿರ್ಮಿಸುವ ಗುರಿಯಿದ್ದು, ಈಗಾಗಲೇ 110 ಶೌಚಾಲಯ ನಿರ್ಮಿಸಲಾಗಿದೆ. 248 ಅಂಗನವಾಡಿ ಶೌಚಾಲಯ ನಿರ್ಮಾಣದ ಗುರಿಯಿದೆ’ ಎಂದರು.

ಕೇಂದ್ರ ಅಧ್ಯಯನ ತಂಡದ ಸದಸ್ಯ ವಿನಾಯಕ್‌, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.