ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಜಿ.ಕೆ.ವೆಂಕಟಶಿವಾರೆಡ್ಡಿ

ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ ಆಗ್ರಹ
Last Updated 20 ಸೆಪ್ಟೆಂಬರ್ 2021, 8:52 IST
ಅಕ್ಷರ ಗಾತ್ರ

ಶ್ರೀನಿವಾಸಪುರ: ಕೋಲಾರದ ಶಾಸಕ ಕೆ.ಶ್ರೀನಿವಾಸಗೌಡ ಯಾವುದೇ ಪಕ್ಷ ಸೇರುವ ಮೊದಲು, ಶಾಸಕ ಸ್ಥಾನ ಹಾಗೂ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಆಗ್ರಹಿಸಿದರು.

ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಶಾಸಕ ಕೆ.ಶ್ರೀನಿವಾಸಗೌಡ ಜಿಲ್ಲೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವುದರ ಮೂಲಕ ತಿಂದ ಮನೆಗೆ ದ್ರೋಹ ಬಗೆದಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನ್ಯ ಪಕ್ಷದ ಮುಖಂಡರೊಬ್ಬರನ್ನು ಗೆಲ್ಲಿಸುವಂತೆ ಮತದಾರರಿಗೆ ಕರೆ ನೀಡುವುದರ ಮೂಲಕ ಪಕ್ಷದ ಶಿಸ್ತನ್ನು ಗಾಳಿಗೆ ತೂರಿದ್ದಾರೆ ಎಂದು ಹೇಳಿದರು.

ಈ ಇಬ್ಬರು ಮುಖಂಡರು ಪರಸ್ಪರ ಹೊಗಳುವ ಮೂಲಕ ಮತದಾರರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮತದಾರರು ಪ್ರಬುದ್ಧರೆಂಬುದನ್ನು ಮರೆತು ಮಾತನಾಡುತ್ತಿದ್ದಾರೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಹೆಸರನ್ನು ಹೇಳದೆ ಟೀಕಿಸಿದರು.

ಕೆ.ಶ್ರೀನಿವಾಸಗೌಡ ತಮ್ಮ ಮಗನನ್ನು ಹೋಳೂರು ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬೇರೆ ಪಕ್ಷದಿಂದ ಸ್ಪರ್ಧೆಗೆ ಇಳಿಸಲು ಸಜ್ಜಾಗಿದ್ದಾರೆ. ಮತದಾರರಿಗೆ ಗಾಳ ಹಾಕಲು ಪರಸ್ಪರ ಸ್ನೇಹದ ಮಾತನ್ನಾಡುತ್ತಿದ್ದಾರೆ. ವಾಸ್ತವದಲ್ಲಿ ಮತ ರಾಜಕೀಯಕ್ಕಾಗಿ ಮಗನನ್ನು ಬಲಿಪಶು ಮಾಡಲಾಗುತ್ತಿದೆ. ಮತದಾರರು ಅಳೆದು ತೂಗಿ ನೋಡುತ್ತಾರೆ ಎಂದು ಅಭಿಪ್ರಾಯಪಟ್ಟರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಥವಾ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಟೀಕಿಸುವ ಅರ್ಹತೆ ಶ್ರೀನಿವಾಸಗೌಡರಿಗೆ ಇಲ್ಲ. ದೇವೇಗೌಡರು ಪ್ರಧಾನಮಂತ್ರಿಯಾಗಿದ್ದಾಗ ಅವರಿಂದ ಸಾಕಷ್ಟು ಅನುಕೂಲ ಪಡೆದುಕೊಂಡಿದ್ದಾರೆ. ಈಗ ಸ್ವಾರ್ಥ ಸಾಧನೆಗಾಗಿ ಅವರ ಕುಟುಂಬವನ್ನು ಟೀಕಿಸುತ್ತಿದ್ದಾರೆ ಎಂದು ಹೇಳಿದರು.

ಅವಳಿ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಜಾರಿಯಲ್ಲಿ ಎರಡು ಬಾರಿ ಮುಖ್ಯ ಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಪಾತ್ರವಿದೆ. ರಾಜ್ಯದ 45 ಸಾವಿರ ರೈತರಿಗೆ 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಹೆಗ್ಗಳಿಕೆ ಅವರದು. ಪರಿಸ್ಥಿತಿ ಹೀಗಿರುವಾಗ ಅವರ ಮೇಲೆ ಆಧಾರ ರಹಿತ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇಷ್ಟಕ್ಕೂ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಲಿ, ರಾಜ್ಯ ಘಟಕದ ಅಧ್ಯಕ್ಷರಾಗಲಿ ಶ್ರೀನಿವಾಸಗೌಡರ ವಿರುದ್ಧ ಯಾವುದೇ ಶಿಸ್ತುಕ್ರಮ ಕೈಗೊಂಡಿಲ್ಲ. ಆ ಬಗ್ಗೆ ಖಾತ್ರಿ ಪಡಿಸಿಕೊಂಡಿದ್ದೇನೆ. ಆದರೆ ಶ್ರೀನಿವಾಸಗೌಡರು ಪ್ರಚಾರಕ್ಕಾಗಿ ಕಾಂಗ್ರೆಸ್ ಸೇರುವುದಾಗಿ ಹೇಳಿಕೆ ನೀಡಿದ್ದಾರೆ. ಅವರು ಬೇರೆ ಪಕ್ಷ ಸೇರುವುದಕ್ಕೆ ಯಾವುದೇ ತಕರಾರಿಲ್ಲ. ಆದರೆ ಅದಕ್ಕೂ ಮೊದಲು ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಬಿ.ವೆಂಕಟರೆಡ್ಡಿ, ಕೆ.ಜೆ.ಬಾಬು ಮೌನಿ, ಆನಂದ್, ಕೆ.ಶಿವಪ್ಪ, ಪೂಲ ಶಿವಾರೆಡ್ಡಿ, ಜಗದೀಶ್, ಶ್ರೀನಾಥ ಬಾಬು, ಸಂತೋಷ್, ವೇಣುಗೋಪಾಲರೆಡ್ಡಿ, ಶ್ರೀನಿವಾಸ್, ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT