ಶುಕ್ರವಾರ, ಜೂನ್ 18, 2021
20 °C
ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಾರೆಡ್ಡಿ ಗುಡುಗು

ಕ್ವಿಟ್ ಬಿಜೆಪಿ ಆಂದೋಲನ ನಡೆಯಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ‘ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರನ್ನು ಭಾರತದಿಂದ ತೊಲಗಿಸಲು ಕ್ವಿಟ್ ಇಂಡಿಯಾ ಚಳವಳಿ ಪ್ರಾರಂಭಿಸಿದ ಕಾಂಗ್ರೆಸ್ ಪಕ್ಷವು ದೇಶದ ಸರ್ವತ್ತೋಮುಖ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.

ಕ್ವಿಟ್ ಇಂಡಿಯಾ ಸ್ಮರಣೆ ಪ್ರಯುಕ್ತ ಇಲ್ಲಿ ಸೋಮವಾರ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ ತಂದು ಕೊಡುವಲ್ಲಿ ಕಾಂಗ್ರೆಸ್‌ ನಿರ್ಣಾಯಕ ಪಾತ್ರ ವಹಿಸಿತು’ ಎಂದರು.

‘ಕ್ವಿಟ್ ಇಂಡಿಯಾ ಆಂದೋಲನವು ಕಾಂಗ್ರೆಸ್ ಪಕ್ಷದ ಸಾಧನೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕವಾದರೂ ಜನತೆ ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತ ಇದಕ್ಕೆ ಕಾರಣ. ದೇಶವನ್ನು ಬಿಜೆಪಿ ಮುಕ್ತವಾಗಿಸಲು ಕ್ವಿಟ್ ಬಿಜೆಪಿ ಆಂದೋಲನ ಆರಂಭವಾಗಬೇಕು’ ಎಂದು ಕಿಡಿಕಾರಿದರು.

‘6 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮೋದಿ ಅವರ ಜನವಿರೋಧಿ ನೀತಿಗಳಿಂದ ದೇಶದ ಅರ್ಥ ವ್ಯವಸ್ಥೆ ಬುಡ ಮೇಲಾಗಿದೆ. ಅರ್ಥ ವ್ಯವಸ್ಥೆ 50 ವರ್ಷಗಳಷ್ಟು ಹಿಂದಕ್ಕೆ ಸರಿದಿದೆ. ಜನರೇ ಬಿಜೆಪಿಯನ್ನು ದೇಶದಿಂದ ಉಚ್ಛಾಟಿಸುವ ಕಾಲ ಹತ್ತಿರ ಬಂದಿದೆ’ ಎಂದು ಗುಡುಗಿದರು.

ಇತಿಹಾಸಕ್ಕೆ ನಾಂದಿ: ‘ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ. ಬ್ರಿಟೀಷರ ದಾಸ್ಯದಿಂದ ಭಾರತೀಯರನ್ನು ಬಿಡುಗಡೆಗೊಳಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸಕ್ಕೆ ನಾಂದಿ ಹಾಡಿತು. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ನಡೆದ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯು ಅಸಹಕಾರ ಚಳವಳಿಯಾಗಿತ್ತು. ಸ್ವಾತಂತ್ರ್ಯ ಪಡೆಯುವುದು ಈ ಚಳವಳಿಯ ಗುರಿಯಾಗಿತ್ತು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ವಿವರಿಸಿದರು.

‘ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ನಾಯಕರ ಬಲಿದಾನ ಸ್ಮರಿಸಬೇಕು. ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಖಂಡಿತ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಉಪಾಧ್ಯಕ್ಷ ಮುರಳಿ, ಕಿಸಾನ್‌ ಖೇತ್‌ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಕೆಪಿಸಿಸಿ ಕಾರ್ಯದರ್ಶಿ ಕುಮಾರ್ ಪಾಲ್ಗೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.